ಬೆಂಗಳೂರು: ದುಷ್ಕರ್ಮಿಗಳಿಂದ ಹತ್ಯೆಗೊಳಗಾಗಿದ್ದ ಬೆಳ್ಳಾರೆಯ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಅವರ ಪತ್ನಿ ನೂತನ ಅವರಿಗೆ ಸಿಎಂ ಸಚಿವಾಲಯದಲ್ಲಿ ಗುತ್ತಿಗೆ ಆಧಾರದ ನೆಲೆಯಲ್ಲಿ ನೇಮಕಾತಿ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಈ ನೇಮಕ ಆದೇಶವನ್ನು ಬಿಜೆಪಿ ಕರ್ನಾಟಕದ ಅಫಿಶಿಯಲ್ ಟ್ವಿಟ್ಟರ್ ಪೇಜ್ ನಲ್ಲಿ ಶೇರ್ ಮಾಡಿಕೊಂಡಿದ್ದು, ಮತಾಂಧರಿಂದ ಹತ್ಯೆಗೊಳಗಾದ ಬಿಜೆಪಿ ಕಾರ್ಯಕರ್ತ ದಿವಂಗತ ಪ್ರವೀಣ್ ನೆಟ್ಟಾರ್ ಅವರ ಪತ್ನಿ ಶ್ರೀಮತಿ ನೂತನ ಕುಮಾರಿ ಎಂ. ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿ ಸಚಿವಾಲಯದಲ್ಲಿನ ಗ್ರೂಪ್ ಸಿ ಹುದ್ದೆಗೆ ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ.
ಬಿಜೆಪಿ ಕಾರ್ಯಕರ್ತರ ಹಿತರಕ್ಷಣೆಗೆ ಬದ್ಧವಾಗಿದೆ ಎಂದು ಹೇಳಿಕೊಂಡಿದೆ.ದಿವಂಗತ ಪ್ರವೀಣ್ ನೆಟ್ಟಾರು ಅವರ ಪತ್ನಿಗೆ ಮುಖ್ಯಮಂತ್ರಿ ಸಚಿವಾಲಯದಲ್ಲಿ ಉದ್ಯೋಗ ಕೊಡಿಸುವುದಾಗಿ ಸ್ವತಃ ಸಿಎಂ ಬಸವರಾಜ ಬೊಮ್ಮಾಯಿ ಇತ್ತೀಚೆಗೆ ದೊಡ್ಡಬಳ್ಳಾಪುರದಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಪ್ರಕಟಿಸಿದ್ದರು.
ಅದರಂತೆ ಇದೀಗ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಅಧೀನ ಕಾರ್ಯದರ್ಶಿ ಈ ಸಂಬಂಧ ಅಧಿಕೃತ ಆದೇಶ ಹೊರಡಿಸಿದ್ದಾರೆ.ಸುಳ್ಯ ತಾಲೂಕು ಬೆಳ್ಳಾರೆಯ ನೆಟ್ಟಾರು ನಿವಾಸಿ ನೂತನಾ ಕುಮಾರಿ ಅವರಿಗೆ ಮುಖ್ಯಮಂತ್ರಿಗಳ ಸಚಿವಾಲಯದಲ್ಲಿ ಗುತ್ತಿಗೆ ಆಧಾರದಲ್ಲಿ ಸಿ ಗ್ರೂಪ್ ನೌಕರ ಹುದ್ದೆ ನೀಡಲಾಗುತ್ತದೆ. ಮುಖ್ಯಮಂತ್ರಿಯವರ ಪದಾಧಿಕಾರದವರೆಗೆ ಅಥವಾ ಮುಂದಿನ ಆದೇಶದವರೆಗೆ ಈ ಹುದ್ದೆ ಇರುತ್ತದೆ. ಗುತ್ತಿಗೆ ಆಧಾರದ ಹುದ್ದೆಗಳ ನಿಯಮಾವಳಿಗಳಿಗೆ ಇದು ಒಳಪಟ್ಟಿರುತ್ತದೆ. ವೇತನ ಮಾಸಿಕ 30 ಸಾವಿರದ 350 ರೂಪಾಯಿ ಇರಲಿದೆ.
