ಬಂಟ್ವಾಳ: ತಾಲೂಕಿನ ಸಜಿಪಮುನ್ನೂರು ಗ್ರಾಮದ ದಾಸರಗುಡ್ಡೆ ಪ್ರದೇಶದಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.
ಗಾಯಗೊಂಡವರನ್ನು ಉಳ್ಳಾಲ ತಾಲೂಕಿನ ಬೋಳಿಯಾರು ಗ್ರಾಮದ ಭಾರತಿ (48) ಎಂದು ಗುರುತಿಸಲಾಗಿದೆ.
ಮಾಹಿತಿಯ ಪ್ರಕಾರ, ಭಾರತಿ ಅವರು ತಮ್ಮ ಮಗಳೊಂದಿಗೆ ಮಾರ್ಚ್ 30ರಂದು ದಾಸರಗುಡ್ಡೆ ಪ್ರದೇಶಕ್ಕೆ ಗುಳಿಗಜ್ಜ ಕಟ್ಟೆಗೆ ಹಣ ಹಾಕುವ ಸಲುವಾಗಿ ಬೆಳಿಗ್ಗೆ ಬಂದಿದ್ದರು. ಈ ವೇಳೆ ಮೆಲ್ಕಾರ್–ಮುಡಿಪು ರಾಜ್ಯ ಹೆದ್ದಾರಿಯನ್ನು ದಾಟಿ ರಸ್ತೆ ಅಂಚಿಗೆ ತಲುಪುತ್ತಿದ್ದಾಗ, ಮೆಲ್ಕಾರ್ ಕಡೆಯಿಂದ ಮುಡಿಪು ಕಡೆಗೆ ಬರುತ್ತಿದ್ದ ಕಾರು ಏಕಾಏಕಿ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ಪರಿಣಾಮ ಭಾರತಿ ಅವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಸ್ತುತ ಅವರು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.
ಈ ಸಂಬಂಧ ಬಂಟ್ವಾಳ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.
👉 ಸ್ಥಳೀಯರು ಈ ಹೆದ್ದಾರಿಯಲ್ಲಿ ವಾಹನಗಳ ವೇಗ ನಿಯಂತ್ರಣ ಹಾಗೂ ಪಾದಚಾರಿಗಳಿಗೆ ಸುರಕ್ಷತಾ ಕ್ರಮಗಳನ್ನು ಬಲಪಡಿಸುವಂತೆ ಆಗ್ರಹಿಸಿದ್ದಾರೆ.
