ಕುಂದಾಪುರ, ಜು. 30: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಆಯೋಜಿಸಲಾಗುತ್ತಿರುವ ರಾಷ್ಟ್ರಮಟ್ಟದ ಉಚಿತ ಬೃಹತ್ ಉದ್ಯೋಗ ಮೇಳ ‘16ನೇ ಆಳ್ವಾಸ್ ಪ್ರಗತಿ–2026’ ಆಗಸ್ಟ್ 7 ಮತ್ತು 8ರಂದು ಮೂಡುಬಿದಿರೆಯ ಆಳ್ವಾಸ್ ವಿದ್ಯಾಗಿರಿ ಕ್ಯಾಂಪಸ್ನಲ್ಲಿ ನಡೆಯಲಿದೆ. ಈ ಬಾರಿ ಸುಮಾರು 350ಕ್ಕೂ ಅಧಿಕ ಕಂಪನಿಗಳು ಭಾಗವಹಿಸುವ ನಿರೀಕ್ಷೆಯಿದ್ದು, 24,298ಕ್ಕೂ ಹೆಚ್ಚು ಉದ್ಯೋಗಾವಕಾಶಗಳು ಲಭ್ಯವಾಗಲಿವೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ ಆಳ್ವ ತಿಳಿಸಿದ್ದಾರೆ.
ಗುರುವಾರ ನಗರದ ಪತ್ರಿಕಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ 326ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು ಉದ್ಯೋಗ ಮೇಳಕ್ಕೆ ನೋಂದಾಯಿಸಿಕೊಂಡಿವೆ ಎಂದು ತಿಳಿಸಿದರು. ಮಾಹಿತಿ ತಂತ್ರಜ್ಞಾನ (IT), ಐಟಿಇಎಸ್, ಉತ್ಪಾದನೆ, ಆರೋಗ್ಯ, ಔಷಧ, ಬ್ಯಾಂಕಿಂಗ್, ಹಣಕಾಸು, ಮಾರಾಟ, ಚಿಲ್ಲರೆ ವ್ಯಾಪಾರ, ಆತಿಥ್ಯ, ಮಾಧ್ಯಮ, ಎಲೆಕ್ಟ್ರಾನಿಕ್ಸ್, ದೂರಸಂಪರ್ಕ ಹಾಗೂ ನಿರ್ಮಾಣ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾವಿರಾರು ಉದ್ಯೋಗಾವಕಾಶಗಳು ಲಭ್ಯವಿರಲಿವೆ ಎಂದರು.
ಕಳೆದ 15 ಆವೃತ್ತಿಗಳ ಉದ್ಯೋಗ ಮೇಳಗಳ ಮೂಲಕ 40,848 ಅಭ್ಯರ್ಥಿಗಳು ಸ್ಥಳದಲ್ಲೇ ಉದ್ಯೋಗ ಪಡೆದಿದ್ದು, 66,432 ಮಂದಿ ಮುಂದಿನ ಹಂತದ ನೇಮಕಾತಿಗೆ ಆಯ್ಕೆಯಾಗಿದ್ದಾರೆ. ಕಳೆದ ವರ್ಷದ ಮೇಳದಲ್ಲಿಯೇ 2,873 ಅಭ್ಯರ್ಥಿಗಳಿಗೆ ಸ್ಥಳದಲ್ಲೇ ಉದ್ಯೋಗ ದೊರೆತಿದ್ದು, 3,734 ಮಂದಿ ಶಾರ್ಟ್ಲಿಸ್ಟ್ ಆಗಿದ್ದರು ಎಂದು ವಿವರಿಸಿದರು.
ಯಾರು ಭಾಗವಹಿಸಬಹುದು?
2026ರ ಶೈಕ್ಷಣಿಕ ವರ್ಷದಲ್ಲಿ ಅಥವಾ ಅದಕ್ಕೂ ಮೊದಲು ಎಸ್ಎಸ್ಎಲ್ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಪದವಿ, ಸ್ನಾತಕೋತ್ತರ, ಇಂಜಿನಿಯರಿಂಗ್, ನರ್ಸಿಂಗ್, ವೈದ್ಯಕೀಯ, ಪ್ಯಾರಾ ಮೆಡಿಕಲ್, ಬಿಬಿಎ, ಎಂಬಿಎ ಸೇರಿದಂತೆ ವಿವಿಧ ಕೋರ್ಸ್ಗಳನ್ನು ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಲು ಅರ್ಹರಾಗಿದ್ದಾರೆ.
ಅಭ್ಯರ್ಥಿಗಳಿಗೆ ವಿಶೇಷ ಸೌಲಭ್ಯಗಳು
ಹೊರ ಜಿಲ್ಲೆಗಳಿಂದ ಆಗಮಿಸುವ ಅಭ್ಯರ್ಥಿಗಳ ಅನುಕೂಲಕ್ಕಾಗಿ ಆಗಸ್ಟ್ 6ರಿಂದ ಉಚಿತ ವಸತಿ ವ್ಯವಸ್ಥೆ ಕಲ್ಪಿಸಲಾಗಿದೆ. ಜೊತೆಗೆ ಐಟಿಐ ವಿದ್ಯಾರ್ಥಿಗಳಿಗೆ ಉಚಿತ ಬಸ್ ಸೌಲಭ್ಯವೂ ಒದಗಿಸಲಾಗಿದೆ. ಉದ್ಯೋಗ ಮೇಳದ ಪೂರ್ವಭಾವಿಯಾಗಿ ಕಾಪು, ಬಂಟ್ವಾಳ, ಉಪ್ಪಳ, ಪುತ್ತೂರು ಹಾಗೂ ಸುಬ್ರಹ್ಮಣ್ಯ ಪ್ರದೇಶಗಳಲ್ಲಿ ವಿಶೇಷ ಓರಿಯೆಂಟೇಶನ್ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ:
‘Alvas Pragati’ ವೆಬ್ಸೈಟ್ಗೆ ಭೇಟಿ ನೀಡಬಹುದು ಅಥವಾ 96117 50531 / 97414 40490 ಸಂಖ್ಯೆಗಳಿಗೆ ಸಂಪರ್ಕಿಸಬಹುದು.
