ಬೆಂಗಳೂರು, ಆ.12: ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಕರ್ನಾಟಕ ಸರ್ಕಾರ ಗುಟ್ಕಾ ಹಾಗೂ ಪಾನ್ ಮಸಾಲಾ ಮಾರಾಟಕ್ಕೆ ಕಠಿಣ ಕಡಿವಾಣ ಹಾಕಿದೆ. ತಂಬಾಕು ಮತ್ತು ನಿಕೋಟಿನ್ ಹೊಂದಿರುವ ಗುಟ್ಕಾ, ಪಾನ್ ಮಸಾಲಾ ಸೇರಿದಂತೆ ಇಂತಹ ಉತ್ಪನ್ನಗಳ ಉತ್ಪಾದನೆ, ಸಂಗ್ರಹಣೆ, ವಿತರಣೆ, ಸಾಗಣೆ ಹಾಗೂ ಮಾರಾಟವನ್ನು ಒಂದು ವರ್ಷದ ಅವಧಿಗೆ ಸಂಪೂರ್ಣವಾಗಿ ನಿಷೇಧಿಸಿ ಸರ್ಕಾರ ಆದೇಶ ಹೊರಡಿಸಿದೆ.
ಅಧಿಸೂಚನೆ ಹೊರಡಿಸಿದ ದಿನದಿಂದಲೇ ನಿಷೇಧ ಜಾರಿಗೆ ಬಂದಿದ್ದು, ತಂಬಾಕು ಮತ್ತು ನಿಕೋಟಿನ್ ಅನ್ನು ಪ್ರತ್ಯೇಕ ಪ್ಯಾಕೆಟ್ಗಳಲ್ಲಿ ಮಾರಾಟ ಮಾಡಿ, ಬಳಿಕ ಗ್ರಾಹಕರು ಅವುಗಳನ್ನು ಮಿಶ್ರಣ ಮಾಡಿಕೊಂಡು ಸೇವಿಸುವ ರೀತಿಯ ಉತ್ಪನ್ನಗಳಿಗೂ ಈ ನಿಷೇಧ ಅನ್ವಯವಾಗಲಿದೆ.
ಪ್ಯಾಕೆಟ್, ಸ್ಯಾಚೆಟ್ ಸೇರಿದಂತೆ ಯಾವುದೇ ರೂಪದಲ್ಲಿ ನಿಷೇಧಿತ ಗುಟ್ಕಾ ಅಥವಾ ಪಾನ್ ಮಸಾಲಾ ಉತ್ಪನ್ನಗಳನ್ನು ಉತ್ಪಾದಿಸುವುದು, ಸಂಗ್ರಹಿಸುವುದು, ಸಾಗಿಸುವುದು, ವಿತರಿಸುವುದು ಅಥವಾ ಮಾರಾಟ ಮಾಡುವುದು ಕಂಡುಬಂದರೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ.
ನಿಷೇಧ ಆದೇಶವನ್ನು ರಾಜ್ಯಾದ್ಯಂತ ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಆಹಾರ ಸುರಕ್ಷತಾ ಅಧಿಕಾರಿಗಳಿಗೆ ಸರ್ಕಾರ ಸೂಚನೆ ನೀಡಿದೆ. ಸಾರ್ವಜನಿಕರ ಆರೋಗ್ಯದ ಮೇಲೆ ತಂಬಾಕು ಹಾಗೂ ನಿಕೋಟಿನ್ ಉತ್ಪನ್ನಗಳಿಂದ ಉಂಟಾಗುವ ದುಷ್ಪರಿಣಾಮಗಳನ್ನು ತಗ್ಗಿಸುವ ಉದ್ದೇಶದಿಂದ ಸರ್ಕಾರ ಈ ಮಹತ್ವದ ಕ್ರಮ ಕೈಗೊಂಡಿದೆ
