ಮೂಡಬಿದಿರೆ ವಿಧಾನಸಭಾ ಕ್ಷೇತ್ರದ ಪೇಜಾವರ ಪೊರ್ಕೋಡಿಯ ಅಂಬೇಡ್ಕರ್ ಭವನದಲ್ಲಿ ಬಹುಜನ ಸಮಾಜ ಪಾರ್ಟಿ (ಬಿಎಸ್ಪಿ) ದಕ್ಷಿಣ ಕನ್ನಡ ಜಿಲ್ಲಾ ಮಾಸಿಕ ಸಭೆ ಭಾನುವಾರ ಮಧ್ಯಾಹ್ನ 2.30 ಗಂಟೆಗೆ ಜರುಗಿತು.
ಸಭೆಗೆ ರಾಜ್ಯಾಧ್ಯಕ್ಷ ಎಂ. ಕೃಷ್ಣಮೂರ್ತಿ ಅವರು ಮುಖ್ಯ ಅತಿಥಿಯಾಗಿ ಹಾಜರಾಗಿ ಮಾರ್ಗದರ್ಶನ ನೀಡಿದರು. ಸಭೆಯ ಅಧ್ಯಕ್ಷತೆ ಜಿಲ್ಲಾ ಅಧ್ಯಕ್ಷ ಗೋಪಾಲ್ ಮುತ್ತೂರು ವಹಿಸಿದರು.
ಮುಖ್ಯ ಅತಿಥಿಗಳಾಗಿ ರಾಜ್ಯ ಪ್ರಧಾನ ಕಾರ್ಯದರ್ಶಿ ಕಾಂತಪ್ಪ ಅಲಂಗಾರ್ ಭಾಗವಹಿಸಿದರು. ವೇದಿಕೆಯಲ್ಲಿ ಜಿಲ್ಲಾ ಉಸ್ತುವಾರಿಗಳಾದ ನಾರಾಯಣ್ ಬೋಧ್, ದೇವಪ್ಪ ಬೋಧ್, ಉಪಾಧ್ಯಕ್ಷ ಶಿವಪ್ಪ ಗರ್ಡಾಡಿ, ಖಜಾಂಚಿ ಶಿವರಾಮ ಪೇಜಾವರ, ಹಾಗೂ ಬಿವಿಫ್ ಸಂಯೋಜಕ ನಿತಿನ್ ಮುತ್ತೂರು ಉಪಸ್ಥಿತರಿದ್ದರು.
ಸಭೆಯಲ್ಲಿ ಮಾತನಾಡಿದ ರಾಜ್ಯಾಧ್ಯಕ್ಷ ಎಂ. ಕೃಷ್ಣಮೂರ್ತಿ ಅವರು, ಮುಂಬರುವ ತಾಲೂಕು ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಕ್ಷೇತ್ರಗಳಲ್ಲಿ ಬಿಎಸ್ಪಿ ಸ್ಪರ್ಧಿಸಲು ತೀರ್ಮಾನಿಸಿರುವುದಾಗಿ ತಿಳಿಸಿದರು. ಜಿಲ್ಲೆಯಾದ್ಯಂತ ಪಕ್ಷದ ಚಟುವಟಿಕೆಗಳು ಈಗಾಗಲೇ ಚುರುಕುಗೊಂಡಿದ್ದು, ಮುಂದಿನ ಎಲ್ಲ ಚುನಾವಣೆಗಳಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವ ದೃಢ ನಂಬಿಕೆಯನ್ನು ವ್ಯಕ್ತಪಡಿಸಿದರು.
ಸಭೆಯ ಪ್ರಾರಂಭದಲ್ಲಿ ಪ್ರಧಾನ ಕಾರ್ಯದರ್ಶಿ ಕಿರಣ್ ಕುಮಾರ್ ಸ್ವಾಗತಿಸಿ, ನಿರೂಪಣೆ ನಡೆಸಿದರು. ವಿಠ್ಠಲ್ ಕುಂದರ್ ವಂದನೆ ಸಲ್ಲಿಸಿದರು.
