ಹಾಸನ, ಸೆಪ್ಟೆಂಬರ್ 12 – ಹಾಸನ ತಾಲ್ಲೂಕಿನ ಮೊಸಳೆಹೊಸಳ್ಳಿ ಗ್ರಾಮದಲ್ಲಿ ಇಂದು ಬೆಳಿಗ್ಗೆ ರಾಷ್ಟ್ರೀಯ ಹೆದ್ದಾರಿ 373ರ ಬಳಿ ನಡೆದ ಗಣೇಶ ಮೆರವಣಿಗೆಯ ವೇಳೆ ಭೀಕರ ಅಪಘಾತ ಸಂಭವಿಸಿದ್ದು, ಲಾರಿಯೊಂದು ನಿಯಂತ್ರಣ ತಪ್ಪಿ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಜನರ ಮೇಲೆ ಹರಿದ ಪರಿಣಾಮ ಕನಿಷ್ಠ 8 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಅಪಘಾತದಲ್ಲಿ 15ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆಸ್ಪತ್ರೆ ಮೂಲಗಳ ಪ್ರಕಾರ ಕೆಲವರ ಸ್ಥಿತಿ ಚಿಂತಾಜನಕವಾಗಿದೆ.
ಸಾವಿರಾರು ಭಕ್ತರು ಡಿಜೆ ಸಂಗೀತದೊಂದಿಗೆ ಸಂಭ್ರಮದ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದಾಗ ಈ ದುರ್ಘಟನೆ ಸಂಭವಿಸಿದ್ದು, ಘಟನೆಯ ದೃಶ್ಯವಿವೆಡೆ ವೈರಲ್ ಆಗುತ್ತಿವೆ. ಸ್ಥಳೀಯರು ಹಾಗೂ ಪೊಲೀಸರ ನೆರವಿನಿಂದ ಗಾಯಾಳುಗಳಿಗೆ ತಕ್ಷಣವೇ ನೆರವು ನೀಡಲಾಯಿತು.
ಪ್ರತ್ಯಕ್ಷದರ್ಶಿಗಳ ಹೇಳಿಕೆಯ ಪ್ರಕಾರ, ಮೆರವಣಿಗೆ ಸಾಗುತ್ತಿರುವ ಸಮಯದಲ್ಲಿ ವೇಗವಾಗಿ ಬಂದ ಲಾರಿ ನಿಯಂತ್ರಣ ತಪ್ಪಿ ನೇರವಾಗಿ ಜನರ ಗುಂಪಿನಲ್ಲಿ ನುಗ್ಗಿದ್ದು, ಭಯಾನಕ ಪರಿಸ್ಥಿತಿ ಉಂಟಾಗಿದೆ.
ಪೊಲೀಸರು ಈಗಾಗಲೇ ಪ್ರಕರಣ ದಾಖಲಿಸಿಕೊಂಡಿದ್ದು, ಲಾರಿ ಚಾಲಕನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಹೆಚ್ಚಿನ ತನಿಖೆ ಮುಂದುವರೆದಿದೆ