ಉಡುಪಿ: ತುಳುನಾಡ ರಕ್ಷಣಾ ವೇದಿಕೆಯ ಕಾರ್ಮಿಕ ಘಟಕದ ಸಭೆ ದಿನಾಂಕ 17-01-2026ರಂದು ಸಂಜೆ ಉಡುಪಿ ಜಿಲ್ಲಾ ಕಚೇರಿಯಲ್ಲಿ ನಡೆಯಿತು. ಜಿಲ್ಲಾ ಕಾರ್ಮಿಕ ಘಟಕವನ್ನು ಇನ್ನಷ್ಟು ಸಕ್ರಿಯಗೊಳಿಸಿ ಬಲಪಡಿಸುವ ಉದ್ದೇಶದಿಂದ ಸಭೆಯಲ್ಲಿ ಹಲವು ಮಹತ್ವದ ಯೋಜನೆಗಳು ಹಾಗೂ ಸಂಘಟನಾ ಕ್ರಮಗಳ ಕುರಿತು ವಿಸ್ತೃತ ಚರ್ಚೆ ನಡೆಸಲಾಯಿತು.
ಸಭೆಯಲ್ಲಿ ಮುಂದಿನ ದಿನಗಳಲ್ಲಿ ಯಾವುದೇ ಮನವಿ ಅಥವಾ ದೂರುಗಳನ್ನು ಸಲ್ಲಿಸುವ ಮೊದಲು ಜಿಲ್ಲಾಧ್ಯಕ್ಷರು ಹಾಗೂ ಎಲ್ಲಾ ಪದಾಧಿಕಾರಿಗಳೊಂದಿಗೆ ಸಮಗ್ರ ಚರ್ಚೆ ನಡೆಸಿ, ಸೂಕ್ತ ತೀರ್ಮಾನ ಕೈಗೊಳ್ಳುವ ವ್ಯವಸ್ಥೆಯನ್ನು ಅಳವಡಿಸಿಕೊಳ್ಳಲು ನಿರ್ಧರಿಸಲಾಯಿತು. ಇದರಿಂದ ಸಂಘಟನೆಯ ಕಾರ್ಯಚಟುವಟಿಕೆಗಳಲ್ಲಿ ಏಕತೆ, ಪಾರದರ್ಶಕತೆ ಹಾಗೂ ಪರಿಣಾಮಕಾರಿತ್ವವನ್ನು ಹೆಚ್ಚಿಸುವ ಉದ್ದೇಶ ಹೊಂದಲಾಗಿದೆ. ಜೊತೆಗೆ ತುರ್ತು ಸಂದರ್ಭಗಳಲ್ಲಿ ಪದಾಧಿಕಾರಿಗಳು ಜಿಲ್ಲಾಧ್ಯಕ್ಷರು ಅಥವಾ ಪ್ರಧಾನ ಕಾರ್ಯದರ್ಶಿಗಳ ಸಂದೇಶಕ್ಕೆ ತಕ್ಷಣ ಸ್ಪಂದಿಸಿ ಕಚೇರಿಗೆ ಆಗಮಿಸಬೇಕೆಂದು ಸೂಚನೆ ನೀಡಲಾಯಿತು.
ಇದೇ ಸಂದರ್ಭದಲ್ಲಿ, ಜಿಲ್ಲಾ ಕಾರ್ಮಿಕ ಘಟಕಕ್ಕೆ ಮಹಿಳೆಯೊಬ್ಬರಿಂದ ಬಂದ ದೂರು ಹಿನ್ನೆಲೆಯಲ್ಲಿ ಕೆನರಾ ಬ್ಯಾಂಕ್ ಆದಿ ಉಡುಪಿ ಶಾಖೆಗೆ ಪದಾಧಿಕಾರಿಗಳು ಭೇಟಿ ನೀಡಿ, ವ್ಯವಹಾರಿಕ ಸಾಲ ಮಂಜೂರಾತಿಯಲ್ಲಿ ಉಂಟಾಗುತ್ತಿರುವ ವಿಳಂಬದ ಬಗ್ಗೆ ಬ್ಯಾಂಕ್ ಅಧಿಕಾರಿಗಳನ್ನು ಪ್ರಶ್ನಿಸಿದರು. ಪ್ರತಿಕ್ರಿಯಿಸಿದ ಬ್ಯಾಂಕ್ ಅಧಿಕಾರಿಗಳು ಶೀಘ್ರದಲ್ಲೇ ಸಂಬಂಧಿತ ಸಾಲವನ್ನು ಮಂಜೂರು ಮಾಡುವುದಾಗಿ ಭರವಸೆ ನೀಡಿದರು.
ಈ ಸಭೆಯಲ್ಲಿ ತುಳುನಾಡು ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಫ್ರಾಂಕಿ ಡಿಸೋಜ, ಜಿಲ್ಲಾ ಹಿರಿಯ ಉಪಾಧ್ಯಕ್ಷ ಜಯರಾಮ ಪೂಜಾರಿ, ಜಿಲ್ಲಾ ಕಾರ್ಮಿಕ ಘಟಕದ ಅಧ್ಯಕ್ಷ ಜಯ ಪೂಜಾರಿ, ಉಪಾಧ್ಯಕ್ಷ ಕುಶಲ್ ಅಮೀನ್ ಬೇಂಗ್ರೆ, ಪ್ರಧಾನ ಕಾರ್ಯದರ್ಶಿ ಅವಿನಾಶ್ ಶೆಟ್ಟಿ, ಜಿಲ್ಲಾ ಮಹಿಳಾ ಪ್ರಧಾನ ಕಾರ್ಯದರ್ಶಿ ಮಮತಾ, ಮಹಿಳಾ ಸಂಘಟನಾ ಕಾರ್ಯದರ್ಶಿ ಮಮತಾ ಉಡುಪಿ, ಗೀತಾ ನಾಯಕ್, ಜ್ಯೋತಿ ಸೇರಿದಂತೆ ಅನೇಕ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.




