ಕೊಣಾಜೆ: ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ಆರೋಗ್ಯ ಸಂಸ್ಥೆಯಾದ ಕೆ.ಎಸ್. ಹೆಗ್ಡೆ ಆಸ್ಪತ್ರೆ ಸಮೀಪ ತ್ಯಾಜ್ಯ ನೀರು ನಿಂತು ಗಂಭೀರ ಸಮಸ್ಯೆ ಉಂಟಾಗಿರುವ ಬಗ್ಗೆ ತುಳುನಾಡ ರಕ್ಷಣಾ ವೇದಿಕೆ ಅಟೋ ಘಟಕ ತೀವ್ರ ಆತಂಕ ವ್ಯಕ್ತಪಡಿಸಿದೆ.
ಬೆಳ್ಮ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿನ ವಾಣಿಜ್ಯ ಕಟ್ಟಡಗಳಿಂದ ಹೊರಹೊಮ್ಮುವ ತ್ಯಾಜ್ಯ ನೀರು ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿರುವ ಕೆ.ಎಸ್. ಹೆಗ್ಡೆ ಆಸ್ಪತ್ರೆ ಸುತ್ತಮುತ್ತ ಹರಿದು ನಿಂತಿರುವುದರಿಂದ, ಆಟೋ ಚಾಲಕರು, ವಾಹನ ಮಾಲೀಕರು, ಸ್ಥಳೀಯ ಸಾರ್ವಜನಿಕರು ಹಾಗೂ ಆಸ್ಪತ್ರೆಗೆ ಚಿಕಿತ್ಸೆಗೆ ಆಗಮಿಸುವ ರೋಗಿಗಳು ಮತ್ತು ಅವರ ಕುಟುಂಬದವರು ದಿನನಿತ್ಯ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.

ಪ್ರತಿದಿನ ಸಾವಿರಾರು ಜನರು ಚಿಕಿತ್ಸೆಗೆ ಆಗಮಿಸುವ ಈ ಆಸ್ಪತ್ರೆಯ ಪ್ರವೇಶ ರಸ್ತೆ ಸಮೀಪವೇ ಕೊಳಚೆ ನೀರು ನಿಂತಿರುವುದರಿಂದ ಪರಿಸರ ಸಂಪೂರ್ಣ ಮಲೀನಗೊಂಡಿದ್ದು, ದುರ್ವಾಸನೆ, ಕೀಟಾಣುಗಳ ವೃದ್ಧಿ ಮತ್ತು ಆರೋಗ್ಯ ಸಂಬಂಧಿತ ಸಮಸ್ಯೆಗಳು ಹೆಚ್ಚಾಗಿವೆ. ಇದರಿಂದ ಆಟೋ ಚಾಲಕರು ತಮ್ಮ ಜೀವನೋಪಾಯ ನಡೆಸುವುದಕ್ಕೂ ಸಂಕಷ್ಟ ಅನುಭವಿಸುತ್ತಿದ್ದು, ಸಾರ್ವಜನಿಕ ಸಂಚಾರಕ್ಕೂ ಅಡಚಣೆ ಉಂಟಾಗಿದೆ.
ಇದಲ್ಲದೆ ನೀರು ನಿಂತಿರುವ ಪ್ರದೇಶದಲ್ಲಿ ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗುತ್ತಿದ್ದು, ಈಗಾಗಲೇ ಕೆಲವು ಆಟೋ ಚಾಲಕರು ಡೆಂಗ್ಯೂ ಜ್ವರಕ್ಕೆ ತುತ್ತಾಗಿರುವುದು ಆತಂಕಕಾರಿ ಸಂಗತಿಯಾಗಿದೆ. ಸಮಸ್ಯೆಯನ್ನು ತಕ್ಷಣ ನಿಯಂತ್ರಿಸದಿದ್ದರೆ ಮುಂದಿನ ದಿನಗಳಲ್ಲಿ ಸಾರ್ವಜನಿಕ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ತುಳುನಾಡ ರಕ್ಷಣಾ ವೇದಿಕೆ ಎಚ್ಚರಿಸಿದೆ.
ಈ ಹಿನ್ನೆಲೆಯಲ್ಲಿ ತುಳುನಾಡ ರಕ್ಷಣಾ ವೇದಿಕೆ ಅಟೋ ರಿಕ್ಷಾ ಚಾಲಕ ಮತ್ತು ಮಾಲೀಕ ಘಟಕದ ಪದಾಧಿಕಾರಿಗಳು, ವೇದಿಕೆಯ ತುರವೇ ಕೇಂದ್ರೀಯ ಮಂಡಳಿ ಅಧ್ಯಕ್ಷರಾದ ಯೋಗಿಶ್ ಶೆಟ್ಟಿ ಜಪ್ಪು ಅವರ ನೇತೃತ್ವದಲ್ಲಿ ಕೋಟೆಕಾರು ಪಟ್ಟಣ ಪಂಚಾಯತ್ಗೆ ಭೇಟಿ ನೀಡಿ, ಪಂಚಾಯತ್ ಅಧ್ಯಕ್ಷೆ ದಿವ್ಯ ಸತೀಶ್ ಶೆಟ್ಟಿ ಅವರಿಗೆ ಮನವಿ ಸಲ್ಲಿಸಿ, ತ್ಯಾಜ್ಯ ನೀರು ನಿಂತಿರುವ ಸಮಸ್ಯೆಗೆ ತಕ್ಷಣ ಹಾಗೂ ಶಾಶ್ವತ ಪರಿಹಾರ ಒದಗಿಸುವಂತೆ ಒತ್ತಾಯಿಸಿದರು.
ಬೆಳ್ಮ ಗ್ರಾಮ ಪಂಚಾಯತ್ ಮತ್ತು ಕೋಟೆಕಾರು ಪಟ್ಟಣ ಪಂಚಾಯತ್ ನಡುವಿನ ಸಮನ್ವಯ ಕೊರತೆಯೇ ಈ ಸಮಸ್ಯೆಗೆ ಮೂಲ ಕಾರಣವಾಗಿದ್ದು, ಎರಡು ಸ್ಥಳೀಯ ಸಂಸ್ಥೆಗಳು ಪರಸ್ಪರ ಸ್ಪಂದಿಸಿ ಪರಿಣಾಮಕಾರಿಯಾಗಿ ಕ್ರಮ ಜರಗಿಸತಕ್ಕದು.
ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಸ್ಥಳ ಪರಿಶೀಲನೆ ನಡೆಸಿ, ಸೂಕ್ತ ತಾಂತ್ರಿಕ ಕ್ರಮಗಳನ್ನು ಕೈಗೊಂಡು ನೀರು ಹರಿದು ಹೋಗುವಂತೆ ಶಾಶ್ವತ ವ್ಯವಸ್ಥೆ ಕಲ್ಪಿಸಬೇಕು. ಸಮಸ್ಯೆಯನ್ನು ನಿರ್ಲಕ್ಷ್ಯ ಮಾಡಿದರೆ ಮುಂದಿನ ಹಂತದಲ್ಲಿ ಹೋರಾಟ ನಡೆಸಲಾಗುವುದು ಎಂದು ತುಳುನಾಡ ರಕ್ಷಣಾ ವೇದಿಕೆ ಎಚ್ಚರಿಕೆ ನೀಡಿದೆ.
ಈ ಸಂದರ್ಭದಲ್ಲಿ ತುಳುನಾಡ ರಕ್ಷಣಾ ವೇದಿಕೆ ಅಟೋ ಘಟಕದ ಪದಾಧಿಕಾರಿಗಳಾದ ಮನೋಜು, ವಿಲ್ಸನ್ ಆರೀಫ್, ಮೋನಾ, ಕಿಶೋರ್, ಸುಭಾಷ್, ಅತುಲ್, ಉಸ್ಮಾನ್, ಭವ್ಯ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. ಮನವಿಯನ್ನು ಸ್ವೀಕರಿಸಿದ ಕೋಟೆಕಾರು ಪಟ್ಟಣ ಪಂಚಾಯತ್ ಅಧ್ಯಕ್ಷೆ ದಿವ್ಯ ಸತೀಶ್ ಶೆಟ್ಟಿ ಅವರು ಸಮಸ್ಯೆಗೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.


