ಕೇರಳ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ಸಂಭವಿಸಿದ್ದು, ವಿಧಾನಸಭೆ ಚುನಾವಣೆ ಹೊಸ್ತಿಲಲ್ಲೇ ಆಡಳಿತಾರೂಢ ಸಿಪಿಐ(ಎಂ) ಪಕ್ಷಕ್ಕೆ ಭಾರಿ ಹಿನ್ನಡೆಯಾಗಿದೆ. ಪಕ್ಷದ ಹಿರಿಯ ನಾಯಕಿ ಹಾಗೂ ವರ್ಕಲಾ ವಿಭಾಗೀಯ ಸಮಿತಿ ಸದಸ್ಯೆ ಸ್ಮಿತಾ ಸುಂದರೇಶನ್ ಅವರು ಭಾನುವಾರ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.
ತಿರುವನಂತಪುರಂನಲ್ಲಿ ನಡೆದ ಸಮಾರಂಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಹಾಗೂ ಕೇರಳ ಉಸ್ತುವಾರಿ ಪ್ರಕಾಶ್ ಜಾವಡೇಕರ್ ಅವರ ಸಮ್ಮುಖದಲ್ಲಿ ಸ್ಮಿತಾ ಸುಂದರೇಶನ್ ಅವರನ್ನು ಪಕ್ಷಕ್ಕೆ ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು.
ಬಿಜೆಪಿ ಸೇರ್ಪಡೆಯಾದ ಬಳಿಕ ಮಾತನಾಡಿದ ಸ್ಮಿತಾ ಸುಂದರೇಶನ್, “ಸಿಪಿಐ(ಎಂ) ಪಕ್ಷದಲ್ಲಿ ಸಿದ್ಧಾಂತಗಳಿಗೆ ಹಿನ್ನಡೆಯಾಗಿದ್ದು, ವೈಯಕ್ತಿಕ ಹಿತಾಸಕ್ತಿಗಳಿಗೆ ಹೆಚ್ಚು ಪ್ರಾಮುಖ್ಯತೆ ನೀಡಲಾಗುತ್ತಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು. ಈ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.
ಸ್ಮಿತಾ ಸುಂದರೇಶನ್ ಅವರು ಸಿಪಿಐ(ಎಂ)ನ ಪ್ರಭಾವಿ ನಾಯಕ ಸುಂದರೇಶನ್ ಅವರ ಪುತ್ರಿಯಾಗಿದ್ದು, ವರ್ಕಲಾ ಪ್ರದೇಶದಲ್ಲಿ ಗಣನೀಯ ಜನಬೆಂಬಲ ಹೊಂದಿದ್ದಾರೆ. ಅವರ ಸೇರ್ಪಡೆಯಿಂದ ಬಿಜೆಪಿ ವರ್ಕಲಾ ಕ್ಷೇತ್ರದಲ್ಲಿ ಬಲಿಷ್ಠವಾಗುವ ಸಾಧ್ಯತೆ ಹೆಚ್ಚಾಗಿದೆ.
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸ್ಮಿತಾ ಸುಂದರೇಶನ್ ಅವರಿಗೆ ವರ್ಕಲಾ ಕ್ಷೇತ್ರದಿಂದ ಟಿಕೆಟ್ ನೀಡುವ ಸಾಧ್ಯತೆಗಳ ಬಗ್ಗೆ ರಾಜಕೀಯ ವಲಯದಲ್ಲಿ ಚರ್ಚೆಗಳು ಜೋರಾಗಿವೆ.


