ಉಡುಪಿ: ಜಿಲ್ಲೆಯ ವಿದ್ಯಾರ್ಥಿಗಳಿಗೆ ಮಹತ್ವದ ಘಟ್ಟವಾದ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಏಪ್ರಿಲ್ 23 ಮತ್ತು 24 ರಂದು ನಡೆಯಲಿದ್ದು, ಅದನ್ನು ವಿದ್ಯಾರ್ಥಿ ಸ್ನೇಹಿಯಾಗಿ, ಸುವ್ಯವಸ್ಥಿತವಾಗಿ ನಡೆಸಲು ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಸೂಚಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಿಇಟಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ–2ರ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಉಡುಪಿ ಜಿಲ್ಲೆಯ ಉಡುಪಿ, ಕುಂದಾಪುರ ಮತ್ತು ಕಾರ್ಕಳ ತಾಲೂಕುಗಳಲ್ಲಿ ಒಟ್ಟು 23 ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದ್ದು, ಈ ಬಾರಿ 8,746 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ ಎಂದು ತಿಳಿಸಿದರು. ಉಡುಪಿಯಲ್ಲಿ 11, ಕಾರ್ಕಳದಲ್ಲಿ 5 ಮತ್ತು ಕುಂದಾಪುರದಲ್ಲಿ 7 ಕೇಂದ್ರಗಳನ್ನು ಸಿದ್ಧಪಡಿಸಲಾಗಿದೆ.
ವಿದ್ಯಾರ್ಥಿಗಳು ಪರೀಕ್ಷೆ ಆರಂಭವಾಗುವ ಕನಿಷ್ಠ ಎರಡೂವರೆ ಗಂಟೆ ಮೊದಲು ಪರೀಕ್ಷಾ ಕೇಂದ್ರಕ್ಕೆ ಆಗಮಿಸಬೇಕು. ಪರಿಶೋಧನಾ ಪ್ರಕ್ರಿಯೆಯನ್ನು ಗೊಂದಲವಿಲ್ಲದೆ ಸುಗಮವಾಗಿ ನಡೆಸಿ, ವಿದ್ಯಾರ್ಥಿಗಳು ಸಮಯಕ್ಕೆ ಸರಿಯಾಗಿ ಪರೀಕ್ಷಾ ಕೊಠಡಿಗಳಿಗೆ ಪ್ರವೇಶಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಪ್ರತಿ ಪರೀಕ್ಷಾ ಕೊಠಡಿಯಲ್ಲಿ ಗಡಿಯಾರ ವ್ಯವಸ್ಥೆ, ಕುಡಿಯುವ ನೀರಿನ ಸೌಲಭ್ಯ ಸೇರಿದಂತೆ ಎಲ್ಲಾ ಮೂಲಭೂತ ಸೌಲಭ್ಯಗಳನ್ನು ಒದಗಿಸಲಾಗುವುದು. ಪರೀಕ್ಷೆಯ ದಿನ ವಿದ್ಯುತ್ ವ್ಯತ್ಯಯವಾಗದಂತೆ ಮೆಸ್ಕಾಂ ಅಧಿಕಾರಿಗಳು ಮುನ್ನೆಚ್ಚರಿಕೆ ವಹಿಸಬೇಕು ಎಂದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ಎಎಸ್ಪಿ ಸುಧಾಕರ್ ನಾಯಕ್, ಜಿ.ಪಂ. ಮುಖ್ಯ ಯೋಜನಾಧಿಕಾರಿ ಉದಯ್ ಕುಮಾರ್ ಶೆಟ್ಟಿ, ಡಿಡಿಪಿಯು ಮಾರುತಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು, ಕಾಲೇಜು ಪ್ರಾಂಶುಪಾಲರು ಮತ್ತು ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿತ ಸಿಬ್ಬಂದಿ ಉಪಸ್ಥಿತರಿದ್ದರು.

