ಬೆಂಗಳೂರು, ಮೇ 10: ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರು ಹಾಗೂ ಹಿರಿಯೂರು ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದ ಡಿ. ಸುಧಾಕರ್ ಅವರು ಇಂದು ಭಾನುವಾರ ನಸುಕಿನ ಜಾವ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೆ ಬೆಳಗಿನ ಜಾವ ಸುಮಾರು 3:15ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ. ಅವರಿಗೆ 66 ವರ್ಷ ವಯಸ್ಸಾಗಿತ್ತು.
ಕಳೆದ ಕೆಲವು ದಿನಗಳಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಸಚಿವ ಡಿ. ಸುಧಾಕರ್ ಅವರು ಮೊಣಕಾಲು ಶಸ್ತ್ರಚಿಕಿತ್ಸೆಗಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಶಸ್ತ್ರಚಿಕಿತ್ಸೆಯ ಬಳಿಕ ಶ್ವಾಸಕೋಶದಲ್ಲಿ ಸೋಂಕು ಕಾಣಿಸಿಕೊಂಡ ಹಿನ್ನೆಲೆ ಅವರ ಆರೋಗ್ಯ ಸ್ಥಿತಿ ಗಂಭೀರಗೊಂಡಿತ್ತು. ವೈದ್ಯರ ಸಲಹೆಯಂತೆ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಕಿಮ್ಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು.
ಕಿಮ್ಸ್ ಆಸ್ಪತ್ರೆಯ ಐಸಿಯುನಲ್ಲಿ ತಜ್ಞ ವೈದ್ಯರ ಮೇಲ್ವಿಚಾರಣೆಯಲ್ಲಿ ಚಿಕಿತ್ಸೆ ಮುಂದುವರಿದಿದ್ದರೂ, ಆರೋಗ್ಯದಲ್ಲಿ ನಿರೀಕ್ಷಿತ ಮಟ್ಟದ ಚೇತರಿಕೆ ಕಂಡುಬರಲಿಲ್ಲ. ಅಂತಿಮವಾಗಿ ಇಂದು ನಸುಕಿನ ಜಾವ ಅವರು ವಿಧಿವಶರಾದರು.
ಡಿ. ಸುಧಾಕರ್ ಅವರು ರಾಜಕೀಯ ಕ್ಷೇತ್ರದಲ್ಲಿ ಸರಳ ಹಾಗೂ ಜನಪರ ನಾಯಕರಾಗಿ ಗುರುತಿಸಿಕೊಂಡಿದ್ದರು. ಹಿರಿಯೂರು ಕ್ಷೇತ್ರದ ಅಭಿವೃದ್ಧಿಗೆ ಹಲವು ಮಹತ್ವದ ಯೋಜನೆಗಳನ್ನು ಜಾರಿಗೆ ತಂದು ಜನಮನ ಗೆದ್ದಿದ್ದರು. ಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದ ಅವರು ಆಡಳಿತದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು. ಜಿಲ್ಲಾ ಉಸ್ತುವಾರಿ ಸಚಿವರಾಗಿ ಕೂಡ ಹಲವು ಅಭಿವೃದ್ಧಿ ಕಾರ್ಯಗಳಿಗೆ ಮುನ್ನಡೆ ನೀಡಿದ್ದರು.
ಸಚಿವರ ನಿಧನ ಸುದ್ದಿ ತಿಳಿಯುತ್ತಿದ್ದಂತೆಯೇ ರಾಜಕೀಯ ವಲಯದಲ್ಲಿ ಹಾಗೂ ಸಾರ್ವಜನಿಕರಲ್ಲಿ ದುಃಖದ ವಾತಾವರಣ ನಿರ್ಮಾಣವಾಗಿದೆ. ವಿವಿಧ ರಾಜಕೀಯ ಪಕ್ಷಗಳ ನಾಯಕರು, ಗಣ್ಯರು ಹಾಗೂ ಅಭಿಮಾನಿಗಳು ಸಂತಾಪ ಸೂಚಿಸಿದ್ದಾರೆ. ಅವರ ಅಗಲಿಕೆಯಿಂದ ರಾಜ್ಯ ರಾಜಕೀಯಕ್ಕೆ ತುಂಬಲಾರದ ನಷ್ಟ ಉಂಟಾಗಿದೆ ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ.
ಸಚಿವ ಡಿ. ಸುಧಾಕರ್ ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕರ ಅಂತಿಮ ದರ್ಶನಕ್ಕಾಗಿ ಬೆಂಗಳೂರಿನಲ್ಲಿ ಇರಿಸುವ ಸಾಧ್ಯತೆ ಇದ್ದು, ಬಳಿಕ ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ ಎಂದು ಮೂಲಗಳು ತಿಳಿಸಿವೆ.
ಸಂಕ್ಷಿಪ್ತ ಪರಿಚಯ
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಸಚಿವರಾಗಿದ್ದ ಡಿ. ಸುಧಾಕರ್ ಅವರು ಜನಪರ ರಾಜಕಾರಣಿ ಹಾಗೂ ಸಹಕಾರ ಕ್ಷೇತ್ರದ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದರು. 1961ರ ಮಾರ್ಚ್ 28ರಂದು ಜನಿಸಿದ ಅವರು, ಸಹಕಾರ ಕ್ಷೇತ್ರದ ಮೂಲಕ ಸಾರ್ವಜನಿಕ ಬದುಕಿಗೆ ಪ್ರವೇಶಿಸಿ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು.
2004ರಲ್ಲಿ ಕಾಂಗ್ರೆಸ್ ಪಕ್ಷದಿಂದ ಚಳ್ಳಕೆರೆ ಕ್ಷೇತ್ರದಲ್ಲಿ ಮೊದಲ ಬಾರಿಗೆ ಶಾಸಕರಾದ ಅವರು, ಬಳಿಕ ಹಿರಿಯೂರು ಕ್ಷೇತ್ರದಿಂದ ರಾಜಕೀಯ ಪಯಣ ಮುಂದುವರಿಸಿದರು. 2008ರಲ್ಲಿ ಪಕ್ಷೇತರರಾಗಿ ಗೆದ್ದು, ಬಿ.ಎಸ್. ಯಡಿಯೂರಪ್ಪ ಸರ್ಕಾರದಲ್ಲಿ ಸಮಾಜ ಕಲ್ಯಾಣ ಸಚಿವರಾಗಿದ್ದರು. 2013ರಲ್ಲಿ ಕಾಂಗ್ರೆಸ್ಗೆ ಮರಳಿ ಮತ್ತೆ ಶಾಸಕರಾದ ಅವರು, 2023ರಲ್ಲಿ ಭರ್ಜರಿ ಗೆಲುವು ಸಾಧಿಸಿ ಯೋಜನೆ ಮತ್ತು ಸಾಂಖ್ಯಿಕ ಸಚಿವರಾಗಿ ಜವಾಬ್ದಾರಿ ವಹಿಸಿಕೊಂಡಿದ್ದರು.
ಸುಮಾರು 20 ವರ್ಷಗಳ ಕಾಲ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಅವರು, ಸಾವಿರಾರು ಮಹಿಳಾ ಸಹಕಾರ ಸಂಘಗಳಿಗೆ ನೆರವು ನೀಡುವ ಮೂಲಕ ಗ್ರಾಮೀಣ ಜನರ ವಿಶ್ವಾಸ ಗಳಿಸಿದ್ದರು. ಜಾತಿ ಮೀರಿದ ಜನಬೆಂಬಲ ಹೊಂದಿದ್ದ ಅವರು “ಬಡವರ ಬಂಧು” ಎಂದೇ ಜನಪ್ರಿಯರಾಗಿದ್ದರು.
ಸರಳತೆ, ಸಹಕಾರ ಮನೋಭಾವ ಹಾಗೂ ಜನಸೇವೆಯ ಮೂಲಕ ಜನಮನ ಗೆದ್ದಿದ್ದ ಡಿ. ಸುಧಾಕರ್ ಅವರ ಅಗಲಿಕೆ ರಾಜ್ಯ ರಾಜಕೀಯಕ್ಕೆ ತುಂಬಲಾರದ ನಷ್ಟವಾಗಿದೆ

