ಬೆಳ್ತಂಗಡಿ, ಮೇ 11 : ತಾಲೂಕಿನ ಕಸಬಾ ಗ್ರಾಮದ ಕೆಇಬಿ ರಸ್ತೆಯಲ್ಲಿರುವ “ಪವನ್” ಹೆಸರಿನ ಕ್ಯಾಂಟಿನ್ನಲ್ಲಿ ಅಕ್ರಮ ವೇಶ್ಯಾವಾಟಿಕೆ ನಡೆಸಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಬೆಳ್ತಂಗಡಿ ಪೊಲೀಸರು ದಾಳಿ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕ್ಯಾಂಟಿನ್ ನಡೆಸುತ್ತಿದ್ದ ಸುಂದರ್ ಶೆಟ್ಟಿ ಹಾಗೂ ಅವರ ಪರಿಚಯದ ಉಸ್ಮಾನ್ ಎಂಬವರು ಅಕ್ರಮ ಲಾಭ ಗಳಿಸುವ ಉದ್ದೇಶದಿಂದ ಕ್ಯಾಂಟಿನ್ನ ಒಳ ಕೋಣೆಯಲ್ಲಿ ಮಹಿಳೆಯರನ್ನು ಕರೆಸಿ ವೇಶ್ಯಾವಾಟಿಕೆ ನಡೆಸುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ.

ಈ ಕುರಿತು ಬೆಳ್ತಂಗಡಿ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರು (ತನಿಖೆ) ಸಿಕಂದರ್ ಪಾಷಾ ಅವರಿಗೆ ಮಾಹಿತಿ ಲಭಿಸಿದ್ದು, ಗುಪ್ತ ಪರಿಶೀಲನೆ ನಡೆಸಿದ ವೇಳೆ ಅಕ್ರಮ ಚಟುವಟಿಕೆ ನಡೆಯುತ್ತಿರುವುದು ದೃಢಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಮೇ 10ರಂದು ಸಂಜೆ ಬೆಳ್ತಂಗಡಿ ವೃತ್ತ ನಿರೀಕ್ಷಕರಾದ ರವಿ ಬಿ.ಎಸ್ ನೇತೃತ್ವದಲ್ಲಿ ಪೊಲೀಸ್ ಸಿಬ್ಬಂದಿಗಳ ತಂಡ ಸ್ಥಳಕ್ಕೆ ದಾಳಿ ನಡೆಸಿದೆ. ದಾಳಿಯ ವೇಳೆ ಅಕ್ರಮ ಚಟುವಟಿಕೆಗೆ ಸಂಬಂಧಿಸಿದ ಸಾಕ್ಷ್ಯಾಧಾರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.
ಘಟನೆಗೆ ಸಂಬಂಧಿಸಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 48/2026ರಡಿ ಅನೈತಿಕ ಮಾನವ ಸಾಗಣೆ ತಡೆ ಕಾಯ್ದೆ (ITP Act) ಕಲಂ 3, 4, 5 ಹಾಗೂ ಭಾರತೀಯ ನ್ಯಾಯ ಸಂಹಿತೆ (BNS) ಕಲಂ 143(2) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

