ಕುಂದಾಪುರ, ಮೇ 16 : ಕ್ರಿಕೆಟ್ ಬೆಟ್ಟಿಂಗ್ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದ ಆರೋಪದ ಹಿನ್ನೆಲೆ ಉಡುಪಿ ಜಿಲ್ಲೆಯ ಭರತ್ ಜಯರಾಮ್ ದಾಸ ಎಂಬಾತನಿಗೆ ಗಡಿಪಾರು ಆದೇಶ ಹೊರಡಿಸಲಾಗಿದೆ ಎಂದು ತಿಳಿದು ಬಂದಿದೆ.
ಭರತ್ ಜಯರಾಮ್ ದಾಸ (34), ತಂದೆ ಜಯರಾಮ ದಾಸ, ಮೂಡುಬಿರ್ತಿ ನಿವಾಸಿ, ವಾರಂಬಳ್ಳಿ ಗ್ರಾಮ, ಬ್ರಹ್ಮಾವರ ತಾಲೂಕು, ಉಡುಪಿ ಜಿಲ್ಲೆ ಇವರ ವಿರುದ್ಧ ವಿಶೇಷ ಕಾರ್ಯಾಂಗ ದಂಡಾಧಿಕಾರಿಗಳು ಹಾಗೂ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರು ಮೇ 14ರಂದು ಗಡಿಪಾರು ಆದೇಶ ಹೊರಡಿಸಿದ್ದಾರೆ.
ಆರೋಪಿಯ ವಿರುದ್ಧ ಕೋಟ ಮತ್ತು ಕುಂದಾಪುರ ಪೊಲೀಸ್ ಠಾಣೆಗಳಲ್ಲಿ ಕ್ರಿಕೆಟ್ ಬೆಟ್ಟಿಂಗ್ಗೆ ಸಂಬಂಧಿಸಿದಂತೆ ಒಟ್ಟು ಮೂರು ಪ್ರಕರಣಗಳು ದಾಖಲಾಗಿವೆ. ಈ ಪೈಕಿ ಒಂದು ಪ್ರಕರಣದಲ್ಲಿ ಶಿಕ್ಷೆಯಾಗಿದ್ದು, ಉಳಿದ ಎರಡು ಪ್ರಕರಣಗಳು ತನಿಖಾ ಹಂತದಲ್ಲಿವೆ ಎಂದು ತಿಳಿದು ಬಂದಿದೆ.
ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಭರತ್ ಜಯರಾಮ್ ದಾಸನನ್ನು ಬೆಂಗಳೂರು ಕಮಿಷನರೇಟ್ ವ್ಯಾಪ್ತಿಯ ಕೆಂಗೇರಿ ಪೊಲೀಸ್ ಠಾಣೆ ವ್ಯಾಪ್ತಿಗೆ ಗಡಿಪಾರು ಮಾಡಲಾಗಿದೆ ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿವೆ.






