ಮಂಗಳೂರು : ಹಲವು ಪ್ರಕರಣಗಳಲ್ಲಿ ಆರೋಪಿಯಾಗಿ ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ “ಬಿ” ರೌಡಿ ಶೀಟರ್ನನ್ನು ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಬಂಧಿತ ಆರೋಪಿಯನ್ನು ಮೊಹಮ್ಮದ್ ಅಶ್ರಫ್ @ ಅಜ್ಜು @ ನಿಜಾಮ್ @ ಅಡ್ಡು @ ಸಮೀರ್, ಮಾವಿನಕಟ್ಟೆ, ಅಜಿಲಮೊಗರು, ಬೆಳ್ತಂಗಡಿ ನಿವಾಸಿ ಎಂದು ಗುರುತಿಸಲಾಗಿದೆ. ಈತ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯ “ಬಿ” ರೌಡಿ ಶೀಟರ್ ಆಗಿದ್ದು, ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ ಎನ್ನಲಾಗಿದೆ.
ಆರೋಪಿಯ ವಿರುದ್ಧ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಅ.ಕ್ರ.ಸಂ 136/2018, 119/2024, 130/2024 ಸೇರಿದಂತೆ ಹಲವು ಪ್ರಕರಣಗಳು ದಾಖಲಾಗಿದ್ದವು. ಪ್ರಕರಣಗಳಿಗೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಹಿನ್ನೆಲೆಯಲ್ಲಿ ಎಲ್ಪಿಸಿ ವಾರಂಟ್ ಜಾರಿಗೊಳಿಸಲಾಗಿತ್ತು.
ಇದಲ್ಲದೆ, ಉಪ್ಪಿನಂಗಡಿ ಪೊಲೀಸ್ ಠಾಣೆಯ ಅ.ಕ್ರ.ಸಂ 232/2017 ಪ್ರಕರಣದಲ್ಲಿಯೂ ನ್ಯಾಯಾಲಯವು ವಾರಂಟ್ ಹೊರಡಿಸಿತ್ತು. ಸುರತ್ಕಲ್ ಪೊಲೀಸ್ ಠಾಣೆಯ ಅ.ಕ್ರ.ಸಂ 63/2025 ಪ್ರಕರಣದಲ್ಲಿಯೂ ಆರೋಪಿಯಾಗಿದ್ದ ಈತ ಹಲವು ದಿನಗಳಿಂದ ಪೊಲೀಸರಿಗೆ ಸಿಗದೆ ತಪ್ಪಿಸಿಕೊಳ್ಳುತ್ತಿದ್ದನು ಎಂದು ತಿಳಿದುಬಂದಿದೆ.
ದಿನಾಂಕ 26-05-2026ರಂದು ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ವಿಶೇಷ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ. ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

