ಮಂಗಳೂರು, ಜೂನ್ 5: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.), ಮಂಗಳೂರು ವತಿಯಿಂದ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಪಡೀಲ್ನ ಬೈರಾಡಿಕೆರೆ ಪರಿಸರದಲ್ಲಿ ಸಸಿ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮವನ್ನು ಪರಿಸರ ಪ್ರೇಮಿ ಮಾಧವ ಉಳಾಳ ಅವರ ಮಾರ್ಗದರ್ಶನದಲ್ಲಿ ನಡೆಸಲಾಗಿದ್ದು, ಬೈರಾಡಿಕೆರೆಯ ಸುತ್ತಮುತ್ತ ವಿವಿಧ ಜಾತಿಯ ಸಸಿಗಳನ್ನು ನೆಡುವ ಮೂಲಕ ಪರಿಸರ ಸಂರಕ್ಷಣೆಯ ಸಂದೇಶ ಸಾರಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಬೈರಾಡಿಕೆರೆ ಸಂರಕ್ಷಣಾ ಹಾಗೂ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಡಾ. ಅಣ್ಣಯ್ಯ ಕುಲಾಲ್ ಉಳ್ತೂರು ಅವರು, “ಆತ್ಮಶಕ್ತಿ ಸಹಕಾರಿ ಸಂಘವು ಸಾಮಾಜಿಕ ಹಾಗೂ ಪರಿಸರ ಕಾಳಜಿಯ ಕಾರ್ಯಕ್ರಮಗಳನ್ನು ನಿರಂತರವಾಗಿ ಆಯೋಜಿಸುತ್ತಿದೆ. ವಿಶ್ವ ಪರಿಸರ ದಿನಾಚರಣೆಯನ್ನು ಬೈರಾಡಿಕೆರೆಯಂತಹ ಪ್ರಕೃತಿ ಸಂಪತ್ತಿನ ನಡುವೆ ಆಚರಿಸಿರುವುದು ಶ್ಲಾಘನೀಯ. ಮುಂದಿನ ದಿನಗಳಲ್ಲಿ ಕೆರೆಯ ಸಂರಕ್ಷಣೆ ಮತ್ತು ಅಭಿವೃದ್ಧಿಗೆ ಸಂಘದ ಸಹಕಾರ ಇನ್ನಷ್ಟು ಬಲವಾಗಲಿ” ಎಂದು ಆಶಿಸಿದರು.
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಮಾತನಾಡಿ, “ಕಳೆದ 14 ವರ್ಷಗಳಿಂದ ಸಂಘವು ವಿಶ್ವ ಪರಿಸರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸುತ್ತಾ ಬಂದಿದೆ. ರಾಷ್ಟ್ರೀಯ ಹೆದ್ದಾರಿ ಡಿವೈಡರ್ಗಳು, ಸಾರ್ವಜನಿಕ ಸ್ಥಳಗಳು ಹಾಗೂ ಸಂಘದ ಕಚೇರಿ ಆವರಣದಲ್ಲಿ ಸಾವಿರಾರು ಸಸಿಗಳನ್ನು ನೆಟ್ಟು ಪೋಷಿಸುವ ಕಾರ್ಯ ನಡೆಯುತ್ತಿದೆ. ಈ ವರ್ಷ ಬೈರಾಡಿಕೆರೆ ಸಂರಕ್ಷಣಾ ಸಮಿತಿ ಹಾಗೂ ಸ್ಥಳೀಯ ಸಂಘ-ಸಂಸ್ಥೆಗಳ ಸಹಭಾಗಿತ್ವದಲ್ಲಿ ಕಾರ್ಯಕ್ರಮ ಆಯೋಜಿಸಿರುವುದು ವಿಶೇಷ” ಎಂದರು.
ಅವರು ಮುಂದುವರಿದು, “ಪರಿಸರ ಸಂರಕ್ಷಣೆ ಕೇವಲ ಒಂದು ದಿನದ ಆಚರಣೆಯಾಗಿರದೆ, ಪ್ರತಿಯೊಬ್ಬರ ಜವಾಬ್ದಾರಿಯಾಗಬೇಕು. ಬೈರಾಡಿಕೆರೆಯ ಸ್ವಚ್ಛತೆ ಹಾಗೂ ಪರಿಸರ ಸಂರಕ್ಷಣೆಗೆ ಮುಂದೆಯೂ ನಿರಂತರವಾಗಿ ಕೈಜೋಡಿಸಲಾಗುವುದು” ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನಿರ್ದೇಶಕ ಗೋಪಾಲ್ ಎಂ., ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್, ಮಂಗಳೂರು ಮಹಾನಗರ ಪಾಲಿಕೆಯ ಪರಿಸರ ವಿಭಾಗದ ಇಂಜಿನಿಯರ್ ದಯಾನಂದ ಪೂಜಾರಿ, ಬೈರಾಡಿಕೆರೆ ಸಂರಕ್ಷಣಾ ಹಾಗೂ ಅಭಿವೃದ್ಧಿ ಸಮಿತಿಯ ಪದಾಧಿಕಾರಿಗಳು, ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಆತ್ಮಶಕ್ತಿ ಸಹಕಾರಿ ಸಂಘದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಪರಿಸರ ಸಂರಕ್ಷಣೆ ಮತ್ತು ಹಸಿರು ಅಭಿಯಾನಕ್ಕೆ ಸಾರ್ವಜನಿಕರ ಸಹಭಾಗಿತ್ವ ಅಗತ್ಯವೆಂಬ ಸಂದೇಶದೊಂದಿಗೆ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು.



