ಪೊನ್ನಂಪೇಟೆ, ಜೂನ್ 5: ರಾಜ್ಯದಲ್ಲಿ ಮಾನವ-ವನ್ಯಜೀವಿ ಸಂಘರ್ಷದ ಘಟನೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ನಡುವೆಯೇ ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಕೋಣನಕಟ್ಟೆ ಗ್ರಾಮದಲ್ಲಿ ಕಾಡಾನೆ ದಾಳಿಗೆ ನಿವೃತ್ತ ಐಜಿಪಿಯ ಪತ್ನಿ ಮೃತಪಟ್ಟಿರುವ ದುರ್ಘಟನೆ ನಡೆದಿದೆ.
ಮೃತರನ್ನು ನಿವೃತ್ತ ಐಜಿಪಿ ಅಣ್ಣಳಮಾಡ ಸುನೀಲ್ ಅಚ್ಚಯ್ಯ ಅವರ ಪತ್ನಿ ಸಂಧ್ಯಾ (60) ಎಂದು ಗುರುತಿಸಲಾಗಿದೆ.
ಮಾಹಿತಿಯ ಪ್ರಕಾರ, ಸಂಧ್ಯಾ ಅವರು ಕುಟುಂಬ ಸಮೇತರಾಗಿ ನಿನ್ನೆಯಷ್ಟೇ ದೆಹಲಿಯಿಂದ ತಮ್ಮ ಸ್ವಗ್ರಾಮಕ್ಕೆ ಆಗಮಿಸಿದ್ದರು. ಇಂದು ಬೆಳಗ್ಗೆ ಸುಮಾರು 9 ಗಂಟೆ ವೇಳೆಗೆ ತಮ್ಮ ಸ್ವಂತ ಎಸ್ಟೇಟ್ಗೆ ಭೇಟಿ ನೀಡಿದ್ದ ವೇಳೆ ಕಾಡಿನಿಂದ ಬಂದ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ದಾಳಿಯ ತೀವ್ರತೆಗೆ ಸಂಧ್ಯಾ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಸ್ಥಳದಲ್ಲಿದ್ದವರು ತಕ್ಷಣವೇ ಅವರನ್ನು ಆಸ್ಪತ್ರೆಗೆ ಸಾಗಿಸಲು ಪ್ರಯತ್ನಿಸಿದರೂ, ಮಾರ್ಗಮಧ್ಯೆಯೇ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಘಟನೆಯಲ್ಲಿ ಎಸ್ಟೇಟ್ನ ಕೆಲ ಕಾರ್ಮಿಕರೂ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆಯ ಸುದ್ದಿ ತಿಳಿಯುತ್ತಿದ್ದಂತೆಯೇ ಅರಣ್ಯ ಇಲಾಖೆ ಹಾಗೂ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾಡಾನೆ ದಾಳಿಯಿಂದ ಗ್ರಾಮಸ್ಥರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಕಾಡಾನೆಗಳ ಹಾವಳಿಯನ್ನು ನಿಯಂತ್ರಿಸಲು ಹಾಗೂ ಮಾನವ ಜೀವಹಾನಿ ತಡೆಯಲು ತುರ್ತು ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.
ಕೊಡಗು ಸೇರಿದಂತೆ ರಾಜ್ಯದ ಹಲವೆಡೆಗಳಲ್ಲಿ ಕಾಡಾನೆಗಳ ಹಾವಳಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಾನವ-ವನ್ಯಜೀವಿ ಸಂಘರ್ಷದ ಪ್ರಕರಣಗಳು ನಿರಂತರವಾಗಿ ವರದಿಯಾಗುತ್ತಿದ್ದು, ಈ ದುರ್ಘಟನೆ ಮತ್ತೊಮ್ಮೆ ಅರಣ್ಯ ಇಲಾಖೆಯ ಮುಂದೆ ಗಂಭೀರ ಸವಾಲನ್ನು ಒಡ್ಡಿದೆ.
ಈ ಸಂಬಂಧ ಪೊನ್ನಂಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಧಿಕಾರಿಗಳು ಮುಂದಿನ ತನಿಖೆ ನಡೆಸುತ್ತಿದ್ದಾರೆ.





