ಮಂಗಳೂರು, ಜೂನ್ 6: ಪ್ರತಿಷ್ಠಿತ ಪಿ.ಪಿ. ಗೋಮತಿ ಸ್ಮಾರಕ ಉಪನ್ಯಾಸ ಮಾಲಿಕೆ-2026ರ ಅಂಗವಾಗಿ ಖ್ಯಾತ ಲೇಖಕಿ ಹಾಗೂ ದೀಪಾ ಭಸ್ತಿ ಅವರ ವಿಶೇಷ ಉಪನ್ಯಾಸ ಕಾರ್ಯಕ್ರಮವು ಜೂನ್ 9ರಂದು ಬೆಳಿಗ್ಗೆ 10.30ಕ್ಕೆ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿದೆ.
ಈ ಕುರಿತು ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಪ್ರೊ. ಪಿ.ಎಲ್. ಧರ್ಮ ರವರು ಪಿ.ಪಿ. ಗೋಮತಿ ಎಜುಕೇಶನ್ ಟ್ರಸ್ಟ್, ಮಂಗಳೂರು ವಿಶ್ವವಿದ್ಯಾನಿಲಯ, ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಗಳ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ತಿಳಿಸಿದರು.
ಈ ವರ್ಷದ ಉಪನ್ಯಾಸದಲ್ಲಿ ದೀಪಾ ಭಸ್ತಿ ಅವರು “ಚಿಂತನೆಯೇ ಭಿನ್ನಮತವಾದಾಗ: ಭಾಷೆ ಮತ್ತು ಸಂಸ್ಕೃತಿ ಕುರಿತು ಕೆಲವು ಆಲೋಚನೆಗಳು” ಎಂಬ ವಿಷಯದ ಕುರಿತು ಮಾತನಾಡಲಿದ್ದಾರೆ. ಭಾಷೆ, ಸಂಸ್ಕೃತಿ, ವೈವಿಧ್ಯತೆ ಮತ್ತು ಭಿನ್ನಾಭಿಪ್ರಾಯಗಳ ಮಹತ್ವವನ್ನು ಸಮಕಾಲೀನ ಸಾಮಾಜಿಕ ಸನ್ನಿವೇಶದಲ್ಲಿ ವಿಶ್ಲೇಷಿಸುವ ಈ ಉಪನ್ಯಾಸವು ಸಾಹಿತ್ಯಾಸಕ್ತರು, ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರಿಗೆ ಹೊಸ ದೃಷ್ಟಿಕೋನ ನೀಡಲಿದೆ ಎಂದು ನಿರೀಕ್ಷಿಸಲಾಗಿದೆ.
ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದೀಪಾ ಭಸ್ತಿ ಅವರು ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿರುವುದು ವಿಶ್ವವಿದ್ಯಾನಿಲಯಕ್ಕೆ ಹೆಮ್ಮೆಯ ವಿಷಯವಾಗಿದ್ದು, ವಿದ್ಯಾರ್ಥಿಗಳಿಗೆ ಸ್ಫೂರ್ತಿದಾಯಕವಾಗಿದೆ ಎಂದು ಕುಲಪತಿಗಳು ಅಭಿಪ್ರಾಯಪಟ್ಟರು.
ವಿದ್ಯಾರ್ಥಿಗಳಲ್ಲಿ ಸಾಹಿತ್ಯ ಓದು, ಸೃಜನಾತ್ಮಕ ಬರವಣಿಗೆ ಹಾಗೂ ಜೀವನ ಮೌಲ್ಯಗಳನ್ನು ಪ್ರತಿಬಿಂಬಿಸುವ ಸಾಹಿತ್ಯ ರಚನೆಗೆ ಉತ್ತೇಜನ ನೀಡುವ ಉದ್ದೇಶದಿಂದ ಈ ಉಪನ್ಯಾಸ ಮಾಲಿಕೆಯನ್ನು ಹಮ್ಮಿಕೊಳ್ಳಲಾಗಿದೆ. ವಿದ್ಯಾರ್ಥಿಗಳು, ಅಧ್ಯಾಪಕರು, ಸಾಹಿತ್ಯಾಸಕ್ತರು, ಪತ್ರಕರ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಅವರು ಕರೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರೊ. ಪಿ.ಎಲ್. ಧರ್ಮ ವಹಿಸಲಿದ್ದು, ವಿವಿಧ ಕ್ಷೇತ್ರಗಳ ಗಣ್ಯರು ಹಾಗೂ ಸಾಹಿತ್ಯಾಭಿಮಾನಿಗಳು ಉಪಸ್ಥಿತರಲಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಡಾ. ಬಿ. ಶ್ರೀನಿವಾಸ ಕಕ್ಕಿಲ್ಲಾಯ, ಪುಷ್ಪರಾಜ್ ಬಿ.ಎನ್., ಎಂ.ಪಿ. ಶ್ರೀನಾಥ್, ಡಾ. ನಾಗಪ್ಪ ಗೌಡ, ಡಾ. ಧನಂಜಯ ಕುಂಬ್ಳೆ ಹಾಗೂ ನಾಗೇಶ್ ಕಲ್ಲೂರು ಸೇರಿದಂತೆ ಹಲವರು ಉಪಸ್ಥಿತರಿದ್ದರು.






