ಮಂಗಳೂರು, ಜೂನ್ 10: ಸಾರ್ವಜನಿಕ ರಸ್ತೆ, ಫುಟ್ಪಾತ್, ರಸ್ತೆ ವಿಭಜಕಗಳು (ಡಿವೈಡರ್ಗಳು) ಹಾಗೂ ಇತರೆ ಸಾರ್ವಜನಿಕ ಸ್ಥಳಗಳಲ್ಲಿ ಅನಧಿಕೃತವಾಗಿ ಅಳವಡಿಸಲಾಗುತ್ತಿರುವ ಫ್ಲೆಕ್ಸ್, ಬ್ಯಾನರ್, ಕಟೌಟ್ ಮತ್ತು ಜಾಹೀರಾತು ಫಲಕಗಳ ವಿರುದ್ಧ ದಕ್ಷಿಣ ಕನ್ನಡ ಜಿಲ್ಲಾ ಆಡಳಿತ ಕಠಿಣ ಕ್ರಮಕ್ಕೆ ಮುಂದಾಗಿದೆ.
ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಅವರ ನಿರ್ದೇಶನದಂತೆ, ಮಂಗಳೂರು ಮಹಾನಗರ ಪಾಲಿಕೆ ಸೇರಿದಂತೆ ಜಿಲ್ಲೆಯ ಎಲ್ಲ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಅನಧಿಕೃತ ಫ್ಲೆಕ್ಸ್ ಮತ್ತು ಬ್ಯಾನರ್ ಅಳವಡಿಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಸಾರ್ವಜನಿಕ ಸಂಚಾರಕ್ಕೆ ಅಡ್ಡಿಯಾಗುವ ಹಾಗೂ ರಸ್ತೆ ಸುರಕ್ಷತೆಗೆ ಧಕ್ಕೆಯುಂಟುಮಾಡುವ ರೀತಿಯಲ್ಲಿ ಫ್ಲೆಕ್ಸ್ ಅಳವಡಿಸುವವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.
ಆದೇಶದಲ್ಲಿ ಕರ್ನಾಟಕ ಓಪನ್ ಪ್ಲೇಸಸ್ (ಪ್ರಿವೆನ್ಷನ್ ಆಫ್ ಡಿಸ್ಫಿಗರ್ಮೆಂಟ್) ಕಾಯ್ದೆ-1981 ಹಾಗೂ ಕರ್ನಾಟಕ ಮುನ್ಸಿಪಾಲಿಟೀಸ್ ಕಾಯ್ದೆಯ ನಿಯಮಗಳನ್ನು ಉಲ್ಲೇಖಿಸಲಾಗಿದ್ದು, ಸರ್ಕಾರ ಅಥವಾ ಸಂಬಂಧಿತ ಪ್ರಾಧಿಕಾರದ ಅನುಮತಿ ಪಡೆಯದೇ ಸಾರ್ವಜನಿಕ ಸ್ಥಳಗಳಲ್ಲಿ ಬ್ಯಾನರ್, ಪೋಸ್ಟರ್, ಕಟೌಟ್ ಮತ್ತು ಫ್ಲೆಕ್ಸ್ ಅಳವಡಿಸುವುದು ಕಾನೂನುಬಾಹಿರ ಎಂದು ಸ್ಪಷ್ಟಪಡಿಸಲಾಗಿದೆ.
ಇತ್ತೀಚಿನ ದಿನಗಳಲ್ಲಿ ರಸ್ತೆ ಡಿವೈಡರ್ಗಳು ಮತ್ತು ಪ್ರಮುಖ ರಸ್ತೆ ಬದಿಗಳಲ್ಲಿ ಅಳವಡಿಸಲಾಗುತ್ತಿರುವ ಅಕ್ರಮ ಫ್ಲೆಕ್ಸ್ಗಳಿಂದ ವಾಹನ ಸಂಚಾರಕ್ಕೆ ತೊಂದರೆ ಉಂಟಾಗುತ್ತಿರುವುದಲ್ಲದೆ, ವಿಶೇಷವಾಗಿ ದ್ವಿಚಕ್ರ ವಾಹನ ಸವಾರರ ಸುರಕ್ಷತೆಗೆ ಅಪಾಯ ಎದುರಾಗುತ್ತಿರುವ ಕುರಿತು ಸಾರ್ವಜನಿಕರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಈ ಕ್ರಮ ಕೈಗೊಂಡಿದೆ.
ಈಗಾಗಲೇ ರಸ್ತೆ ಡಿವೈಡರ್ಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಅಳವಡಿಸಲಾದ ಅನಧಿಕೃತ ಫ್ಲೆಕ್ಸ್ಗಳನ್ನು ತೆರವುಗೊಳಿಸಲು ಸಂಬಂಧಿತ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದ್ದು, ಮುಂದಿನ ದಿನಗಳಲ್ಲಿ ನಿಯಮ ಉಲ್ಲಂಘನೆ ಕಂಡುಬಂದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಡಳಿತ ತಿಳಿಸಿದೆ.






