ಮಂಗಳೂರು, ಜೂನ್ 11: ದೇಶದ ಅತ್ಯಂತ ದೀರ್ಘಾವಧಿ ಸೇವೆ ಸಲ್ಲಿಸಿರುವ ಚುನಾಯಿತ ಪ್ರಧಾನಿಯಾಗಿ ಹೊಸ ಮೈಲಿಗಲ್ಲು ನಿರ್ಮಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರ ಉತ್ತಮ ಆರೋಗ್ಯ, ದೀರ್ಘಾಯುಷ್ಯ ಹಾಗೂ ರಾಷ್ಟ್ರವನ್ನು ಮತ್ತಷ್ಟು ಅಭಿವೃದ್ಧಿಯತ್ತ ಮುನ್ನಡೆಸುವ ಶಕ್ತಿ ದೊರೆಯಲಿ ಎಂಬ ಪ್ರಾರ್ಥನೆಯೊಂದಿಗೆ ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ವತಿಯಿಂದ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ವಿಶೇಷ ರಂಗ ಪೂಜೆ ನೆರವೇರಿಸಲಾಯಿತು.
ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್, ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕಳೆದ 12 ವರ್ಷಗಳಿಂದ ನಿರಂತರ, ಪಾರದರ್ಶಕ ಮತ್ತು ಜನಪರ ಆಡಳಿತ ನೀಡುತ್ತಿದ್ದು, ‘ವಿಕಸಿತ ಭಾರತ’ದ ಕನಸನ್ನು ಸಾಕಾರಗೊಳಿಸುವ ದಿಸೆಯಲ್ಲಿ ದೇಶವನ್ನು ಯಶಸ್ವಿಯಾಗಿ ಮುನ್ನಡೆಸುತ್ತಿದೆ ಎಂದು ಹೇಳಿದರು. ಜನಸಾಮಾನ್ಯರ ಕಲ್ಯಾಣ, ರಾಷ್ಟ್ರೀಯ ಭದ್ರತೆ ಮತ್ತು ಅಭಿವೃದ್ಧಿಗೆ ಬದ್ಧವಾಗಿರುವ ಮೋದಿ ಅವರಿಗೆ ದೇಶದ ಜನರ ಆಶೀರ್ವಾದ ನಿರಂತರವಾಗಿ ಲಭಿಸಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷ ಸತೀಶ್ ಕುಂಪಲ ಮಾತನಾಡಿ, ಪ್ರಧಾನಿ ಮೋದಿ ಅವರ ಯಶಸ್ವಿ ಆಡಳಿತದ 12ನೇ ವರ್ಷದ ಸಂಭ್ರಮಾಚರಣೆಯ ಅಂಗವಾಗಿ ಜಿಲ್ಲೆಯಾದ್ಯಂತ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು. ಇದೇ ಶನಿವಾರ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯಸಭಾ ಸದಸ್ಯ ಡಾ. ರಾಧಾ ಮೋಹನ್ ಅಗರ್ವಾಲ್ ಅವರು ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡಲಿದ್ದು, ಮಂಗಳೂರಿನ ಮಾರ್ಗನ್ ಗೇಟ್ನ ಪಾಲೆಮಾರ್ ಗಾರ್ಡನ್ನಲ್ಲಿ ನಡೆಯಲಿರುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಪ್ರೇಮಾನಂದ ಶೆಟ್ಟಿ ಹಾಗೂ ಯತೀಶ್ ಆರ್ವರ್, ಮಂಡಲ ಅಧ್ಯಕ್ಷ ರಮೇಶ್ ಕಂಡೆಟ್ಟು, ಮಹಿಳಾ ಮೋರ್ಚಾ ಜಿಲ್ಲಾ ಅಧ್ಯಕ್ಷೆ ಮಂಜುಳಾ ರಾವ್, ಯುವ ಮೋರ್ಚಾ ಜಿಲ್ಲಾ ಅಧ್ಯಕ್ಷ ನಂದನ್ ಮಲ್ಯ, ಪ್ರಮುಖರಾದ ಸುಧೀರ್ ಶೆಟ್ಟಿ ಕಣ್ಣೂರು, ಮೋನಪ್ಪ ಭಂಡಾರಿ, ಸಂಜಯ್ ಪ್ರಭು, ನಿತಿನ್ ಕುಮಾರ್, ರಾಜ್ಗೋಪಾಲ್ ರೈ, ನಿಕಟಪೂರ್ವ ಪಾಲಿಕೆ ಸದಸ್ಯರು ಸೇರಿದಂತೆ ಪಕ್ಷದ ವಿವಿಧ ಪದಾಧಿಕಾರಿಗಳು, ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.








