ಶಿವಮೊಗ್ಗ, ಜೂನ್ 14: ರೌಡಿಶೀಟರ್ ನರಸಿಂಹ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಮಧುಗೆ ಪೊಲೀಸರು ಗುಂಡು ಹಾರಿಸಿದ ಘಟನೆ ಶಿವಮೊಗ್ಗ ತಾಲೂಕಿನ ಹೊಳೆಬೆನವಳ್ಳಿ ಸಮೀಪದ ರಿಂಗ್ರೋಡ್ನಲ್ಲಿ ಭಾನುವಾರ ನಡೆದಿದೆ.
ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿದ್ದ ಮಧುವನ್ನು ತನಿಖೆಗಾಗಿ ಸ್ಥಳ ಮಹಜರಿಗೆ ಕರೆದೊಯ್ಯುವ ವೇಳೆ ಆತ ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ ಎಂದು ತಿಳಿದುಬಂದಿದೆ. ಈ ಸಂದರ್ಭದಲ್ಲಿ ಕರ್ತವ್ಯದಲ್ಲಿದ್ದ ರೌಡಿ ಕ್ರೈಂ ವಿಭಾಗದ ಸಿಬ್ಬಂದಿ ಅಂಜನಪ್ಪ ಅವರ ಮೇಲೆ ಹಲ್ಲೆ ನಡೆಸಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ.
ಆರೋಪಿಯನ್ನು ನಿಯಂತ್ರಿಸಲು ಮುಂದಾದ ಕೋಲೆ ಠಾಣೆಯ ಇನ್ಸ್ಪೆಕ್ಟರ್ ಹರೀಶ್ ಪಟೇಲ್ ಮೊದಲು ಎಚ್ಚರಿಕೆ ನೀಡಿದ್ದು, ಬಳಿಕ ಗಾಳಿಯಲ್ಲಿ ಗುಂಡು ಹಾರಿಸಿ ವಾರ್ನಿಂಗ್ ಕೊಟ್ಟಿದ್ದಾರೆ. ಆದರೂ ಮಧು ತನ್ನ ವರ್ತನೆ ಮುಂದುವರಿಸಿದ ಹಿನ್ನೆಲೆಯಲ್ಲಿ ಆತ್ಮರಕ್ಷಣೆ ಹಾಗೂ ಪರಿಸ್ಥಿತಿ ನಿಯಂತ್ರಣದ ಉದ್ದೇಶದಿಂದ ಆರೋಪಿಯ ಕಾಲಿಗೆ ಗುಂಡು ಹಾರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಯಲ್ಲಿ ಗಾಯಗೊಂಡ ಆರೋಪಿ ಮಧು ಹಾಗೂ ಪೊಲೀಸ್ ಸಿಬ್ಬಂದಿ ಅಂಜನಪ್ಪ ಅವರನ್ನು ತಕ್ಷಣ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಇಬ್ಬರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿದುಬಂದಿದೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ. ಮಿಥುನ್ ಅವರು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದು, ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.




