ಉಡುಪಿ, ಜೂನ್ 16: ಜಿಲ್ಲೆಯ ಕೈಗಾರಿಕಾ ಕ್ಷೇತ್ರದ ಬೆಳವಣಿಗೆಯೊಂದಿಗೆ ಸ್ಥಳೀಯ ಯುವಕರಿಗೆ ಹೆಚ್ಚಿನ ಉದ್ಯೋಗಾವಕಾಶಗಳನ್ನು ಕಲ್ಪಿಸುವ ನಿಟ್ಟಿನಲ್ಲಿ, ಕೈಗಾರಿಕೆಗಳಿಗೆ ಅಗತ್ಯವಿರುವ ವೃತ್ತಿಪರ ಕೌಶಲ್ಯ ತರಬೇತಿಗಳನ್ನು ಯುವಜನರಿಗೆ ನೀಡುವಂತೆ ಕೈಗಾರಿಕಾ ತರಬೇತಿ ಸಂಸ್ಥೆಗಳು ಕಾರ್ಯೋನ್ಮುಖವಾಗಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ್ ಟಿ.ಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ರಜತಾದ್ರಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಏಕಗವಾಕ್ಷಿ ಸಮಿತಿ, ಕೈಗಾರಿಕಾ ಸ್ಪಂದನ ಹಾಗೂ ಜಿಲ್ಲಾ ಮಟ್ಟದ ರಫ್ತು ಉತ್ತೇಜನ ಸಮಿತಿಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಸಣ್ಣ, ಮಧ್ಯಮ ಮತ್ತು ಬೃಹತ್ ಕೈಗಾರಿಕೆಗಳ ಸಂಖ್ಯೆಯನ್ನು ಹೆಚ್ಚಿಸುವ ಮೂಲಕ ಸ್ಥಳೀಯರಿಗೆ ಉದ್ಯೋಗ ಸೃಷ್ಟಿಯಾಗಲಿದ್ದು, ಉದ್ಯೋಗ ಅರಸಿ ಹೊರ ಜಿಲ್ಲೆಗಳಿಗೆ ತೆರಳುವ ಪರಿಸ್ಥಿತಿ ಕಡಿಮೆಯಾಗಲಿದೆ ಎಂದು ಅವರು ಅಭಿಪ್ರಾಯಪಟ್ಟರು. ಕೈಗಾರಿಕಾ ಬೆಳವಣಿಗೆಗೆ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸುವುದಕ್ಕೆ ಆದ್ಯತೆ ನೀಡುವಂತೆ ಸಂಬಂಧಿತ ಇಲಾಖೆಗೆ ಸೂಚಿಸಿದರು.
ಈ ಶೈಕ್ಷಣಿಕ ವರ್ಷದಿಂದಲೇ ಜಿಲ್ಲೆಯ ಐಟಿಐ, ಡಿಪ್ಲೊಮಾ ಹಾಗೂ ಜಿಟಿಟಿಸಿ ಸಂಸ್ಥೆಗಳಲ್ಲಿ ಕೈಗಾರಿಕೆಗಳ ಬೇಡಿಕೆಗೆ ಅನುಗುಣವಾದ ಹೊಸ ತರಬೇತಿ ಕೋರ್ಸ್ಗಳನ್ನು ಆರಂಭಿಸಿ, ವಿದ್ಯಾರ್ಥಿಗಳಿಗೆ ಇಂಟರ್ನ್ಶಿಪ್ ಹಾಗೂ ಅಪ್ರೆಂಟಿಸ್ಶಿಪ್ ಅವಕಾಶಗಳನ್ನು ಕಲ್ಪಿಸುವಂತೆ ನಿರ್ದೇಶಿಸಿದರು.
ಜಿಲ್ಲೆಯ ಕೈಗಾರಿಕಾ ಘಟಕಗಳಲ್ಲಿ ಸ್ಥಳೀಯರಿಗೆ ಹೆಚ್ಚಿನ ಪ್ರಮಾಣದಲ್ಲಿ ಉದ್ಯೋಗ ದೊರೆಯುತ್ತಿರುವುದು ಸಂತಸದ ಸಂಗತಿ ಎಂದು ತಿಳಿಸಿದ ಅವರು, 37 ಸಣ್ಣ ಕೈಗಾರಿಕೆಗಳಲ್ಲಿ ಶೇ.91.8, 47 ಮಧ್ಯಮ ಕೈಗಾರಿಕೆಗಳಲ್ಲಿ ಶೇ.95.1 ಹಾಗೂ 7 ಬೃಹತ್ ಕೈಗಾರಿಕೆಗಳಲ್ಲಿ ಶೇ.92.4 ರಷ್ಟು ಸ್ಥಳೀಯರು ಉದ್ಯೋಗ ಹೊಂದಿದ್ದಾರೆ. ಒಟ್ಟಾರೆ 91 ಕೈಗಾರಿಕಾ ಘಟಕಗಳಲ್ಲಿ ಶೇ.93.7 ರಷ್ಟು ಉದ್ಯೋಗಗಳು ಸ್ಥಳೀಯರಿಗೆ ಲಭಿಸಿವೆ ಎಂದು ಮಾಹಿತಿ ನೀಡಿದರು.
ಕೈಗಾರಿಕಾ ವಿಸ್ತರಣೆಯ ಭಾಗವಾಗಿ ಹೆಬ್ರಿ ತಾಲೂಕಿನ ಶಿವಪುರ, ಕೆರೆಬೆಟ್ಟು, ಕಾರ್ಕಳದ ನಿಟ್ಟೆ ಹಾಗೂ ಬ್ರಹ್ಮಾವರ ತಾಲೂಕಿನ ಉಪ್ಪೂರು ಪ್ರದೇಶಗಳಲ್ಲಿ ಹೊಸ ಕೈಗಾರಿಕಾ ವಲಯಗಳ ಅಭಿವೃದ್ಧಿಗೆ ಭೂಸ್ವಾಧೀನ ಸೇರಿದಂತೆ ಅಗತ್ಯ ಪ್ರಕ್ರಿಯೆಗಳನ್ನು ತ್ವರಿತಗೊಳಿಸುವಂತೆ ಸೂಚಿಸಿದರು.
ಕೈಗಾರಿಕಾ ನಿವೇಶನಗಳನ್ನು ಪಡೆದು ಹಲವು ವರ್ಷಗಳಾದರೂ ಘಟಕಗಳನ್ನು ಆರಂಭಿಸದ ಉದ್ಯಮಿಗಳಿಗೆ ಎಚ್ಚರಿಕೆ ನೀಡಿದ ಜಿಲ್ಲಾಧಿಕಾರಿಗಳು, ಎರಡು ತಿಂಗಳೊಳಗೆ ಕಾರ್ಯಾರಂಭ ಮಾಡದಿದ್ದರೆ ಅಂತಹ ನಿವೇಶನಗಳನ್ನು ಹಿಂಪಡೆದು ಅರ್ಹ ಉದ್ಯಮಿಗಳಿಗೆ ಮರುಹಂಚಿಕೆ ಮಾಡಲಾಗುವುದು ಎಂದು ಸ್ಪಷ್ಟಪಡಿಸಿದರು.
ಶಿವಳ್ಳಿ ಕೈಗಾರಿಕಾ ಪ್ರದೇಶದಲ್ಲಿ ರೆಡಿ ಮಿಕ್ಸ್ ಕಾಂಕ್ರೀಟ್ (ಆರ್ಎಂಸಿ) ಘಟಕಗಳ ಸ್ಥಾಪನೆಗೆ ಸಲ್ಲಿಕೆಯಾದ ಅರ್ಜಿಗಳ ಕುರಿತು ಮಾತನಾಡಿದ ಅವರು, ಸುತ್ತಮುತ್ತಲಿನ ಕೈಗಾರಿಕೆಗಳಿಗೆ ಯಾವುದೇ ರೀತಿಯ ತೊಂದರೆ ಉಂಟಾಗದಂತೆ ಸಮಗ್ರ ಪರಿಶೀಲನೆ ನಡೆಸಿ ಬಳಿಕವೇ ಅನುಮತಿ ನೀಡಬೇಕು ಎಂದು ಸೂಚಿಸಿದರು.
ಜಿಲ್ಲೆಯ ರಫ್ತು ಕ್ಷೇತ್ರದ ಸಾಧನೆಯನ್ನು ಉಲ್ಲೇಖಿಸಿದ ಅವರು, ಕಳೆದ ಸಾಲಿನಲ್ಲಿ ಮರೈನ್ ಉತ್ಪನ್ನಗಳು, ಗೋಡಂಬಿ, ಕಾಫಿ ಬೀನ್ ಸೇರಿದಂತೆ ಒಂಬತ್ತು ಪ್ರಮುಖ ಉತ್ಪನ್ನಗಳ ರಫ್ತಿನಿಂದ ₹2,593 ಕೋಟಿಗೂ ಅಧಿಕ ವಹಿವಾಟು ನಡೆದಿದೆ ಎಂದು ತಿಳಿಸಿದರು. ಮುಂದಿನ ದಿನಗಳಲ್ಲಿ ಜಿಲ್ಲೆಯ ರಫ್ತು ಪ್ರಮಾಣವನ್ನು ಮತ್ತಷ್ಟು ಹೆಚ್ಚಿಸಲು ವಿಶೇಷ ಯೋಜನೆಗಳನ್ನು ರೂಪಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯ ಸ್ವಚ್ಛತೆ, ಒಣತ್ಯಾಜ್ಯ ಸಂಗ್ರಹ ಘಟಕಗಳ ಸ್ಥಾಪನೆ ಹಾಗೂ ಕೈಗಾರಿಕೆಗಳಿಂದ ಉತ್ಪತ್ತಿಯಾಗುವ ದ್ರವತ್ಯಾಜ್ಯಗಳ ವೈಜ್ಞಾನಿಕ ಸಂಸ್ಕರಣೆಗೆ ಕೈಗಾರಿಕೋದ್ಯಮಿಗಳು ಸಹಕರಿಸಬೇಕು ಎಂದು ಅವರು ಮನವಿ ಮಾಡಿದರು.
ಸಭೆಯಲ್ಲಿ ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ನಾಗರಾಜ್ ವಿ. ನಾಯಕ್, ಜಿಲ್ಲಾ ಕೈಗಾರಿಕಾ ಕೇಂದ್ರದ ಉಪನಿರ್ದೇಶಕ ಸೀತಾರಾಮ ಶೆಟ್ಟಿ, ಸಣ್ಣ ಕೈಗಾರಿಕಾ ಸಂಘದ ಜಿಲ್ಲಾ ಅಧ್ಯಕ್ಷ ವಸಂತ ಕಿಣಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಉದ್ಯಮಿಗಳು ಉಪಸ್ಥಿತರಿದ್ದರು.
