ಬೆಳಗಾವಿ, ಜೂನ್ 20: ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಎಂ.ಕೆ. ಹುಬ್ಬಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ-48ರಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಲಾರಿಗೆ ಬೆಂಕಿ ಕಾಣಿಸಿಕೊಂಡು 500ಕ್ಕೂ ಹೆಚ್ಚು ಗೋವಿನ ಜೋಳದ ಚೀಲಗಳು ಸುಟ್ಟು ಭಸ್ಮವಾದ ಘಟನೆ ನಡೆದಿದೆ.
ಕಿತ್ತೂರು ಮಾರ್ಗವಾಗಿ ಬೆಳಗಾವಿ ಕಡೆಗೆ ಬರುತ್ತಿದ್ದ ಹಾಲಿನ ಟ್ಯಾಂಕರ್, ಜೋಳದ ಚೀಲಗಳನ್ನು ತುಂಬಿಕೊಂಡು ಸಾಗುತ್ತಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಈ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ. ಡಿಕ್ಕಿಯ ರಭಸಕ್ಕೆ ಲಾರಿಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಕೆಲವೇ ಕ್ಷಣಗಳಲ್ಲಿ ಬೆಂಕಿ ಸಂಪೂರ್ಣ ವಾಹನವನ್ನು ಆವರಿಸಿದೆ.
ಲಾರಿಯಲ್ಲಿ ಸಾಗಿಸುತ್ತಿದ್ದ 500ಕ್ಕೂ ಹೆಚ್ಚು ಗೋವಿನ ಜೋಳದ ಚೀಲಗಳು ಬೆಂಕಿಗಾಹುತಿಯಾಗಿ ಸುಟ್ಟು ಕರಕಲಾಗಿವೆ. ಅಪಘಾತದ ತೀವ್ರತೆ ಭಾರೀ ಪ್ರಮಾಣದಲ್ಲಿದ್ದರೂ, ಎರಡೂ ವಾಹನಗಳ ಚಾಲಕರು ಸಮಯಪ್ರಜ್ಞೆಯಿಂದ ವಾಹನಗಳಿಂದ ಹೊರಬಂದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಮತ್ತು ಅಗ್ನಿ ನಂದಿಸುವ ಕಾರ್ಯಾಚರಣೆ ಕೈಗೊಂಡರು. ಬೆಂಕಿಯ ತೀವ್ರತೆ ಹೆಚ್ಚಿದ್ದರಿಂದ ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಟ್ಟು ಬೆಂಕಿಯನ್ನು ನಿಯಂತ್ರಣಕ್ಕೆ ತಂದರು.
ಅಪಘಾತದಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದ್ದು, ಪೊಲೀಸರು ಸಂಚಾರವನ್ನು ಸುಗಮಗೊಳಿಸುವ ಕಾರ್ಯ ನಡೆಸಿದರು. ಘಟನೆಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಆಸ್ತಿ ನಷ್ಟ ಸಂಭವಿಸಿರುವುದಾಗಿ ಅಂದಾಜಿಸಲಾಗಿದೆ.
ಈ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತದ ನಿಖರ ಕಾರಣದ ಕುರಿತು ತನಿಖೆ ಮುಂದುವರಿದಿದೆ.
