ಉಡುಪಿ, ಜೂನ್ 22: ಕಾನೂನುಬದ್ಧ ದತ್ತು ಪ್ರಕ್ರಿಯೆ ಅನುಸರಿಸದೇ ನವಜಾತ ಹೆಣ್ಣು ಮಗುವನ್ನು ಸಾಕುತ್ತಿದ್ದ ಪ್ರಕರಣವೊಂದು ಉಡುಪಿಯಲ್ಲಿ ಬೆಳಕಿಗೆ ಬಂದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಖಾಸಗಿ ಆಸ್ಪತ್ರೆಯ ವೈದ್ಯರು ಹಾಗೂ ಮಗುವನ್ನು ಸಾಕುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಸಂತೆಕಟ್ಟೆ-ನೇಜಾರು ನಿವಾಸಿಗಳಾದ ಪ್ರಕಾಶ್ ಮತ್ತು ಪೂರ್ಣಿಮಾ ದಂಪತಿ ಸುಮಾರು ಒಂದು ತಿಂಗಳ ಹೆಣ್ಣು ಮಗುವನ್ನು ಯಾವುದೇ ಅಧಿಕೃತ ದಾಖಲೆಗಳಿಲ್ಲದೆ ಸಾಕುತ್ತಿರುವ ಬಗ್ಗೆ ಮಕ್ಕಳ ರಕ್ಷಣಾ ಘಟಕಕ್ಕೆ ಮಾಹಿತಿ ಲಭಿಸಿತ್ತು. ಈ ಹಿನ್ನೆಲೆಯಲ್ಲಿ ಶಿಶು ಅಭಿವೃದ್ಧಿ ಇಲಾಖೆ ಮತ್ತು ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ಜೂನ್ 19ರಂದು ದಂಪತಿಯ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ತನಿಖೆ ವೇಳೆ ದಂಪತಿಗೆ ವಿವಾಹವಾಗಿ 11 ವರ್ಷಗಳಾದರೂ ಸಂತಾನವಾಗದ ಹಿನ್ನೆಲೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂಬುದು ತಿಳಿದುಬಂದಿದೆ. ಈ ಸಂದರ್ಭದಲ್ಲಿ ಆಸ್ಪತ್ರೆಯೊಂದರಲ್ಲಿ ನವಜಾತ ಶಿಶು ಇರುವ ಮಾಹಿತಿ ದೊರೆತಿದ್ದು, ಅದರ ಆಧಾರದ ಮೇಲೆ ಉಡುಪಿಯ ಕಾಮತ್ ನರ್ಸಿಂಗ್ ಹೋಂನ ವೈದ್ಯ ಡಾ. ಕೆ. ಸುರೇಂದ್ರ ಕಾಮತ್ ಅವರನ್ನು ಸಂಪರ್ಕಿಸಿ ಮಗುವನ್ನು ಪಡೆದಿರುವುದಾಗಿ ಹೇಳಲಾಗಿದೆ.
ಪೊಲೀಸ್ ತನಿಖೆಯ ಪ್ರಕಾರ, ವೈದ್ಯರು ಮಗುವನ್ನು ದಂಪತಿಗೆ ಹಸ್ತಾಂತರಿಸಿರುವುದಲ್ಲದೆ, ಮಗುವಿನ ಹೆಸರಿನಲ್ಲಿ ಜನನ ಪ್ರಮಾಣ ಪತ್ರ ಸಿದ್ಧಪಡಿಸಿರುವ ಆರೋಪವೂ ಕೇಳಿಬಂದಿದೆ. ಮಗುವಿನ ನಿಜವಾದ ಪೋಷಕರ ಕುರಿತು ಯಾವುದೇ ಮಾಹಿತಿ ಇಲ್ಲ ಎಂದು ದಂಪತಿ ಅಧಿಕಾರಿಗಳ ಮುಂದೆ ತಿಳಿಸಿದ್ದಾರೆ.
ಪ್ರಾಥಮಿಕ ತನಿಖೆಯಲ್ಲಿ ಶಿಶು ಕಳ್ಳಸಾಗಣೆ, ಅಕ್ರಮ ದತ್ತು ಪ್ರಕ್ರಿಯೆ, ನಕಲಿ ದಾಖಲೆಗಳ ಸೃಷ್ಟಿ ಹಾಗೂ ಹಣಕಾಸು ಲಾಭಕ್ಕಾಗಿ ಒಳಸಂಚು ನಡೆಸಿರುವ ಶಂಕೆಗಳು ವ್ಯಕ್ತವಾಗಿವೆ. ಈ ಸಂಬಂಧ ಮಹಿಳಾ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 41/2026ರಡಿ ಭಾರತೀಯ ನ್ಯಾಯ ಸಂಹಿತೆ (BNS) ಕಲಂ 143(4), 61, 318(2) ಜೊತೆಗೆ 3(5) ಹಾಗೂ ಜುವೆನೈಲ್ ಜಸ್ಟಿಸ್ ಕಾಯ್ದೆಯ ಕಲಂ 81ರಡಿ ಪ್ರಕರಣ ದಾಖಲಾಗಿದೆ.
ಪ್ರಕರಣ ಸಂಬಂಧ ಡಾ. ಕೆ. ಸುರೇಂದ್ರ ಕಾಮತ್ (76) ಹಾಗೂ ಎಸ್. ಪ್ರಕಾಶ್ (50) ಅವರನ್ನು ಬಂಧಿಸಲಾಗಿದ್ದು, ಪ್ರಕರಣದಲ್ಲಿ ಭಾಗಿಯಾಗಿರುವ ಇನ್ನಿಬ್ಬರು ಆರೋಪಿಗಳಿಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ. ಪ್ರಕರಣದ ಕುರಿತು ಮಹಿಳಾ ಪೊಲೀಸ್ ಠಾಣೆ ಅಧಿಕಾರಿಗಳು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

