ಬಜಪೆ, ಜೂನ್ 29: ಶಿಕ್ಷಣಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕಿರಿಯ ಪ್ರಾಥಮಿಕ ಶಾಲೆ, ಕೊಳಂಬೆಯಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ, ನೋಟ್ ಪುಸ್ತಕ ಹಾಗೂ ಸಮವಸ್ತ್ರ ವಿತರಣಾ ಕಾರ್ಯಕ್ರಮ ಅರ್ಥಪೂರ್ಣವಾಗಿ ನಡೆಯಿತು.

ಸರಿತಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ಹಾಗೂ ನೋಟ್ ಪುಸ್ತಕಗಳನ್ನು ವಿತರಿಸಲಾಯಿತು. ಇದೇ ಸಂದರ್ಭದಲ್ಲಿ ವಕೀಲರಾದ ವಿನೋಧರ ಪೂಜಾರಿ ಅವರ ಸಹಕಾರದೊಂದಿಗೆ ಶಾಲಾ ಮಕ್ಕಳಿಗೆ ಉಚಿತ ಸಮವಸ್ತ್ರಗಳನ್ನು ವಿತರಿಸಿ ಶಿಕ್ಷಣದ ಬಗ್ಗೆ ಮತ್ತಷ್ಟು ಆಸಕ್ತಿ ಮೂಡಿಸುವ ಪ್ರಯತ್ನ ಮಾಡಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಮೋಲಿ ಮೆರಿನಾ ಲೈಸಾ ವಹಿಸಿದ್ದರು. ಅವರು ಮಾತನಾಡಿ, ಸಮಾಜದ ದಾನಿಗಳ ಸಹಕಾರದಿಂದ ಇಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಪ್ರೇರಣೆ ನೀಡುತ್ತವೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಎಸ್.ಡಿ.ಎಂ.ಸಿ. ಅಧ್ಯಕ್ಷ ಮಮತಾ, ಎಸ್.ಡಿ.ಎಂ.ಸಿ. ಉಪಾಧ್ಯಕ್ಷ ಶಾಂತರಾಮ್, ಹಳೆ ವಿದ್ಯಾರ್ಥಿ
ಸಂಘದ ಅಧ್ಯಕ್ಷ ಜಯಂತ್, ನೃತ್ಯ ಶಿಕ್ಷಕಿ ನಿರ್ಮಲಾ, ಶಾಲಾ ಸಹಶಿಕ್ಷಕಿ ವನಿತಾ, ಸ್ಥಳೀಯ ಶಿಕ್ಷಣ ಸಮಿತಿಯ ಸದಸ್ಯರು, ಗ್ರಾಮಸ್ಥರು ಹಾಗೂ ಪೋಷಕರು ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ಕಾರ್ಯಕ್ರಮದ ಯಶಸ್ವಿಗೆ ನಾರಾಯಣ ಪೂಜಾರಿ ಸಹಕಾರ ನೀಡಿದರು. ಕಾರ್ಯಕ್ರಮದಲ್ಲಿ ಎಲ್ಲರನ್ನು ಆತ್ಮೀಯವಾಗಿ ಸ್ವಾಗತಿಸಿ, ಕೊನೆಯಲ್ಲಿ ವಂದನಾರ್ಪಣೆ ಸಲ್ಲಿಸಲಾಯಿತು.
ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗೆ ಪೂರಕವಾದ ಈ ಕಾರ್ಯಕ್ರಮವು ಸಮಾಜದ ಸಹಭಾಗಿತ್ವದ ಮಹತ್ವವನ್ನು ಸಾರುವುದರೊಂದಿಗೆ ಶಿಕ್ಷಣ ಕ್ಷೇತ್ರಕ್ಕೆ ಮತ್ತಷ್ಟು ಬಲ ತುಂಬುವಲ್ಲಿ ಪ್ರಮುಖ ಹೆಜ್ಜೆಯಾಗಿದೆ.

