ಮಂಗಳೂರು, ಜುಲೈ 1: ಮಂಗಳೂರಿನ ಕಂಕನಾಡಿ ಪೊಲೀಸ್ ಠಾಣೆಯ ಹಿಂಭಾಗದ ನಾಗೋರಿ ಪ್ರದೇಶದಲ್ಲಿ ಭಾರೀ ಮಳೆಯ ಪರಿಣಾಮ ಸಂಭವಿಸಿದ ಗೋಡೆ ಕುಸಿತದಿಂದ ಮನೆ ಭಾಗಶಃ ಕುಸಿದು ಮಹಿಳೆಯೊಬ್ಬರು ಹಾಗೂ ಇಬ್ಬರು ಬಾಲಕಿಯರು ಸೇರಿದಂತೆ ಮೂವರು ಮೃತಪಟ್ಟಿರುವ ದುರಂತದ ಹಿನ್ನೆಲೆಯಲ್ಲಿ ಜನತಾದಳ (ಜಾತ್ಯತೀತ) ಪಕ್ಷದ ನಿಯೋಗವು ಮಂಗಳವಾರ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತು.
ದುರಂತದಲ್ಲಿ ಅಮೂಲ್ಯ ಜೀವಗಳು ಬಲಿಯಾಗಿರುವುದು ಅತ್ಯಂತ ದುಃಖದ ಸಂಗತಿಯಾಗಿದೆ ಎಂದು ಸಂತಾಪ ವ್ಯಕ್ತಪಡಿಸಿದ ಜೆಡಿಎಸ್ ಮುಖಂಡರು, ಮೃತರ ಆತ್ಮಕ್ಕೆ ಚಿರಶಾಂತಿ ಹಾಗೂ ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿದರು. ಅಲ್ಲದೆ, ಮೃತರ ಕುಟುಂಬದವರಿಗೆ ಈ ದುಃಖವನ್ನು ಭರಿಸುವ ಶಕ್ತಿ ದೊರೆಯಲಿ ಎಂದು ಸಾಂತ್ವನ ಹೇಳಿದರು.

ಬಳಿಕ ಮಾತನಾಡಿದ ಜೆಡಿಎಸ್ ಜಿಲ್ಲಾ ಮಹಾಪ್ರಧಾನ ಕಾರ್ಯದರ್ಶಿ ಯೋಗೀಶ್ ಶೆಟ್ಟಿ ಜಪ್ಪು, ಕಳೆದ ಕೆಲವು ವರ್ಷಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಸಂದರ್ಭಗಳಲ್ಲಿ ಭೂಕುಸಿತ, ಗುಡ್ಡ ಕುಸಿತ, ಮನೆ ಕುಸಿತ ಹಾಗೂ ನೆರೆ ಅವಾಂತರಗಳು ನಿರಂತರವಾಗಿ ಮರುಕಳಿಸುತ್ತಿವೆ. ಅಪಾಯದ ಪ್ರದೇಶಗಳನ್ನು ಮುಂಚಿತವಾಗಿ ಗುರುತಿಸಿ, ಅಲ್ಲಿನ ನಿವಾಸಿಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವ ಕಾರ್ಯವನ್ನು ಜಿಲ್ಲಾಡಳಿತ ಇನ್ನಷ್ಟು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕಾಗಿದೆ ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಜೆಡಿಎಸ್ ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತವನ್ನು ಒತ್ತಾಯಿಸಿ ಈ ಕೆಳಗಿನ ಬೇಡಿಕೆಗಳನ್ನು ಮುಂದಿರಿಸಿತು:
• ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಕ್ಷಣವೇ ನ್ಯಾಯಸಮ್ಮತ ಪರಿಹಾರ ಘೋಷಿಸಿ, ಅಗತ್ಯ ಪುನರ್ವಸತಿ ಸೌಲಭ್ಯಗಳನ್ನು ಒದಗಿಸಬೇಕು.
• ಗಾಯಾಳುಗಳ ಚಿಕಿತ್ಸೆಯ ಸಂಪೂರ್ಣ ವೆಚ್ಚವನ್ನು ರಾಜ್ಯ ಸರ್ಕಾರವೇ ಭರಿಸಬೇಕು.
• ಜಿಲ್ಲೆಯ ಎಲ್ಲಾ ಭೂಕುಸಿತ ಅಪಾಯ ಪ್ರದೇಶಗಳ ವೈಜ್ಞಾನಿಕ ಸಮೀಕ್ಷೆ ನಡೆಸಿ, ಅಪಾಯಕಾರಿ ಪ್ರದೇಶಗಳಲ್ಲಿ ವಾಸಿಸುವ ಕುಟುಂಬಗಳನ್ನು ಮುಂಗಡವಾಗಿ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಬೇಕು.
• ಮುಂಗಾರು ಅವಧಿಯಲ್ಲಿ ಅಪಾಯದ ಪ್ರದೇಶಗಳ ಮೇಲೆ ನಿರಂತರ ನಿಗಾವಹಿಸಿ, ಜೀವಹಾನಿ ತಪ್ಪಿಸಲು ಶಾಶ್ವತ ಹಾಗೂ ವೈಜ್ಞಾನಿಕ ವಿಪತ್ತು ನಿರ್ವಹಣಾ ಯೋಜನೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು.

ಜೆಡಿಎಸ್ ಯುವ ಘಟಕದ ಜಿಲ್ಲಾಧ್ಯಕ್ಷ ಅಕ್ಷಿತ್ ಸುವರ್ಣ ಮಾತನಾಡಿ, “ಒಂದೇ ಘಟನೆಯಲ್ಲಿ ಮೂವರು ಅಮಾಯಕರು ಜೀವ ಕಳೆದುಕೊಂಡಿರುವುದು ಇಡೀ ಮಂಗಳೂರು ನಗರವನ್ನು ಶೋಕದಲ್ಲಿ ಮುಳುಗಿಸಿದೆ. ಇಂತಹ ದುರಂತಗಳು ಮರುಕಳಿಸದಂತೆ ಸರ್ಕಾರ ತಾತ್ಕಾಲಿಕ ಪರಿಹಾರ ಕ್ರಮಗಳಿಗೆ ಸೀಮಿತವಾಗದೆ, ದೀರ್ಘಕಾಲಿಕ ಮತ್ತು ವೈಜ್ಞಾನಿಕ ಸುರಕ್ಷತಾ ಯೋಜನೆಗಳನ್ನು ಜಾರಿಗೆ ತಂದು ಮಾನವ ಜೀವಗಳ ರಕ್ಷಣೆಗೆ ಅತ್ಯುನ್ನತ ಆದ್ಯತೆ ನೀಡಬೇಕು” ಎಂದು ಒತ್ತಾಯಿಸಿದರು.

ದುರಂತ ಸ್ಥಳಕ್ಕೆ ಭೇಟಿ ನೀಡಿದ ಜೆಡಿಎಸ್ ನಿಯೋಗದಲ್ಲಿ ರಾಜ್ಯ ಮೀನುಗಾರರ ಘಟಕದ ಅಧ್ಯಕ್ಷ ರತ್ನಾಕರ ಸುವರ್ಣ, ಜಿಲ್ಲಾ ಕಾರ್ಯಾಧ್ಯಕ್ಷ ಶಶಿರಾಜ್ ಶೆಟ್ಟಿ, ಪ್ರಶಾಂತ್ ಭಟ್ ಕಡಬ ಸೇರಿದಂತೆ ಪಕ್ಷದ ಹಲವು ಮುಖಂಡರು ಉಪಸ್ಥಿತರಿದ್ದರು.


