ಕಲಬುರ್ಗಿ, ಜುಲೈ 11: ನಗರದ ಅತ್ಯಂತ ಜನನಿಬಿಡ ಹಾಗೂ ಪ್ರಮುಖ ವಾಣಿಜ್ಯ ಪ್ರದೇಶಗಳಲ್ಲಿ ಒಂದಾದ ಜಗತ್ ವೃತ್ತದಲ್ಲಿ ಮಂಗಳವಾರ ರಾತ್ರಿ ನಡೆದ ದಾರುಣ ಘಟನೆಯೊಂದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಕರ್ತವ್ಯದಲ್ಲಿದ್ದ ಜಿಲ್ಲಾ ಸಶಸ್ತ್ರ ಮೀಸಲು ಪಡೆ (CAR)ಯ ಪೊಲೀಸ್ ಕಾನ್ಸ್ಟೇಬಲ್ ಪೊಲೀಸ್ ಕಾನ್ಸ್ಟೇಬಲ್ ಶಿವಕುಮಾರ ನರಿಬೋಳ ತಮ್ಮ ಸೇವಾ ರೈಫಲ್ನಿಂದ ತಮಗೆ ತಾವೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ.
ಸಾರ್ವಜನಿಕರ ಸಂಚಾರ ಹೆಚ್ಚಿರುವ ಜಗತ್ ವೃತ್ತದಲ್ಲಿ ಈ ಘಟನೆ ನಡೆದಿದ್ದು, ಗುಂಡಿನ ಸದ್ದು ಕೇಳುತ್ತಿದ್ದಂತೆಯೇ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ಮಾಹಿತಿ ತಿಳಿಯುತ್ತಿದ್ದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಸ್ಥಳೀಯ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು.
ಮೃತ ಕಾನ್ಸ್ಟೇಬಲ್ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ. ವೈಯಕ್ತಿಕ ಅಥವಾ ಸೇವಾ ಸಂಬಂಧಿತ ಯಾವುದೇ ಕಾರಣಗಳಿದ್ದವೆಯೇ ಎಂಬ ಎಲ್ಲಾ ಆಯಾಮಗಳಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದು, ತನಿಖೆಯ ಬಳಿಕವೇ ಆತ್ಮಹತ್ಯೆಯ ಹಿಂದಿನ ಕಾರಣ ಸ್ಪಷ್ಟವಾಗುವ ಸಾಧ್ಯತೆಯಿದೆ.
ಈ ಘಟನೆ ಪೊಲೀಸ್ ಇಲಾಖೆ ಹಾಗೂ ಸಾರ್ವಜನಿಕರಲ್ಲಿ ಆಘಾತ ಮೂಡಿಸಿದ್ದು, ಮೃತ ಪೊಲೀಸ್ ಸಿಬ್ಬಂದಿಯ ಅಗಲಿಕೆಗೆ ಸಹೋದ್ಯೋಗಿಗಳು ಸಂತಾಪ ವ್ಯಕ್ತಪಡಿಸಿದ್ದಾರೆ.

