ಕುಂದಾಪುರ, ಜುಲೈ 11: ಕರ್ನಾಟಕ ರಾಜ್ಯ ವಕೀಲರ ಪರಿಷತ್ (ಕೆಎಸ್ಬಿಸಿ) ಚುನಾವಣೆಯಲ್ಲಿ ಕುಂದಾಪುರದ ಹಿರಿಯ ನ್ಯಾಯವಾದಿ ಶ್ಯಾಮಲಾ ಭಂಡಾರಿ ಅವರು ಗಮನಾರ್ಹ ವಿಜಯ ಸಾಧಿಸಿ ಅವಳಿ ಜಿಲ್ಲೆಗಳ ಕಾನೂನು ಇತಿಹಾಸದಲ್ಲಿ ಹೊಸ ಅಧ್ಯಾಯ ಬರೆದಿದ್ದಾರೆ.
ಈ ಗೆಲುವಿನೊಂದಿಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಇತಿಹಾಸದಲ್ಲೇ ಕರ್ನಾಟಕ ರಾಜ್ಯ ವಕೀಲರ ಪರಿಷತ್ತಿನ ಸದಸ್ಯೆಯಾಗಿ ಆಯ್ಕೆಯಾದ ಮೊದಲ ಮಹಿಳೆ ಎಂಬ ಅಪೂರ್ವ ಗೌರವಕ್ಕೆ ಅವರು ಪಾತ್ರರಾಗಿದ್ದಾರೆ..
ಹಲವು ದಶಕಗಳಿಂದ ವಕೀಲ ವೃತ್ತಿಯಲ್ಲಿ ಸಕ್ರಿಯರಾಗಿರುವ ಶ್ಯಾಮಲಾ ಭಂಡಾರಿ ಅವರು ನ್ಯಾಯಾಂಗ ಸೇವೆಯ ಜೊತೆಗೆ ಶೈಕ್ಷಣಿಕ, ಸಾಮಾಜಿಕ ಹಾಗೂ ಕಾನೂನು ಜಾಗೃತಿ ಕ್ಷೇತ್ರಗಳಲ್ಲಿ ಮಹತ್ವದ ಕೊಡುಗೆ ನೀಡಿದ್ದಾರೆ. ಜನಪರ ಚಿಂತನೆ, ಸೇವೆ ಮತ್ತು ಸಮಾಜಮುಖಿ ಕಾರ್ಯಗಳ ಮೂಲಕ ಅವರು ವಕೀಲ ಸಮುದಾಯದಲ್ಲಿ ವಿಶಿಷ್ಟ ಸ್ಥಾನವನ್ನು ಗಳಿಸಿದ್ದಾರೆ.
ಮಹಿಳಾ ಸಬಲೀಕರಣ, ಹಾಗೂ ಪ್ರಗತಿಪರ ಚಳವಳಿಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಅವರು, ರಾಜಕೀಯ ಮತ್ತು ಸಾರ್ವಜನಿಕ ಬದುಕಿನಲ್ಲಿಯೂ ತಮ್ಮ ಛಾಪು ಮೂಡಿಸಿದ್ದಾರೆ. ಪ್ರಸ್ತುತ ಕರ್ನಾಟಕ ರಾಜ್ಯ ನೋಟರಿ ವಕೀಲರ ಸಂಘದ ರಾಜ್ಯಾಧ್ಯಕ್ಷರಾಗಿ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿರುವ ಅವರು, ವಿವಿಧ ಸಂಘ-ಸಂಸ್ಥೆಗಳ ನೇತೃತ್ವ ವಹಿಸಿ ಸಮಾಜಮುಖಿ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಮುನ್ನಡೆಸುತ್ತಿದ್ದಾರೆ.

