ಮಂಗಳೂರು, ಜುಲೈ 14: ಜನತಾದಳ (ಜಾತ್ಯತೀತ) ಪಕ್ಷದ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ನೂತನ ಪದಾಧಿಕಾರಿಗಳಿಗೆ ಮಂಗಳವಾರ ನೇಮಕ ಪತ್ರ ವಿತರಣೆ ಕಾರ್ಯಕ್ರಮ ನಡೆಯಿತು. ಜಿಲ್ಲಾ ಅಧ್ಯಕ್ಷರಾದ ಜಾಕೆ ಮಾಧವ ಗೌಡ ಅವರ ಮಾರ್ಗದರ್ಶನದಂತೆ, ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾದ ಎನ್.ಪಿ. ಪುಷ್ಪರಾಜನ್ ಅವರು ನೂತನ ಪದಾಧಿಕಾರಿಗಳಿಗೆ ಅಧಿಕೃತ ನೇಮಕ ಪತ್ರಗಳನ್ನು ನೀಡಿ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಎನ್.ಪಿ. ಪುಷ್ಪರಾಜನ್ ಅವರು, ಪಕ್ಷದ ತತ್ವ-ಸಿದ್ಧಾಂತಗಳನ್ನು ಜನಸಾಮಾನ್ಯರಿಗೆ ತಲುಪಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬ ಪದಾಧಿಕಾರಿಯೂ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು. ಪಕ್ಷ ಸಂಘಟನೆಗೆ ಹೊಸ ಚೈತನ್ಯ ತುಂಬುವ ಉದ್ದೇಶದಿಂದ ವಿವಿಧ ಹಂತಗಳಲ್ಲಿ ಸಮರ್ಥ ಕಾರ್ಯಕರ್ತರಿಗೆ ಜವಾಬ್ದಾರಿಗಳನ್ನು ನೀಡಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಪ್ರಮುಖರನ್ನು ವಿವಿಧ ಘಟಕಗಳಿಗೆ ನೇಮಕ ಮಾಡಿ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅನ್ನು ಇನ್ನಷ್ಟು ಬಲಿಷ್ಠಗೊಳಿಸಲಾಗುವುದು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಕ್ಷೇತ್ರದ ಕಾರ್ಯಾಧ್ಯಕ್ಷರಾದ ವಸಂತ ಪೂಜಾರಿ ಅವರು, ಹೊಸದಾಗಿ ನೇಮಕಗೊಂಡ ಪದಾಧಿಕಾರಿಗಳು ಪಕ್ಷದ ಸಂಘಟನೆ, ಸದಸ್ಯತ್ವ ವೃದ್ಧಿ ಹಾಗೂ ಜನಪರ ಹೋರಾಟಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಪಕ್ಷದ ಬೆಳವಣಿಗೆಗೆ ಶ್ರಮಿಸಬೇಕು ಎಂದು ಕರೆ ನೀಡಿದರು.
ಜಿಲ್ಲಾ ಮಹಾ ಪ್ರಧಾನ ಕಾರ್ಯದರ್ಶಿಯಾದ ಯೋಗಿಶ್ ಶೆಟ್ಟಿ ಜಪ್ಪು ಅವರು ಮಾತನಾಡಿ, ಪಕ್ಷದ ಜವಾಬ್ದಾರಿ ಎಂದರೆ ಕೇವಲ ಹುದ್ದೆಯಲ್ಲ, ಅದು ಸಮಾಜ ಸೇವೆಯ ಅವಕಾಶವಾಗಿದೆ. ಪಕ್ಷದ ಸಂಘಟನೆಯನ್ನು ಗ್ರಾಮ ಮಟ್ಟದಿಂದ ಬೂತ್ ಮಟ್ಟದವರೆಗೆ ಬಲಪಡಿಸುವಲ್ಲಿ ಎಲ್ಲರೂ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ನೂತನ ಪದಾಧಿಕಾರಿಗಳಿಗೆ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಮೀನುಗಾರ ಘಟಕದ ಜಿಲ್ಲಾಧ್ಯಕ್ಷರಾದ ರತ್ನಾಕರ್ ಸುವರ್ಣ, ಯುವ ಘಟಕದ ಜಿಲ್ಲಾಧ್ಯಕ್ಷರಾದ ಅಕ್ಷಿತ್ ಸುವರ್ಣ, ಜೆಡಿಎಸ್ ಕಾನೂನು ಘಟಕದ ಅಧ್ಯಕ್ಷೆ ಭಾರತಿ ಪುಷ್ಪರಾಜನ್ ಸೇವಾದಳದ ಹಮೀದ್ ಬೆಂಗ್ರೆ , ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದು ನೂತನ ಪದಾಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಸುಮಿತ್ ಸುವರ್ಣ ಅವರನ್ನು ಕಾರ್ಯದರ್ಶಿಯಾಗಿ, ಪ್ರಾನ್ಸಿಸ್ ಅವರನ್ನು ಪ್ರಧಾನ ಕಾರ್ಯದರ್ಶಿಯಾಗಿ, ಜಾವೀದ್ ಸಲೀಂ ಅವರನ್ನು ಸಂಘಟನಾ ಕಾರ್ಯದರ್ಶಿಯಾಗಿ ಹಾಗೂ ಲತೀಫ್ ಬೆಂಗ್ರೆ ಅವರನ್ನು ಕಾರ್ಯದರ್ಶಿಯಾಗಿ ನೇಮಕ ಮಾಡಿ ಅಧಿಕೃತ ಆದೇಶ ಪತ್ರಗಳನ್ನು ವಿತರಿಸಲಾಯಿತು.
ಪಕ್ಷದ ಬೆಳವಣಿಗೆಗೆ ಶ್ರಮಿಸುತ್ತಿರುವ ಸಮರ್ಪಿತ ಕಾರ್ಯಕರ್ತರನ್ನು ಗುರುತಿಸಿ ಮುಂದಿನ ದಿನಗಳಲ್ಲಿ ಇನ್ನಷ್ಟು ಪ್ರಮುಖರಿಗೆ ವಿವಿಧ ಜವಾಬ್ದಾರಿಗಳನ್ನು ನೀಡಲಾಗುವುದು. ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅನ್ನು ಜನಪರ, ಶಕ್ತಿಶಾಲಿ ಸಂಘಟನೆಯಾಗಿ ರೂಪಿಸುವ ನಿಟ್ಟಿನಲ್ಲಿ ನಿರಂತರ ಸಂಘಟನಾ ಚಟುವಟಿಕೆಗಳನ್ನು ಕೈಗೊಳ್ಳಲಾಗುವುದು ಎಂದು ಪಕ್ಷದ ಮುಖಂಡರು ತಿಳಿಸಿದರು.

