ಉಡುಪಿ, ಜುಲೈ 31: ಉಡುಪಿ ಜಿಲ್ಲೆಯ ಕುಂದಾಪುರ ಪಟ್ಟಣದ ಚರ್ಚ್ ರಸ್ತೆಯಲ್ಲಿ ಶುಕ್ರವಾರ ನಸುಕಿನ ವೇಳೆ ದುಷ್ಕರ್ಮಿಗಳು ಪಿಸ್ತೂಲ್ನಿಂದ ಗುಂಡು ಹಾರಿಸಿ ಉದ್ಯಮಿಯೊಬ್ಬರನ್ನು ಹತ್ಯೆಗೈದ ಘಟನೆ ಸಂಭವಿಸಿದ್ದು, ಈ ಘಟನೆ ಜಿಲ್ಲೆಯ ಜನರಲ್ಲಿ ಆತಂಕ ಮೂಡಿಸಿದೆ.

ಮೃತರನ್ನು ಐವನ್ ರಿಚಾರ್ಡ್ ಮಸ್ಕರೇನಸ್ ಎಂದು ಗುರುತಿಸಲಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ನಸುಕಿನ ವೇಳೆ ಚರ್ಚ್ ರಸ್ತೆಯಲ್ಲಿ ಇದ್ದ ಸಂದರ್ಭದಲ್ಲಿ ದುಷ್ಕರ್ಮಿಗಳು ಅವರನ್ನು ಗುರಿಯಾಗಿಸಿಕೊಂಡು ಸಮೀಪದಿಂದಲೇ ಪಿಸ್ತೂಲ್ನಿಂದ ಗುಂಡು ಹಾರಿಸಿದ್ದಾರೆ ಎನ್ನಲಾಗಿದೆ. ಗುಂಡೇಟಿನಿಂದ ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಐವನ್ ರಿಚರ್ಡ್ ಅವರು ಕೆಲವು ವ್ಯವಹಾರಗಳನ್ನು ನಡೆಸುತ್ತಿದ್ದರು ಎನ್ನಲಾಗಿದೆ. ಘಟನೆಯ ಬಳಿಕ ಆರೋಪಿ ಸ್ಥಳದಿಂದ ಪರಾರಿಯಾಗಿದ್ದು, ಜೊತೆಯಲ್ಲಿದ್ದ ಮಹಿಳೆ ಆರೋಪಿಯನ್ನು ಗುರುತಿಸಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಯ ಪತ್ತೆಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.
ಗುಂಡಿನ ದಾಳಿಯಲ್ಲಿ ಮೃತಪಟ್ಟ ವ್ಯಕ್ತಿ ಐವನ್ ರಿಚಾರ್ಡ್ ಮಸ್ಕರೇನಸ್ (ಮುನ್ನಾ) ಈತ ಪಿಟ್ಟಿ ನಾಗೇಶ್ ಹತ್ಯೆ ಪ್ರಕರಣದ ಆರೋಪಿಯಾಗಿದ್ದ ಎನ್ನಲಾಗಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಕುಂದಾಪುರ ಪೊಲೀಸರು ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸ್ಥಳವನ್ನು ಸುತ್ತುವರಿದು ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಲಾಗಿದ್ದು, ವಿಧಿ ವಿಜ್ಞಾನ ತಜ್ಞರ ತಂಡವೂ ಸ್ಥಳ ಪರಿಶೀಲನೆ ನಡೆಸಿದೆ.
ಈ ಸಂಬಂಧ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗಾಗಿ ವಿಶೇಷ ತಂಡಗಳನ್ನು ರಚಿಸಲಾಗಿದೆ. ಸಿಸಿಟಿವಿ ದೃಶ್ಯಾವಳಿ, ತಾಂತ್ರಿಕ ಮಾಹಿತಿ ಹಾಗೂ ಇತರ ಸಾಕ್ಷ್ಯಾಧಾರಗಳ ಆಧಾರದ ಮೇಲೆ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ.
ಹತ್ಯೆಯ ಹಿಂದಿನ ಉದ್ದೇಶ ಏನು, ವೈಯಕ್ತಿಕ ದ್ವೇಷ, ವ್ಯವಹಾರಿಕ ವೈಮನಸ್ಸು ಅಥವಾ ಇತರೆ ಯಾವುದೇ ಕಾರಣಗಳಿವೆಯೇ ಎಂಬ ಕುರಿತು ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಹಾಗೂ ಆರೋಪಿಗಳ ಕುರಿತು ಅಧಿಕೃತ ಮಾಹಿತಿ ಇನ್ನಷ್ಟೇ ಹೊರಬೀಳಬೇಕಿದೆ.






