ಕಡಬ , ಜು. 31: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಂತೂರು ಗ್ರಾಮದ ಕೇವಳದಲ್ಲಿ ಶನಿವಾರ ಸುರಿದ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಅಡಿಕೆಮರವೊಂದು ಮುರಿದು ಬಿದ್ದ ಪರಿಣಾಮ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ನಡೆದಿದೆ.
ಮೃತ ವ್ಯಕ್ತಿ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಏಕಾಏಕಿ ಬೀಸಿದ ಬಿರುಗಾಳಿಗೆ ಅಡಿಕೆಮರ ಮುರಿದು ಅವರ ಮೇಲೆ ಬಿದ್ದಿದೆ. ತೀವ್ರವಾಗಿ ಗಾಯಗೊಂಡ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಘಟನೆಯ ಮಾಹಿತಿ ದೊರಕುತ್ತಿದ್ದಂತೆಯೇ ಕಡಬ ತಹಶೀಲ್ದಾರ್ ಗಣೇಶ್ ಸವಣೂರ, ಕಂದಾಯ ಇಲಾಖೆಯ ಅಧಿಕಾರಿಗಳು ಹಾಗೂ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಕುರಿತು ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆಯ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.

