ಕುಂದಾಪುರ, ಆ. 1: ಕುಂದಾಪುರದ ಚರ್ಚ್ ರಸ್ತೆಯಲ್ಲಿ ಜುಲೈ 31ರಂದು ಶುಕ್ರವಾರ ನಸುಕಿನ ವೇಳೆ ನಡೆದ ಗುಂಡಿನ ದಾಳಿ ಹಾಗೂ ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿಯನ್ನು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಅವರ ನೇತೃತ್ವದಲ್ಲಿ ರಚಿಸಲಾದ ವಿಶೇಷ ಪೊಲೀಸ್ ತಂಡ ಬಂಧಿಸಿದೆ.
ಬಂಧಿತ ಆರೋಪಿಯನ್ನು ಹೆಮ್ಮಾಡಿ ಸಮೀಪದ ಕನ್ನಡಕುದ್ರು ಮೂಲದ, ಪ್ರಸ್ತುತ ಕುಂದಾಪುರದ ಫ್ಲ್ಯಾಟ್ನಲ್ಲಿ ವಾಸವಿರುವ ಡೆರಿಕ್ ಕ್ರಾಸ್ತಾ (55) ಎಂದು ಗುರುತಿಸಲಾಗಿದೆ.
ಈತ ಹೆಬ್ರಿ ಮೂಲದ, ಪ್ರಸ್ತುತ ಬಾರ್ಕೂರು ಸಮೀಪದ ಕಚ್ಚೂರಿನ ಬಾಡಿಗೆ ಮನೆಯಲ್ಲಿ ವಾಸವಿದ್ದ ಐವನ್ ರಿಚರ್ಡ್ ಮಸ್ಕರೇನಸ್ ಅಲಿಯಾಸ್ ಮುನ್ನಾ (45) ಅವರನ್ನು ಗುಂಡಿಕ್ಕಿ ಹತ್ಯೆಗೈದ ಆರೋಪ ಎದುರಿಸುತ್ತಿದ್ದನು. ಘಟನೆ ಬಳಿಕ ಆರೋಪಿ ತಲೆಮರೆಸಿಕೊಂಡಿದ್ದ.
ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ವಿಶೇಷ ಪೊಲೀಸ್ ತಂಡವು ಶನಿವಾರ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲ್ಲೂಕಿನ ಬೆಳಕೆ–ಹೇರಬುಡಿಕೆ ಪ್ರದೇಶದಲ್ಲಿ ಆರೋಪಿಯನ್ನು ಬಂಧಿಸಿದೆ.
ಬಂಧಿತ ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುತ್ತಿದ್ದು, ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.

