ಮಂಗಳೂರು, ಆ. 3: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ಸಾರ್ವಜನಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಜಿಲ್ಲಾಡಳಿತ ಮತ್ತೊಮ್ಮೆ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದೆ. ಜಿಲ್ಲೆಯ ವಿವಿಧ ತಾಲ್ಲೂಕುಗಳ ಅಂಗನವಾಡಿ ಕೇಂದ್ರಗಳು ಹಾಗೂ 10ನೇ ತರಗತಿವರೆಗಿನ ಶಾಲೆಗಳಿಗೆ ಆಗಸ್ಟ್ 4, 2026ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಹೆಚ್.ವಿ. ದರ್ಶನ್ ಆದೇಶ ಹೊರಡಿಸಿದ್ದಾರೆ.
ಆದೇಶದಂತೆ, ಮಂಗಳೂರು ಉಪವಿಭಾಗ ವ್ಯಾಪ್ತಿಯ ಮಂಗಳೂರು, ಬಂಟ್ವಾಳ, ಮೂಡಬಿದಿರೆ, ಮುಲ್ಕಿ ಮತ್ತು ಉಳ್ಳಾಲ ತಾಲ್ಲೂಕುಗಳ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು (10ನೇ ತರಗತಿವರೆಗೆ) ಬಂದ್ ಇರಲಿವೆ. ಈ ಆದೇಶವು ವಸತಿ ಶಾಲೆಗಳಿಗೂ ಅನ್ವಯಿಸುತ್ತದೆ.
ಅದೇ ರೀತಿ, ಪುತ್ತೂರು ಉಪವಿಭಾಗ ವ್ಯಾಪ್ತಿಯ ಪುತ್ತೂರು, ಬೆಳ್ತಂಗಡಿ, ಸುಳ್ಯ ಮತ್ತು ಕಡಬ ತಾಲ್ಲೂಕುಗಳ ಅಂಗನವಾಡಿ ಕೇಂದ್ರಗಳು ಹಾಗೂ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೂ (10ನೇ ತರಗತಿವರೆಗೆ) ರಜೆ ಘೋಷಿಸಲಾಗಿದೆ.
ಆದರೆ, ಪದವಿಪೂರ್ವ ಕಾಲೇಜುಗಳು (PU), ಪದವಿ ಕಾಲೇಜುಗಳು ಹಾಗೂ ಇತರ ಉನ್ನತ ಶಿಕ್ಷಣ ಸಂಸ್ಥೆಗಳು ಎಂದಿನಂತೆ ಕಾರ್ಯನಿರ್ವಹಿಸಲಿದ್ದು, ಈ ರಜೆ ಅವರಿಗೆ ಅನ್ವಯಿಸುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಜಿಲ್ಲಾಧಿಕಾರಿಗಳ ಆದೇಶವನ್ನು ಉಲ್ಲಂಘಿಸಿ ಶಿಕ್ಷಣ ಸಂಸ್ಥೆಗಳನ್ನು ನಡೆಸಿದಲ್ಲಿ ವಿಪತ್ತು ನಿರ್ವಹಣಾ ಕಾಯ್ದೆ-2005ರ ಅನ್ವಯ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

