ತಲ್ಲೂರು: ದೇಶದ 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ತಲ್ಲೂರಿನಲ್ಲಿ ಆಟೋ ಚಾಲಕರಿಗೆ ಸಿಹಿ ತಿಂಡಿ ವಿತರಿಸಿ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.ಈ ಸಂದರ್ಭದಲ್ಲಿ ಆಟೋ ಚಾಲಕರ ಕುಟುಂಬದ ಪ್ರತಿಭಾನ್ವಿತ ವಿದ್ಯಾರ್ಥಿನಿ ಕುಮಾರಿ ಸ್ಪಂದಿತ ಪೂಜಾರಿ ಅವರು ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ.90ರಷ್ಟು ಅಂಕಗಳನ್ನು ಗಳಿಸಿ ಉತ್ತಮ ಸಾಧನೆ ಮಾಡಿರುವ ಹಿನ್ನೆಲೆಯಲ್ಲಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ವಿದ್ಯಾರ್ಥಿನಿಯ ಸಾಧನೆಯನ್ನು ಗುರುತಿಸಿ ತುಳುನಾಡ ರಕ್ಷಣಾ ವೇದಿಕೆಯ ವೈದ್ಯರ ಘಟಕದ ರಾಜ್ಯ ಸಂಘಟನಾ ಕಾರ್ಯದರ್ಶಿ ಡಾ. ರವೀಂದ್ರ ತಲ್ಲೂರು ಅವರು ಸನ್ಮಾನಿಸಿ, ಪ್ರೋತ್ಸಾಹ ಧನ ನೀಡಿ ಮುಂದಿನ ವಿದ್ಯಾಭ್ಯಾಸಕ್ಕೆ ಶುಭ ಹಾರೈಸಿದರು.
ಸ್ಪಂದಿತ ಪೂಜಾರಿ ಅವರು ಸವಿತಾ ಪೂಜಾರಿ ಮತ್ತು ಸುಧೀರ್ ಪೂಜಾರಿ ದಂಪತಿಯ ಪುತ್ರಿಯಾಗಿದ್ದಾರೆ.
ಕಾರ್ಯಕ್ರಮದಲ್ಲಿ ತುಳುನಾಡ ರಕ್ಷಣಾ ವೇದಿಕೆಯ ತಾಲೂಕು ಅಧ್ಯಕ್ಷರಾದ ಡಾ. ಸತೀಶ್ ಕಾರ್ವಿ, M.D. ರೆಸಿಡೆನ್ಸಿಯ ಅಧ್ಯಕ್ಷರಾದ ಶ್ರೀ ಆನಂದ್ ಸಿರಿಯನ್, ಆಟೋ ರಿಕ್ಷಾ ಚಾಲಕರ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಸೇರಿದಂತೆ ಹಲವರು ಉಪಸ್ಥಿತರಿದ್ದರು.
ದೇಶದ ಸ್ವಾತಂತ್ರ್ಯವನ್ನು ಸ್ಮರಿಸುವುದರ ಜೊತೆಗೆ, ದುಡಿಯುವ ವರ್ಗದ ಕುಟುಂಬಗಳ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಮೂಲಕ ಅವರ ಶೈಕ್ಷಣಿಕ ಸಾಧನೆಗೆ ಬೆಂಬಲ ನೀಡಿದ ಕಾರ್ಯಕ್ರಮವು ವಿಶೇಷ ಗಮನ ಸೆಳೆಯಿತು.
ದೇಶದ ಅಭಿವೃದ್ಧಿಯಲ್ಲಿ ಪ್ರತಿಯೊಬ್ಬ ನಾಗರಿಕನ ಕೊಡುಗೆಯೂ ಮಹತ್ವದ್ದಾಗಿದ್ದು, ಶಿಕ್ಷಣ ಕ್ಷೇತ್ರದಲ್ಲಿ ಪ್ರತಿಭೆ ತೋರುವ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವುದು ಸಮಾಜದ ಜವಾಬ್ದಾರಿಯಾಗಿದೆ ಎಂಬ ಸಂದೇಶವನ್ನು ಕಾರ್ಯಕ್ರಮ ಸಾರಿತು.

