ನವದೆಹಲಿ: ಮಂಗಳೂರು ರೈಲ್ವೆ ಜಾಲವನ್ನು ನೈಋತ್ಯ ರೈಲ್ವೆ ವಲಯದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಿರುವ ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರಕ್ಕೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಸಂತಸ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನವದೆಹಲಿಯಲ್ಲಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿಯಾದ ಸಂಸದರು, ದಕ್ಷಿಣ ಕನ್ನಡ ಜಿಲ್ಲೆಯ ಜನತೆಯ ಪರವಾಗಿ ಸಚಿವರಿಗೆ ಧನ್ಯವಾದ ಹಾಗೂ ಕೃತಜ್ಞತೆ ಸಲ್ಲಿಸಿದರು.
ಮಂಗಳೂರು ಹಾಗೂ ಕರಾವಳಿ ಭಾಗದ ರೈಲ್ವೆ ವ್ಯವಸ್ಥೆಯ ಆಡಳಿತಾತ್ಮಕ ನಿರ್ವಹಣೆಯಲ್ಲಿ ಮಹತ್ವದ ಬದಲಾವಣೆಯಾಗಿರುವ ಈ ನಿರ್ಧಾರವು ದಕ್ಷಿಣ ಕನ್ನಡ ಜಿಲ್ಲೆಯ ರೈಲ್ವೆ ಅಭಿವೃದ್ಧಿಗೆ ಹೊಸ ವೇಗ ನೀಡುವ ನಿರೀಕ್ಷೆ ಮೂಡಿಸಿದೆ. ಮಂಗಳೂರು ರೈಲ್ವೆ ಜಾಲವನ್ನು ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸುವ ಮೂಲಕ ರೈಲ್ವೆ ಆಡಳಿತವನ್ನು ಇನ್ನಷ್ಟು ಸಮನ್ವಯಗೊಳಿಸಲು ಹಾಗೂ ಸ್ಥಳೀಯ ಅಗತ್ಯಗಳಿಗೆ ಸ್ಪಂದಿಸುವ ವ್ಯವಸ್ಥೆಯನ್ನು ಬಲಪಡಿಸಲು ಅವಕಾಶ ದೊರೆತಿದೆ ಎಂದು ಸಂಸದರು ಅಭಿಪ್ರಾಯಪಟ್ಟರು.
ಸಚಿವರನ್ನು ಭೇಟಿಯಾದ ಸಂದರ್ಭದಲ್ಲಿ ಕ್ಯಾ. ಬ್ರಿಜೇಶ್ ಚೌಟ ಅವರು ಮಂಗಳೂರು ಸೇರಿದಂತೆ ಕರಾವಳಿ ಭಾಗದ ರೈಲ್ವೆ ಪ್ರಯಾಣಿಕರ ಬಹುಕಾಲದ ಬೇಡಿಕೆಗಳು, ಮೂಲಸೌಕರ್ಯ ಅಭಿವೃದ್ಧಿ, ರೈಲು ಸೇವೆಗಳ ಸುಧಾರಣೆ ಹಾಗೂ ಭವಿಷ್ಯದ ರೈಲ್ವೆ ಯೋಜನೆಗಳ ಕುರಿತು ಗಮನ ಸೆಳೆದರು. ಮಂಗಳೂರು ದೇಶದ ಪ್ರಮುಖ ಕರಾವಳಿ ನಗರವಾಗಿದ್ದು, ಕೈಗಾರಿಕೆ, ಬಂದರು, ಪ್ರವಾಸೋದ್ಯಮ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಲ್ಲಿ ವೇಗವಾಗಿ ಬೆಳೆಯುತ್ತಿರುವ ಹಿನ್ನೆಲೆಯಲ್ಲಿ ಇಲ್ಲಿನ ರೈಲ್ವೆ ಸಂಪರ್ಕವನ್ನು ಮತ್ತಷ್ಟು ಬಲಪಡಿಸುವ ಅಗತ್ಯವಿದೆ ಎಂದು ಅವರು ಸಚಿವರ ಗಮನಕ್ಕೆ ತಂದರು.
ಈ ಸಂದರ್ಭದಲ್ಲಿ ಪ್ರತಿಕ್ರಿಯಿಸಿದ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು, ಕರಾವಳಿ ಕರ್ನಾಟಕದ ರೈಲ್ವೆ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಬದ್ಧವಾಗಿದ್ದು, ಮುಂದಿನ ದಿನಗಳಲ್ಲಿಯೂ ಅಗತ್ಯ ಸಹಕಾರ ಮತ್ತು ಬೆಂಬಲ ನೀಡುವುದಾಗಿ ಭರವಸೆ ನೀಡಿದರು. ಮಂಗಳೂರು ಹಾಗೂ ಕರಾವಳಿ ಭಾಗದ ರೈಲ್ವೆ ಮೂಲಸೌಕರ್ಯವನ್ನು ಮತ್ತಷ್ಟು ಸುಧಾರಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.
ಬಳಿಕ ಮಾತನಾಡಿದ ಕ್ಯಾ. ಬ್ರಿಜೇಶ್ ಚೌಟ ಅವರು, “ಮಂಗಳೂರು ರೈಲ್ವೆ ಜಾಲವನ್ನು ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಿರುವುದು ದಕ್ಷಿಣ ಕನ್ನಡದ ರೈಲ್ವೆ ಅಭಿವೃದ್ಧಿಯ ದೃಷ್ಟಿಯಿಂದ ಮಹತ್ವದ ಹೆಜ್ಜೆಯಾಗಿದೆ. ಈ ಆಡಳಿತಾತ್ಮಕ ಬದಲಾವಣೆಯಿಂದ ಮಂಗಳೂರು ಭಾಗದ ರೈಲ್ವೆ ಮೂಲಸೌಕರ್ಯಗಳ ಅಭಿವೃದ್ಧಿ, ನಿರ್ವಹಣೆ ಹಾಗೂ ಯೋಜನೆಗಳ ಅನುಷ್ಠಾನ ಇನ್ನಷ್ಟು ಪರಿಣಾಮಕಾರಿಯಾಗಲಿದೆ ಎಂಬ ವಿಶ್ವಾಸವಿದೆ” ಎಂದು ಹೇಳಿದರು.
ಮಂಗಳೂರು ಭಾಗದ ರೈಲ್ವೆ ಸಂಪರ್ಕವನ್ನು ಕೇವಲ ಪ್ರಯಾಣಿಕರ ಸೇವೆಗೆ ಸೀಮಿತಗೊಳಿಸದೆ, ಜಿಲ್ಲೆಯ ಆರ್ಥಿಕ ಹಾಗೂ ಕೈಗಾರಿಕಾ ಬೆಳವಣಿಗೆಗೆ ಪೂರಕವಾಗುವ ರೀತಿಯಲ್ಲಿ ಅಭಿವೃದ್ಧಿಪಡಿಸುವ ಅಗತ್ಯವಿದೆ. ಹೆಚ್ಚುವರಿ ರೈಲು ಸೇವೆಗಳು, ನಿಲ್ದಾಣಗಳ ಆಧುನೀಕರಣ, ಪ್ರಯಾಣಿಕರ ಸೌಲಭ್ಯಗಳ ಹೆಚ್ಚಳ, ರೈಲು ಮಾರ್ಗಗಳ ಸಾಮರ್ಥ್ಯ ವೃದ್ಧಿ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಈ ಬದಲಾವಣೆ ಸಹಕಾರಿಯಾಗಲಿದೆ ಎಂಬ ನಿರೀಕ್ಷೆಯನ್ನು ಅವರು ವ್ಯಕ್ತಪಡಿಸಿದರು.
ಮಂಗಳೂರು–ಮೈಸೂರು ರೈಲ್ವೆ ಆಡಳಿತಾತ್ಮಕ ಸಂಪರ್ಕ ಮತ್ತಷ್ಟು ಬಲಗೊಂಡಿರುವ ಹಿನ್ನೆಲೆಯಲ್ಲಿ, ಮುಂದಿನ ದಿನಗಳಲ್ಲಿ ಕರಾವಳಿ ಭಾಗದ ರೈಲ್ವೆ ಅಭಿವೃದ್ಧಿಗೆ ಕೇಂದ್ರ ಸರ್ಕಾರದಿಂದ ಹೆಚ್ಚಿನ ಆದ್ಯತೆ ದೊರೆಯಲಿದೆ ಎಂಬ ನಿರೀಕ್ಷೆ ಇದೀಗ ಜಿಲ್ಲೆಯ ಜನರಲ್ಲಿ ಮೂಡಿದೆ.

