ಮೂಡುಬಿದಿರೆ: ಕಾರ್ಕಳ–ಮೂಡುಬಿದಿರೆ ಹೈವೇ ರಸ್ತೆಯ ಸಾಣೂರು ಜಂಕ್ಷನ್ನಲ್ಲಿ ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ಮಾಜಿ ಸಚಿವ ರಮಾನಾಥ ರೈ ಸೇರಿದಂತೆ ಹಲವರು ಗಾಯಗೊಂಡಿರುವ ಘಟನೆ ನಡೆದಿದೆ.

ಕಾರ್ಕಳದಿಂದ ಮೂಡುಬಿದಿರೆ ಕಡೆಗೆ ಸಂಚರಿಸುತ್ತಿದ್ದ ಬಸ್, ಸಾಣೂರು ಜಂಕ್ಷನ್ ಸಮೀಪ ರಮಾನಾಥ ರೈ ಅವರು ಪ್ರಯಾಣಿಸುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಡಿಕ್ಕಿಯ ರಭಸಕ್ಕೆ ಕಾರು ಹಾನಿಗೊಳಗಾಗಿದ್ದು, ಕಾರಿನಲ್ಲಿದ್ದ ರಮಾನಾಥ ರೈ ಅವರನ್ನು ಸ್ಥಳೀಯರು ತಕ್ಷಣವೇ ಹರಸಾಹಸಪಟ್ಟು ಕಾರಿನಿಂದ ಹೊರತೆಗೆದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಅಪಘಾತದಲ್ಲಿ ಬಸ್ನಲ್ಲಿದ್ದ ಪ್ರಯಾಣಿಕರು ಹಾಗೂ ಕಾರಿನಲ್ಲಿದ್ದವರಿಗೂ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಸ್ಥಳೀಯರು ತಕ್ಷಣ ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ವಾಹನಗಳಿಂದ ಹೊರತೆಗೆದು, ಆಸ್ಪತ್ರೆಗೆ ಸಾಗಿಸಲು ನೆರವಾಗಿದ್ದಾರೆ.
ಘಟನೆಯಿಂದ ಸಾಣೂರು ಜಂಕ್ಷನ್ನಲ್ಲಿ ಕೆಲಕಾಲ ಸಂಚಾರಕ್ಕೆ ಅಡಚಣೆ ಉಂಟಾಗಿದ್ದು, ಅಪಘಾತದ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ. ಗಾಯಾಳುಗಳ ನಿಖರ ಸಂಖ್ಯೆ ಹಾಗೂ ಅವರ ಆರೋಗ್ಯ ಸ್ಥಿತಿಯ ಕುರಿತು ಅಧಿಕೃತ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

