ಮಂಗಳೂರು, ಸೆ.30: ನಗರದ ಹೊರವಲಯದಲ್ಲಿರುವ ಮಂಗಳೂರು ರಿಫೈನರಿ ಅಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (ಎಂಆರ್ಪಿಎಲ್) ತೈಲ ಶುದ್ಧೀಕರಣ ಘಟಕದ ಆವರಣದಲ್ಲಿ ಬುಧವಾರ ಮಧ್ಯಾಹ್ನ ಭಾರೀ ಸ್ಫೋಟದ ಸದ್ದು ಕೇಳಿಬಂದಿದ್ದು, ಘಟಕದ ಸುತ್ತಮುತ್ತ ದಟ್ಟ ಹೊಗೆ ಆವರಿಸಿಕೊಂಡಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಎಂಆರ್ಪಿಎಲ್ನ ಮೂರನೇ ಪ್ಲಾಂಟ್ ಇರುವ ಕಟ್ಟಡದ ಕೆಳಭಾಗದಲ್ಲಿ ಏಕಾಏಕಿ ಭಾರೀ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದ್ದು, ಕೆಲಕಾಲ ದಟ್ಟ ಹೊಗೆ ಆವರಿಸಿತ್ತು ಎನ್ನಲಾಗಿದೆ. ಘಟನೆಯ ವೇಳೆ ಕೇಳಿಬಂದ ಭಾರೀ ಶಬ್ದವು ಜೋಕಟ್ಟೆ, ಕಳವಾರು, ಬೈಕಂಪಾಡಿ, ಜೋಕಟ್ಟೆ, ಸುರತ್ಕಲ್ ಹಾಗೂ ಕಾಟಿಪಳ್ಳ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಿಗೂ ಕೇಳಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಘಟನೆಯ ಹಿನ್ನೆಲೆಯಲ್ಲಿ ತೈಲ ಸಂಗ್ರಹಣಾ ಪ್ರದೇಶದಲ್ಲಿ ಯಾವುದೇ ಅವಘಡ ಸಂಭವಿಸಿರಬಹುದೇ ಎಂಬ ಆತಂಕ ಸ್ಥಳೀಯರಲ್ಲಿ ಮೂಡಿದೆ. ಅಲ್ಲದೆ, ಮಂಗಳೂರು ವಿಮಾನ ನಿಲ್ದಾಣದ ಸುತ್ತಮುತ್ತಲಿನ ಪ್ರದೇಶಗಳಲ್ಲಿಯೂ ದಟ್ಟ ಹೊಗೆ ಕಾಣಿಸಿಕೊಂಡಿದೆ ಎನ್ನಲಾಗಿದೆ.

ಮಂಗಳೂರು, ಪಾಂಡೇಶ್ವರ ಸೇರಿದಂತೆ ವಿವಿಧ ಭಾಗಗಳಿಂದ ಅಗ್ನಿಶಾಮಕ ದಳದ ವಾಹನಗಳು ಘಟನಾ ಸ್ಥಳಕ್ಕೆ ಧಾವಿಸಿದ್ದು, ಬೆಂಕಿ ನಿಯಂತ್ರಿಸುವ ಹಾಗೂ ಪರಿಸ್ಥಿತಿಯನ್ನು ಹತೋಟಿಗೆ ತರುವ ಕಾರ್ಯಾಚರಣೆ ನಡೆಸಲಾಗುತ್ತಿದೆ.
ಘಟನೆಯ ನಿಖರ ಕಾರಣವೇನು, ಬೆಂಕಿ ಯಾವ ಘಟಕದಲ್ಲಿ ಕಾಣಿಸಿಕೊಂಡಿದೆ ಹಾಗೂ ಸ್ಫೋಟದ ತೀವ್ರತೆ ಎಷ್ಟಿತ್ತು ಎಂಬುದರ ಕುರಿತು ಸದ್ಯ ಯಾವುದೇ ಅಧಿಕೃತ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ. ಕಟ್ಟಡದ ಒಳಭಾಗದಲ್ಲಿ ಉಂಟಾಗಿರುವ ಹಾನಿಯ ಬಗ್ಗೆಯೂ ಮಾಹಿತಿ ನಿರೀಕ್ಷಿಸಲಾಗಿದೆ.
ಇದುವರೆಗೆ ಯಾವುದೇ ಸಾವು-ನೋವು ಸಂಭವಿಸಿರುವ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಆದಾಗ್ಯೂ, ಘಟನೆಗೆ ಸಂಬಂಧಿಸಿದಂತೆ ಎಂಆರ್ಪಿಎಲ್ ಆಡಳಿತ ಮಂಡಳಿ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಂದ ಅಧಿಕೃತ ಮಾಹಿತಿ ಹೊರಬರಬೇಕಿದೆ.
ಘಟನೆಯ ಹಿನ್ನೆಲೆಯಲ್ಲಿ ಸ್ಥಳೀಯರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಅಧಿಕಾರಿಗಳು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಪರಿಶೀಲಿಸುತ್ತಿದ್ದಾರೆ.

