ಮಂಗಳೂರು: ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನ ಕೋಕರ್ ಹೈಡ್ರೋ ಟ್ರೀಟಿಂಗ್ ಯುನಿಟ್ (CHTU)ನಲ್ಲಿ ಬುಧವಾರ ಮಧ್ಯಾಹ್ನ ಸಂಭವಿಸಿದ ಭಾರೀ ಸ್ಫೋಟದಲ್ಲಿ ಎಂಟು ಮಂದಿ ಗಾಯಗೊಂಡಿದ್ದಾರೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.
ಮಧ್ಯಾಹ್ನ ಸುಮಾರು 12.15ರ ವೇಳೆಗೆ CHTU ಘಟಕದಲ್ಲಿ ಸ್ಫೋಟ ಸಂಭವಿಸಿ ತಕ್ಷಣವೇ ಬೆಂಕಿ ಕಾಣಿಸಿಕೊಂಡಿದೆ. ಘಟಕದಲ್ಲಿದ್ದ ಇಬ್ಬರು ಗಾಯಗೊಂಡಿದ್ದು, ರಾಜೇಶ್ ಬ್ಯಾಪ್ಟಿಸ್ಟ್ ಅವರಿಗೆ ಸುಮಾರು ಶೇ.35ರಷ್ಟು ಸುಟ್ಟ ಗಾಯಗಳಾಗಿವೆ. ಅವರನ್ನು ಚಿಕಿತ್ಸೆಗೆ ಶ್ರೀನಿವಾಸ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಆರೋಗ್ಯ ಸ್ಥಿತಿ ಅಪಾಯದಿಂದ ಪಾರಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಸ್ಫೋಟ ಸಂಭವಿಸಿದ ಘಟಕದ ಪಕ್ಕದಲ್ಲಿರುವ ಕಚೇರಿಯಲ್ಲಿದ್ದ ಆರು ಮಂದಿ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಘಟನಾ ಸ್ಥಳದಲ್ಲಿ ಕಾಣಿಸಿಕೊಂಡಿದ್ದ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದ್ದು, ಪರಿಸ್ಥಿತಿಯನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
ಸದ್ಯದ ಮಾಹಿತಿಯ ಪ್ರಕಾರ, ಘಟನಾ ಸಂದರ್ಭದಲ್ಲಿ ಸ್ಥಳದಲ್ಲಿ ಮಹಿಳಾ ಸಿಬ್ಬಂದಿ ಯಾರೂ ಇರಲಿಲ್ಲ ಹಾಗೂ ಯಾವುದೇ ಮಹಿಳಾ ಸಿಬ್ಬಂದಿಗೆ ಗಾಯಗಳಾಗಿಲ್ಲ.
ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ., ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನರ್ವಡೆ ವಿನಾಯಕ್ ಕಾರ್ಭಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸ್ಫೋಟಕ್ಕೆ ನಿಖರ ಕಾರಣವೇನು ಎಂಬುದು ಇನ್ನಷ್ಟೇ ತಿಳಿದುಬರಬೇಕಿದ್ದು, ಸಂಬಂಧಪಟ್ಟ ಅಧಿಕಾರಿಗಳು ಘಟನೆಯ ಕುರಿತು ಹೆಚ್ಚಿನ ಪರಿಶೀಲನೆ ನಡೆಸುತ್ತಿದ್ದಾರೆ

