ಮಂಗಳೂರು, ಅ. 25: ದಕ್ಷಿಣ ಕನ್ನಡ ಜಿಲ್ಲೆಯ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಯುವತಿಗೆ ಕಿರುಕುಳ ನೀಡಿದ ಆರೋಪದ ಮೇಲೆ 61 ವರ್ಷದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ವೇಣೂರು ನಿವಾಸಿ ಸೈಯ್ಯದ್ ಮಹಮ್ಮದ್ ಇಸಾಕ್ (61) ಎಂದು ಗುರುತಿಸಲಾಗಿದೆ.
ಪೊಲೀಸರಿಗೆ ಯುವತಿ ನೀಡಿರುವ ದೂರಿನ ಪ್ರಕಾರ, ಅಕ್ಟೋಬರ್ 24ರಂದು ಮಧ್ಯಾಹ್ನ ಯುವತಿ ಕೆಲಸ ಮಾಡುತ್ತಿದ್ದ ಸ್ಥಳಕ್ಕೆ ಆರೋಪಿ ದ್ವಿಚಕ್ರ ವಾಹನದಲ್ಲಿ ಬಂದಿದ್ದಾನೆ. ಈ ಸಂದರ್ಭದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಅಸಭ್ಯವಾಗಿ ಮಾತನಾಡಿ, ಹಣದ ಆಮಿಷವೊಡ್ಡುವ ಮೂಲಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಲಾಗಿದೆ.
ಈ ಸಂಬಂಧ ಯುವತಿ ನೀಡಿದ ದೂರಿನ ಆಧಾರದ ಮೇಲೆ ವೇಣೂರು ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 73/2026ರ ಅಡಿಯಲ್ಲಿ ಭಾರತೀಯ ನ್ಯಾಯ ಸಂಹಿತೆ (ಬಿಎನ್ಎಸ್), 2023ರ ಕಲಂ 75(1)(ii), 75(1)(iv) ಮತ್ತು 79 ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆಯ ಸಂಬಂಧಿತ ಕಲಂಗಳಡಿ ಪ್ರಕರಣ ದಾಖಲಿಸಲಾಗಿದೆ.
ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಪ್ರಕರಣದ ಕುರಿತು ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

