ಬಂಟ್ವಾಳ, ಅ. 26: ಮನೆಯ ಎದುರಿನ ಹಾಲ್ನಲ್ಲಿ ಆಟವಾಡುತ್ತಿದ್ದ ಒಂಬತ್ತು ವರ್ಷದ ಬಾಲಕನ ಕುತ್ತಿಗೆಗೆ ಆಕಸ್ಮಿಕವಾಗಿ ಹಗ್ಗ ಸಿಲುಕಿ ಉಸಿರುಗಟ್ಟಿ ಮೃತಪಟ್ಟ ಹೃದಯವಿದ್ರಾವಕ ಘಟನೆ ಬಂಟ್ವಾಳ ತಾಲೂಕಿನ ಕುಕ್ಕಿಪಾಡಿ ಗ್ರಾಮದ ಮಾವಿನಕಟ್ಟೆ ಸಮೀಪದ ಕೇಂತಲೆ ಮನೆಯಲ್ಲಿ ಅ. 25ರ ರಾತ್ರಿ ನಡೆದಿದೆ.
ಕೇಂತಲೆ ಮನೆ ನಿವಾಸಿ ಆನಂದ ಪೂಜಾರಿ ಅವರ ಪುತ್ರ ಅಮೃತ್ ಎ. ಪೂಜಾರಿ (9) ಮೃತಪಟ್ಟ ಬಾಲಕ.
ಆಟವಾಡುತ್ತಿದ್ದಾಗ ಸಂಭವಿಸಿದ ಅನಾಹುತ
ಅ. 25ರ ರಾತ್ರಿ ಅಮೃತ್ ಮನೆಯ ಎದುರಿನ ಹಾಲ್ನಲ್ಲಿ ಒಬ್ಬನೇ ಆಟವಾಡುತ್ತಿದ್ದ ಎನ್ನಲಾಗಿದೆ. ಈ ವೇಳೆ ಮನೆಯ ಕಿಟಕಿಗೆ ಮೊದಲೇ ಕಟ್ಟಲಾಗಿದ್ದ ಹಗ್ಗ ಆಕಸ್ಮಿಕವಾಗಿ ಆತನ ಕುತ್ತಿಗೆಗೆ ಸಿಲುಕಿಕೊಂಡಿದ್ದು, ಉಸಿರಾಟಕ್ಕೆ ತೊಂದರೆಯಾಗಿ ಬಾಲಕ ಪ್ರಜ್ಞೆ ಕಳೆದುಕೊಂಡಿದ್ದಾನೆ ಎನ್ನಲಾಗಿದೆ.
ತಂಗಿಯ ಆತಂಕದ ಕೂಗು
ಈ ಘಟನೆಯ ಸಂದರ್ಭದಲ್ಲಿ ಮನೆಯಲ್ಲಿದ್ದ ಬಾಲಕನ ಸಹೋದರಿ ಪ್ರಾರ್ಥನಾ, ಅಮೃತ್ ಮಾತನಾಡುತ್ತಿಲ್ಲ ಎಂಬುದನ್ನು ಗಮನಿಸಿ ಆತಂಕಗೊಂಡಿದ್ದಾಳೆ. ಬಳಿಕ ಜೋರಾಗಿ ಕೂಗುತ್ತಾ ಸಮೀಪದ ಮನೆಯಲ್ಲಿದ್ದ ಚಿಕ್ಕಪ್ಪನ ಮನೆಗೆ ಓಡಿಹೋಗಿ ವಿಷಯ ತಿಳಿಸಿದ್ದಾಳೆ.
ತಕ್ಷಣ ಕುಟುಂಬದವರು ಆನಂದ ಪೂಜಾರಿ ಅವರ ಮನೆಗೆ ಧಾವಿಸಿ ನೋಡಿದಾಗ, ಬಾಲಕನ ತಾಯಿ ಗೀತಾ ಅವರು ಮಗನನ್ನು ತೊಡೆಯ ಮೇಲೆ ಮಲಗಿಸಿಕೊಂಡು ದುಃಖಿಸುತ್ತಿದ್ದರು ಎನ್ನಲಾಗಿದೆ.
ಆಸ್ಪತ್ರೆಗೆ ಸಾಗಿಸಿದರೂ ಉಳಿಯದ ಜೀವ
ಕೂಡಲೇ ಬಾಲಕನಿಗೆ ಉಪಚರಿಸಿ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಪರೀಕ್ಷಿಸಿದ ವೈದ್ಯರು ಬಾಲಕ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
