ಅಲ್ಪಸಂಖ್ಯಾತರ ಸಮಸ್ಯೆ, ಕೋಮು ಸೌಹಾರ್ದತೆ ಹಾಗೂ ಕೊಲ್ಲಿ ರಾಷ್ಟ್ರಗಳಲ್ಲಿರುವ ಭಾರತೀಯರ ಸುರಕ್ಷತೆಗೆ ಆದ್ಯತೆ ನೀಡಲು ಆಗ್ರಹ
ಮಂಗಳೂರು: ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರಾದ ನಿಸಾರ್ ಅಹಮದ್ ಅವರು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಪ್ರವಾಸ ಕೈಗೊಂಡ ಸಂದರ್ಭದಲ್ಲಿ, ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಲ್ಪಸಂಖ್ಯಾತ ಸಮುದಾಯದ ಪ್ರಸ್ತುತ ಸ್ಥಿತಿಗತಿ, ಅಭಿವೃದ್ಧಿ ಕಾರ್ಯಗಳು, ಸಮುದಾಯ ಎದುರಿಸುತ್ತಿರುವ ವಿವಿಧ ಸಮಸ್ಯೆಗಳು ಹಾಗೂ ಉಭಯ ಜಿಲ್ಲೆಗಳ ಕೋಮು ಸೌಹಾರ್ದತೆಯ ಕುರಿತು ಮಹತ್ವದ ಚರ್ಚೆ ನಡೆಸಲಾಯಿತು.
ಜನತಾದಳದ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ಹೈದರ್ ಪರ್ತಿಪ್ಪಾಡಿ, ಜನತಾದಳದ ಜಿಲ್ಲಾ ಕಾರ್ಯಾಧ್ಯಕ್ಷ ಇಕ್ಬಾಲ್ ಅಹಮದ್ ಮೂಲ್ಕಿ ಹಾಗೂ ಮುಸ್ಲಿಂ ಸಮುದಾಯದ ಮುಖಂಡರಾದ ರಿಜ್ವಾನ್ ಬಪ್ನಾಡ್, ನಝೀರ್ ಅಹಮದ್ ಎಂ.ಎಚ್., ಅಶ್ರಫ್ ಮುಲ್ಕಿ, ಅಶ್ಫಾಕ್ ಎ. ಕಾರ್ನಾಡ್, ನಿಸ್ಸಾರ್ ಅಹಮದ್ ಸೇರಿದಂತೆ ಹಲವು ಮುಖಂಡರು ಆಯೋಗದ ಅಧ್ಯಕ್ಷರನ್ನು ಮುಖತಃ ಭೇಟಿ ಮಾಡಿ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಸಮ್ಮುಖದಲ್ಲಿ ವಿವಿಧ ವಿಚಾರಗಳ ಕುರಿತು ಸಮಗ್ರವಾಗಿ ಚರ್ಚಿಸಿದರು.
ಈ ಸಂದರ್ಭದಲ್ಲಿ ರಾಜ್ಯದಲ್ಲಿ ಅಮಾಯಕ ಅಲ್ಪಸಂಖ್ಯಾತರ ಮೇಲೆ ನಡೆಯುತ್ತಿರುವ ದೌರ್ಜನ್ಯ ಪ್ರಕರಣಗಳು, ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ದೊರೆಯಬೇಕಾದ ವಿದ್ಯಾರ್ಥಿವೇತನ (ಸ್ಕಾಲರ್ಶಿಪ್) ವಿಳಂಬವಾಗುತ್ತಿರುವುದು, ಸರಕಾರದ ವಿವಿಧ ಸಬ್ಸಿಡಿ ಯೋಜನೆಗಳು ಹಾಗೂ ಸವಲತ್ತುಗಳ ವಿತರಣೆಯಲ್ಲಿನ ಸಮಸ್ಯೆಗಳು ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ಸಂಬಂಧಿಸಿದ ಹಲವು ಕುಂದುಕೊರತೆಗಳನ್ನು ಆಯೋಗದ ಅಧ್ಯಕ್ಷರ ಗಮನಕ್ಕೆ ತರಲಾಯಿತು.
ಅಲ್ಪಸಂಖ್ಯಾತ ಸಮುದಾಯದ ಶೈಕ್ಷಣಿಕ, ಸಾಮಾಜಿಕ ಹಾಗೂ ಆರ್ಥಿಕ ಅಭಿವೃದ್ಧಿಗೆ ಸರಕಾರ ರೂಪಿಸಿರುವ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ಸಕಾಲದಲ್ಲಿ ತಲುಪುವಂತಾಗಬೇಕು. ವಿದ್ಯಾರ್ಥಿವೇತನ ಮತ್ತು ಇತರ ಸೌಲಭ್ಯಗಳ ವಿತರಣೆಯಲ್ಲಿ ಉಂಟಾಗುತ್ತಿರುವ ವಿಳಂಬವನ್ನು ನಿವಾರಿಸಿ, ಬಡ ಹಾಗೂ ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಬೇಕು. ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಸಂತ್ರಸ್ತರಿಗೆ ಸೂಕ್ತ ನ್ಯಾಯ ದೊರೆಯುವಂತೆ ಕ್ರಮ ಕೈಗೊಳ್ಳಬೇಕು ಎಂದು ಮುಖಂಡರು ಒತ್ತಾಯಿಸಿದರು.
ಇದೇ ಸಂದರ್ಭದಲ್ಲಿ ಪವಿತ್ರ ಉಮ್ರಾ ಯಾತ್ರೆ ಕೈಗೊಂಡು ಕೊಲ್ಲಿ ರಾಷ್ಟ್ರಗಳಲ್ಲಿ ಉಂಟಾಗಿರುವ ಯುದ್ಧದ ಪರಿಸ್ಥಿತಿಯಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ಭಾರತೀಯ ಯಾತ್ರಾರ್ಥಿಗಳನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ಕೇಂದ್ರ ಹಾಗೂ ರಾಜ್ಯ ಸರಕಾರಗಳು ತುರ್ತು ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಲಾಯಿತು.
ಅಲ್ಲದೆ, ಸೌದಿ ಅರೇಬಿಯಾ ಸೇರಿದಂತೆ ವಿವಿಧ ಕೊಲ್ಲಿ ರಾಷ್ಟ್ರಗಳಲ್ಲಿ ಉದ್ಯೋಗ ಹಾಗೂ ಜೀವನೋಪಾಯಕ್ಕಾಗಿ ದುಡಿಯುತ್ತಿರುವ ಅಪಾರ ಸಂಖ್ಯೆಯ ಅನಿವಾಸಿ ಭಾರತೀಯರ ಸುರಕ್ಷತೆಯ ಬಗ್ಗೆಯೂ ಗಂಭೀರ ಕಳವಳ ವ್ಯಕ್ತಪಡಿಸಲಾಯಿತು. ಯುದ್ಧದ ಪರಿಸ್ಥಿತಿಯಿಂದಾಗಿ ಅಲ್ಲಿನ ಭಾರತೀಯ ಕಾರ್ಮಿಕರು, ಉದ್ಯೋಗಿಗಳು ಹಾಗೂ ಅವರ ಕುಟುಂಬಗಳು ಎದುರಿಸಬಹುದಾದ ಆತಂಕ ಮತ್ತು ಅನಿಶ್ಚಿತತೆಯನ್ನು ಗಮನದಲ್ಲಿಟ್ಟುಕೊಂಡು, ಭಾರತೀಯ ರಾಯಭಾರ ಕಚೇರಿಗಳ ಮೂಲಕ ನಿರಂತರ ಸಂಪರ್ಕ ಹಾಗೂ ಅಗತ್ಯ ರಕ್ಷಣಾ ವ್ಯವಸ್ಥೆ ಕಲ್ಪಿಸಬೇಕು. ತುರ್ತು ಸಂದರ್ಭದಲ್ಲಿ ಅವರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲು ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮನವಿ ಸಲ್ಲಿಸಲಾಯಿತು.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳು ಧಾರ್ಮಿಕ, ಸಾಂಸ್ಕೃತಿಕ ಹಾಗೂ ಸಾಮಾಜಿಕ ಸಾಮರಸ್ಯಕ್ಕೆ ಹೆಸರುವಾಸಿಯಾಗಿದ್ದು, ಈ ಪ್ರದೇಶದ ಪರಂಪರೆಯಾದ ಕೋಮು ಸೌಹಾರ್ದತೆ ಮತ್ತು ಪರಸ್ಪರ ಸಹಬಾಳ್ವೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಸರಕಾರ ಹಾಗೂ ಸಂಬಂಧಪಟ್ಟ ಇಲಾಖೆಗಳು ವಿಶೇಷ ಗಮನಹರಿಸಬೇಕು. ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಮತ್ತು ವಿಶ್ವಾಸದ ವಾತಾವರಣ ನಿರ್ಮಿಸಲು ಎಲ್ಲ ಸಮುದಾಯಗಳ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆಯೂ ಮನವಿ ಮಾಡಲಾಯಿತು.
ಮುಖಂಡರ ಅಹವಾಲುಗಳನ್ನು ಆಲಿಸಿದ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ನಿಸಾರ್ ಅಹಮದ್ ಅವರು, ಪ್ರಸ್ತಾಪಿಸಲಾದ ವಿಷಯಗಳು ಹಾಗೂ ಸಮಸ್ಯೆಗಳ ಕುರಿತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಮಾಲೋಚಿಸಿ ಅಗತ್ಯ ಗಮನ ಹರಿಸುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಿಶೇಷಾಧಿಕಾರಿ ಮುಜೀಬುಲ್ಲಾ ಜಫಾರಿ, ಕೆಎಂಡಿಸಿ ಅಧಿಕಾರಿ ಯಶೋಧರ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿನೇಂದ್ರ ಕೋಟ್ಯಾನ್, ಮಂಜುನಾಥ್, ವಕ್ಫ್ ಅಧಿಕಾರಿ ಮುಸ್ತಫಾ, ಅಬೂಬಕ್ಕರ್ ಕೈರಂಗಳ ಸೇರಿದಂತೆ ಇಲಾಖೆಯ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು

