ಮಂಗಳೂರು: ಕದಂಬಾಡಿ ರಾಮಯ್ಯ ಗೌಡರ ಪ್ರತಿಮೆ ಹಾಗೂ 75 ಮೀಟರ್ ಎತ್ತರದ ಧ್ವಜಸ್ತಂಭದ ಸುತ್ತಮುತ್ತಲಿನ ಪ್ರದೇಶವನ್ನು ಐತಿಹಾಸಿಕ ಮತ್ತು ಸಾಂಸ್ಕೃತಿಕ ಕೇಂದ್ರವಾಗಿ ಅಭಿವೃದ್ಧಿಪಡಿಸಲು ಅಗತ್ಯ ಅನುದಾನ ಬಿಡುಗಡೆ ಮಾಡಿ ಸೂಕ್ತ ಕ್ರಮ ಕೈಗೊಳ್ಳುವಂತೆ ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಅವರು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಮನವಿ ಮಾಡಿದ್ದಾರೆ.
ಕರ್ನಾಟಕದ ಸ್ವಾತಂತ್ರ್ಯ ಹೋರಾಟದ ಇತಿಹಾಸದಲ್ಲಿ 1837ರ ಅಮರ ಸುಳ್ಯ ದಂಗೆ ಮಹತ್ವದ ಸ್ಥಾನ ಪಡೆದಿದೆ. ಈ ಹೋರಾಟದಲ್ಲಿ ಕದಂಬಾಡಿ ರಾಮಯ್ಯ ಗೌಡರು ರೈತ ವೀರರನ್ನು ಸಂಘಟಿಸಿ ಬ್ರಿಟಿಷರ ವಿರುದ್ಧ ಹೋರಾಡಿ ಮಂಗಳೂರನ್ನು ವಶಪಡಿಸಿಕೊಂಡಿದ್ದರು. ಅಲ್ಲದೆ, ಬಾವುಟಗುಡ್ಡೆಯಲ್ಲಿ ಬ್ರಿಟಿಷರ ಧ್ವಜವನ್ನು ಕೆಳಗಿಳಿಸಿ ಕ್ರಾಂತಿಕಾರಿ ಧ್ವಜವನ್ನು ಹಾರಿಸಿದ ಐತಿಹಾಸಿಕ ಘಟನೆ ಈ ಪ್ರದೇಶದ ಮಹತ್ವವನ್ನು ಸಾರುತ್ತದೆ.
ಈ ಐತಿಹಾಸಿಕ ನೆನಪನ್ನು ಶಾಶ್ವತಗೊಳಿಸುವ ಹಾಗೂ ಮುಂದಿನ ಪೀಳಿಗೆಗೆ ಕದಂಬಾಡಿ ರಾಮಯ್ಯ ಗೌಡರ ಹೋರಾಟ ಮತ್ತು ಸಾಧನೆಗಳನ್ನು ಪರಿಚಯಿಸುವ ಉದ್ದೇಶದಿಂದ ಅವರ ಪ್ರತಿಮೆ ಹಾಗೂ ಮಂಗಳೂರಿನ ವಿವಿಧ ಭಾಗಗಳಿಂದ ಗೋಚರಿಸುವ 75 ಮೀಟರ್ ಎತ್ತರದ ಧ್ವಜಸ್ತಂಭವನ್ನು ನಿರ್ಮಿಸಲಾಗಿದೆ.
ಆದರೆ, ಧ್ವಜಸ್ತಂಭದ ಪಕ್ಕದಲ್ಲಿರುವ ಪ್ರದೇಶವು ಇನ್ನೂ ಸಮಗ್ರ ಅಭಿವೃದ್ಧಿ ಕಾಣಬೇಕಿದೆ. ಈ ಹಿನ್ನೆಲೆಯಲ್ಲಿ ಕದಂಬಾಡಿ ರಾಮಯ್ಯ ಗೌಡರ ಜೀವನ ಚರಿತ್ರೆ ಮತ್ತು 1837ರ ಸ್ವಾತಂತ್ರ್ಯ ಹೋರಾಟದ ಘಟನೆಗಳನ್ನು ಬಿಂಬಿಸುವ ಶಿಲ್ಪಕೃತಿಗಳು, ಭಿತ್ತಿಚಿತ್ರಗಳು ಹಾಗೂ ಮಾಹಿತಿ ಫಲಕಗಳನ್ನು ಅಳವಡಿಸಬೇಕು. ಸಾರ್ವಜನಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲು ಅನುಕೂಲವಾಗುವಂತೆ ರಂಗಮಂದಿರವನ್ನೂ ನಿರ್ಮಿಸಬೇಕು ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ಬಾವುಟಗುಡ್ಡೆಯ ಐತಿಹಾಸಿಕ ಮಹತ್ವವನ್ನು ಉಳಿಸಿ ಬೆಳೆಸುವುದರ ಜೊತೆಗೆ ಈ ಪ್ರದೇಶವನ್ನು ಪ್ರವಾಸಿಗರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಇತಿಹಾಸ ತಿಳಿಯುವ ಪ್ರಮುಖ ಕೇಂದ್ರವನ್ನಾಗಿ ರೂಪಿಸಲು ಸಮಗ್ರ ಅಭಿವೃದ್ಧಿ ಕಾಮಗಾರಿ ಕೈಗೊಳ್ಳುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಅಗತ್ಯ ಅನುದಾನ ಒದಗಿಸಿ ಅಭಿವೃದ್ಧಿ ಕಾರ್ಯಗಳಿಗೆ ಮುಂದಾಗಬೇಕು ಎಂದು ಮಂಜುನಾಥ್ ಭಂಡಾರಿ ಅವರು ಮನವಿ ಮಾಡಿದ್ದಾರೆ.
