ಮಂಗಳೂರು: ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸ್ವೀಕರಿಸಿದ ಅಖಿಲ ಭಾರತ ತುಳು ಒಕ್ಕೂಟದ ಅಧ್ಯಕ್ಷ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಹಾಗೂ ಹಿರಿಯ ರಾಜಕೀಯ ಮತ್ತು ಸಾಮಾಜಿಕ ಮುಖಂಡರಾದ ಎ.ಸಿ. ಭಂಡಾರಿಯವರನ್ನು ತುಳುನಾಡ ರಕ್ಷಣಾ ವೇದಿಕೆ (ರಿ.) ಮತ್ತು ತುಳುನಾಡ ಸೂರ್ಯ ಪತ್ರಿಕೆಯ ವತಿಯಿಂದ ಸಹಕಾರ ಸಪ್ತಾಹ–2026ರ ಪ್ರಯುಕ್ತ ನಡೆದ ಸಮಾರಂಭದಲ್ಲಿ ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು.
ತುಳು ಭಾಷೆ, ಸಾಹಿತ್ಯ, ಕಲೆ, ಸಂಸ್ಕೃತಿ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಲ್ಲಿಸಿರುವ ಗಣನೀಯ ಸೇವೆಯನ್ನು ಗುರುತಿಸಿ ಅವರಿಗೆ ಈ ಗೌರವ ಸಲ್ಲಿಸಲಾಯಿತು.

ತುಳುನಾಡಿನ ಭಾಷೆ, ಸಂಸ್ಕೃತಿ ಮತ್ತು ಪರಂಪರೆಯ ಉಳಿವು ಹಾಗೂ ಬೆಳವಣಿಗೆಗಾಗಿ ನಿರಂತರವಾಗಿ ಶ್ರಮಿಸುತ್ತಿರುವ ಎ.ಸಿ. ಭಂಡಾರಿಯವರು ವಿವಿಧ ಸಂಘಟನಾ ಹಾಗೂ ಸಾರ್ವಜನಿಕ ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿರುವ ಅವರು, ತುಳು ಭಾಷೆ ಮತ್ತು ಸಾಹಿತ್ಯದ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿದ್ದಾರೆ. ಅಖಿಲ ಭಾರತ ತುಳು ಒಕ್ಕೂಟದ ಅಧ್ಯಕ್ಷರಾಗಿ ತುಳುವರ ಸಂಘಟಿತ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜಕೀಯ ಕ್ಷೇತ್ರದಲ್ಲಿಯೂ ಸಕ್ರಿಯವಾಗಿ ಸೇವೆ ಸಲ್ಲಿಸಿರುವ ಅವರ ಬಹುಮುಖ ಸಾಧನೆಗೆ ಇದೀಗ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಗೌರವ ಲಭಿಸಿರುವುದು ತುಳುನಾಡಿನ ಜನತೆಗೆ ಹೆಮ್ಮೆಯ ಸಂಗತಿಯಾಗಿದೆ.
ತುಳುನಾಡ ರಕ್ಷಣಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷ ಯೋಗೀಶ್ ಶೆಟ್ಟಿ ಜಪ್ಪು ಅವರ ನೇತೃತ್ವದಲ್ಲಿ ನಡೆದ ಈ ಸಮಾರಂಭದಲ್ಲಿ ಸಹಕಾರಿ ಕ್ಷೇತ್ರದ ವಿವಿಧ ಸಾಧಕರಿಗೆ ‘ತೌಳವ ಸಹಕಾರಿ ಪ್ರಶಸ್ತಿ–2026’ ಪ್ರದಾನ ಮಾಡಲಾಯಿತು. ಇದೇ ಸಂದರ್ಭದಲ್ಲಿ ಎ.ಸಿ. ಭಂಡಾರಿಯವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಮೂಡುಬಿದಿರೆ ಜೈನಕಾಶಿಯ ಶ್ರೀ ದಿಗಂಬರ ಜೈನ ಮಠದ ಪರಮಪೂಜ್ಯ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿಯವರು ದೀಪ ಪ್ರಜ್ವಲಿಸುವ ಮೂಲಕ ಸಮಾರಂಭವನ್ನು ಉದ್ಘಾಟಿಸಿದರು.
ಡಿ.ಕೆ. ಗ್ರೂಪ್ ಆಫ್ ಕಂಪನೀಸ್ನ ಸಂಸ್ಥಾಪಕರು ಹಾಗೂ ಡಿ.ಕೆ. ಬಿಸಿನೆಸ್ ಆ್ಯಂಡ್ ಟೆಕ್ನಾಲಜಿ ಅಡ್ವೈಸರ್ಸ್ ಪ್ರೈವೇಟ್ ಲಿಮಿಟೆಡ್ನ ಆಡಳಿತ ನಿರ್ದೇಶಕರಾದ ಆಲ್ವಿನ್ ಜೋಯೆಲ್ ನೊರೊನ್ಹಾ ಅವರು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.
ಮಡೂರು ಶ್ರೀ ಶಿವದುರ್ಗಾಂಬಾ ಮಠದ ಶಿವಯೋಗಿ ದುರ್ಗಾನಂದ ಸ್ವಾಮೀಜಿ, ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್, ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಡಾ. ಪಿ.ಎಲ್. ಧರ್ಮ, ಅದಾನಿ ಗ್ರೂಪ್ನ ಅಧ್ಯಕ್ಷರು ಹಾಗೂ ನಿರ್ದೇಶಕರಾದ ಕಿಶೋರ್ ಆಳ್ವ, ಅಖಿಲ ಭಾರತ ತುಳು ಒಕ್ಕೂಟದ ಅಧ್ಯಕ್ಷ ಎ.ಸಿ. ಭಂಡಾರಿ, ಕಿರಣ್ ಬುಡ್ಲೆಗುತ್ತು, ತುಳು ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಆರ್. ಧನರಾಜ್, ದಾಸ್ ಪ್ರೋಮೋಷನ್ ಕೇರ್ ಟ್ರಸ್ಟ್ನ ಸ್ಥಾಪಕ ಅನಿಲ್ ದಾಸ್, ಗೋವಿಂದದಾಸ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ. ಆಶಾಲತಾ ಪಿ. ಉಪಸ್ಥಿತರಿದ್ದರು.
ಅಲ್ಲದೆ, ತುಳುನಾಡ ರಕ್ಷಣಾ ವೇದಿಕೆಯ ಉಡುಪಿ ಜಿಲ್ಲಾಧ್ಯಕ್ಷ ಫ್ರಾಂಕಿ ಡಿಸೋಜ ಕೊಳಲಗಿರಿ, ಸುರೇಂದ್ರ ಪೂಜಾರಿ ಹಾವಂಜೆ, ನಾಗಲಕ್ಷ್ಮಿ ಸುಬ್ರಹ್ಮಣ್ಯ ನಗರ, ಜಯ ಪೂಜಾರಿ ಲಕ್ಷ್ಮಿನಗರ ಸೇರಿದಂತೆ ಹಲವು ಗಣ್ಯರು, ಸಹಕಾರಿ ಕ್ಷೇತ್ರದ ಪ್ರತಿನಿಧಿಗಳು, ಸಂಘಟನೆಯ ಪದಾಧಿಕಾರಿಗಳು ಹಾಗೂ ಅಭಿಮಾನಿಗಳು ಭಾಗವಹಿಸಿದ್ದರು.
ತುಳುನಾಡಿನ ಭಾಷೆ, ಸಂಸ್ಕೃತಿ, ಪರಂಪರೆ ಮತ್ತು ಸಾಮಾಜಿಕ ಸಾಮರಸ್ಯದ ಆಶಯಗಳೊಂದಿಗೆ ಸಹಕಾರಿ ಕ್ಷೇತ್ರದ ಸಾಧಕರನ್ನು ಗುರುತಿಸಿ ಗೌರವಿಸುವ ಉದ್ದೇಶದಿಂದ ಆಯೋಜಿಸಲಾದ ಈ ಕಾರ್ಯಕ್ರಮವು ಸಹಕಾರದ ಮಹತ್ವದ ಜೊತೆಗೆ ತುಳುನಾಡಿನ ಸಾಧಕರಿಗೆ ಗೌರವ ಸಲ್ಲಿಸುವ ಅರ್ಥಪೂರ್ಣ ವೇದಿಕೆಯಾಗಿ ಮೂಡಿಬಂತು.

