ಬೆಂಗಳೂರು: ವಿಶ್ವದ ಅತಿದೊಡ್ಡ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯಗಳಲ್ಲಿ ಒಂದಾದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಆಶ್ರಯದಲ್ಲಿ ನಡೆಯಲಿರುವ ವೈದ್ಯಕೀಯ ಸಾಹಿತಿಗಳ ರಾಜ್ಯ ಮಟ್ಟದ ಎರಡನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಹಿರಿ-ಕಿರಿಯ ವೈದ್ಯ ಸಾಹಿತಿಗಳು, ಸಂಘಟಕರು ಹಾಗೂ ಚಿಂತಕರನ್ನೊಳಗೊಂಡ ಕಾರ್ಯಕಾರಿ ಸಮಿತಿಯನ್ನು ರಚಿಸಲಾಗಿದೆ.
ವೈದ್ಯಕೀಯ ಕ್ಷೇತ್ರದ ವಿವಿಧ ಪ್ರಕಾರಗಳ ಜ್ಞಾನ, ಅನುಭವ ಹಾಗೂ ಸಾಹಿತ್ಯವನ್ನು ಕನ್ನಡ ಭಾಷೆಯ ಮೂಲಕ ವಿದ್ಯಾರ್ಥಿಗಳು, ವೈದ್ಯರು ಮತ್ತು ಸಾರ್ವಜನಿಕರಿಗೆ ತಲುಪಿಸುವುದು ಸಮ್ಮೇಳನದ ಪ್ರಮುಖ ಉದ್ದೇಶವಾಗಿದೆ. ರಾಜ್ಯದ ಸುಮಾರು ೧,೫೫೦ ಆರೋಗ್ಯ ಶಿಕ್ಷಣ ಸಂಸ್ಥೆಗಳು, ೪ ಲಕ್ಷ ವಿದ್ಯಾರ್ಥಿಗಳು ಹಾಗೂ ೪೦ ಸಾವಿರ ಶಿಕ್ಷಕರಿಗೆ ಕನ್ನಡ ವೈದ್ಯಕೀಯ ಸಾಹಿತ್ಯವನ್ನು ತಲುಪಿಸುವ ಮಹತ್ವಾಕಾಂಕ್ಷೆಯ ಯೋಜನೆ ರೂಪಿಸಲಾಗಿದೆ.
ಇದರೊಂದಿಗೆ ವೈದ್ಯಕೀಯ ಶಿಕ್ಷಣವನ್ನು ಆಯಾ ಪ್ರಾದೇಶಿಕ ಭಾಷೆಗಳಲ್ಲಿ ನೀಡುವ ನಿಟ್ಟಿನಲ್ಲಿ ಕನ್ನಡದಲ್ಲಿಯೂ ಗುಣಮಟ್ಟದ ವೈದ್ಯಕೀಯ ಪಠ್ಯಪುಸ್ತಕಗಳನ್ನು ಸಿದ್ಧಪಡಿಸುವ ಕಾರ್ಯಕ್ಕೆ ಚಾಲನೆ ನೀಡುವ ಸಿದ್ಧತೆ ನಡೆಯುತ್ತಿದೆ. ವೈದ್ಯಕೀಯ ಜ್ಞಾನವನ್ನು ಮಾತೃಭಾಷೆಯಲ್ಲಿ ಸುಲಭವಾಗಿ ಅರ್ಥೈಸಿಕೊಳ್ಳಲು ಅನುಕೂಲವಾಗುವಂತೆ ಕನ್ನಡ ವೈದ್ಯಕೀಯ ಪಠ್ಯಪುಸ್ತಕಗಳ ರಚನೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವ ಉದ್ದೇಶವನ್ನು ಸಮ್ಮೇಳನ ಹೊಂದಿದೆ.


ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಆಶ್ರಯದಲ್ಲಿ ನಡೆಯಲಿರುವ ಈ ಪ್ರತಿಷ್ಠಿತ ರಾಜ್ಯ ಮಟ್ಟದ ಸಾಹಿತ್ಯ ಸಮ್ಮೇಳನದ ಆಯೋಜನಾ ಸಮಿತಿ ಅಧ್ಯಕ್ಷರಾಗಿ ಮೈಸೂರಿನ ಡಾ. ಯೋಗಣ್ಣ ಹಾಗೂ ಉಪಾಧ್ಯಕ್ಷರಾಗಿ ಕರಾವಳಿಯ ಡಾ. ಅಣ್ಣಯ್ಯ ಕುಲಾಲ್ ಉಳ್ತೂರು ಅವರನ್ನು ಆಯ್ಕೆ ಮಾಡಲಾಗಿದೆ.
ವೈದ್ಯಕೀಯ ಕ್ಷೇತ್ರದ ವಿವಿಧ ವಿಭಾಗಗಳ ತಜ್ಞರು, ವೈದ್ಯ ಸಾಹಿತಿಗಳು, ಶಿಕ್ಷಣ ತಜ್ಞರು, ಸಂಘಟಕರು ಹಾಗೂ ಚಿಂತಕರು ಒಂದೇ ವೇದಿಕೆಯಲ್ಲಿ ಸೇರಿ ಕನ್ನಡ ವೈದ್ಯಕೀಯ ಸಾಹಿತ್ಯದ ಬೆಳವಣಿಗೆ, ವೈದ್ಯಕೀಯ ಶಿಕ್ಷಣದಲ್ಲಿ ಕನ್ನಡದ ಬಳಕೆ ಹಾಗೂ ಜನಸಾಮಾನ್ಯರಿಗೆ ಆರೋಗ್ಯ ಜ್ಞಾನವನ್ನು ಕನ್ನಡದಲ್ಲಿ ತಲುಪಿಸುವ ಕುರಿತು ಚರ್ಚೆ ನಡೆಸಲಿದ್ದಾರೆ.

