ಉಡುಪಿ: ನವೆಂಬರ್ 26 : ರಾಜ್ಯದ ಆರೋಗ್ಯ ವ್ಯವಸ್ಥೆಯ ಬೆನ್ನೆಲುಬಾಗಿ ಹಗಲಿರುಳು ಸೇವೆ ಸಲ್ಲಿಸುತ್ತಿರುವ ಆಶಾ ಕಾರ್ಯಕರ್ತೆಯರ ಮಾಸಿಕ ಗೌರವಧನವನ್ನು ಕನಿಷ್ಠ ₹15,000ಕ್ಕೆ ಹೆಚ್ಚಿಸುವಂತೆ ಆಗ್ರಹಿಸಿ ತುಳುನಾಡ ರಕ್ಷಣಾ ವೇದಿಕೆ (ರಿ.) ಉಡುಪಿ ಜಿಲ್ಲಾ ಮಹಿಳಾ ಘಟಕದ ವತಿಯಿಂದ ಕರ್ನಾಟಕದ ಮುಖ್ಯಮಂತ್ರಿಗಳಿಗೆ ಉಡುಪಿ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಲಾಯಿತು.

ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿರುವ ಆಶಾ ಕಾರ್ಯಕರ್ತೆಯರು ತಮ್ಮ ನ್ಯಾಯಯುತ ಬೇಡಿಕೆಗಳ ಈಡೇರಿಕೆಗಾಗಿ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಕಳೆದ ಒಂದು ವಾರದಿಂದ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಆದರೆ, ಅವರ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರ ತಕ್ಷಣ ಸ್ಪಂದಿಸಬೇಕೆಂದು ವೇದಿಕೆ ಒತ್ತಾಯಿಸಿದೆ.
ರಾಜ್ಯದ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಆರೋಗ್ಯ ಇಲಾಖೆಯ ಪ್ರಮುಖ ಕೊಂಡಿಯಾಗಿ ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರು ಗರ್ಭಿಣಿಯರ ಆರೈಕೆ, ಹೆರಿಗೆ ಪೂರ್ವ ಮತ್ತು ನಂತರದ ಆರೋಗ್ಯ ಸೇವೆ, ಮಕ್ಕಳ ಲಸಿಕಾ ಕಾರ್ಯಕ್ರಮ, ತಾಯಿ ಮತ್ತು ಶಿಶು ಮರಣ ಪ್ರಮಾಣ ಕಡಿತ, ಕ್ಷಯರೋಗ, ಮಲೇರಿಯಾ, ಡೆಂಗ್ಯೂ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣ ಹಾಗೂ ಸಾರ್ವಜನಿಕ ಆರೋಗ್ಯ ಜಾಗೃತಿ ಮೂಡಿಸುವಂತಹ ಮಹತ್ವದ ಜವಾಬ್ದಾರಿಗಳನ್ನು ನಿರ್ವಹಿಸುತ್ತಿದ್ದಾರೆ. ಕೋವಿಡ್ ಸಾಂಕ್ರಾಮಿಕದಂತಹ ಸಂಕಷ್ಟದ ಸಂದರ್ಭದಲ್ಲಿಯೂ ತಮ್ಮ ಜೀವದ ಹಂಗು ತೊರೆದು ಜನರ ಆರೋಗ್ಯ ರಕ್ಷಣೆಗಾಗಿ ಸೇವೆ ಸಲ್ಲಿಸಿರುವುದು ಸ್ಮರಣೀಯ.
ಇಷ್ಟೆಲ್ಲಾ ಜವಾಬ್ದಾರಿಗಳನ್ನು ಹೊತ್ತು ಸಮಾಜದ ಆರೋಗ್ಯ ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಇಂದಿಗೂ ಸಮರ್ಪಕವಾದ ಮಾಸಿಕ ಗೌರವಧನ ದೊರೆಯದಿರುವುದು ವಿಷಾದನೀಯ. ದಿನನಿತ್ಯದ ಅಗತ್ಯ ವಸ್ತುಗಳ ಬೆಲೆ ಏರಿಕೆ, ಕುಟುಂಬ ನಿರ್ವಹಣೆ, ಮಕ್ಕಳ ಶಿಕ್ಷಣ, ಆರೋಗ್ಯ ವೆಚ್ಚ ಸೇರಿದಂತೆ ಹಲವು ಆರ್ಥಿಕ ಒತ್ತಡಗಳ ನಡುವೆ ಅಲ್ಪ ಗೌರವಧನದಲ್ಲಿ ಜೀವನ ಸಾಗಿಸುವುದು ಅವರಿಗೆ ಅತ್ಯಂತ ಕಷ್ಟಕರವಾಗಿದೆ.
ಇನ್ನೊಂದೆಡೆ, ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ನಡೆಸುತ್ತಿರುವ ಅಹೋರಾತ್ರಿ ಪ್ರತಿಭಟನೆಯಲ್ಲಿ ಆಶಾ ಕಾರ್ಯಕರ್ತೆಯರು ಎದುರಿಸುತ್ತಿರುವ ಪರಿಸ್ಥಿತಿ ಅತ್ಯಂತ ಕಳವಳಕಾರಿಯಾಗಿದೆ. ಸಮರ್ಪಕ ಆಹಾರ, ಕುಡಿಯುವ ನೀರು, ವಿಶ್ರಾಂತಿ ಹಾಗೂ ಮೂಲಭೂತ ಸೌಕರ್ಯಗಳ ಕೊರತೆಯ ನಡುವೆಯೇ ಕೊರೆಯುವ ಚಳಿ ಮತ್ತು ಮಳೆಯಲ್ಲೂ ಹೋರಾಟ ಮುಂದುವರಿಸಬೇಕಾದ ಅನಿವಾರ್ಯತೆ ಎದುರಾಗಿದೆ. ಕೆಲವು ಕಾರ್ಯಕರ್ತೆಯರು ತಮ್ಮ ಚಿಕ್ಕ ಮಕ್ಕಳನ್ನೂ ಪ್ರತಿಭಟನಾ ಸ್ಥಳಕ್ಕೆ ಕರೆತಂದಿದ್ದು, ಮಹಿಳೆಯರಿಗೆ ಅಗತ್ಯವಿರುವ ಪ್ರತ್ಯೇಕ ಶೌಚಾಲಯ ಹಾಗೂ ನೈರ್ಮಲ್ಯ ವ್ಯವಸ್ಥೆಗಳ ಕೊರತೆಯಿಂದ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ವಿಶೇಷವಾಗಿ ಋತುಚಕ್ರದ ಸಂದರ್ಭದಲ್ಲಿ ಮಹಿಳೆಯರು ಎದುರಿಸುತ್ತಿರುವ ಆರೋಗ್ಯ ಮತ್ತು ಸ್ವಚ್ಛತೆಯ ಸಮಸ್ಯೆಗಳು ಅವರ ಸಂಕಷ್ಟವನ್ನು ಮತ್ತಷ್ಟು ಹೆಚ್ಚಿಸಿವೆ.
ಜನರ ಆರೋಗ್ಯಕ್ಕಾಗಿ ನಿರಂತರವಾಗಿ ದುಡಿಯುವ ಆಶಾ ಕಾರ್ಯಕರ್ತೆಯರೇ ತಮ್ಮ ಮೂಲಭೂತ ಬೇಡಿಕೆಗಳಿಗಾಗಿ ಬೀದಿಗಿಳಿದು ಹೋರಾಟ ನಡೆಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿರುವುದು ಗಂಭೀರವಾಗಿ ಪರಿಗಣಿಸಬೇಕಾದ ವಿಚಾರವಾಗಿದೆ.
ಈ ಹಿನ್ನೆಲೆಯಲ್ಲಿ ರಾಜ್ಯದ ಮುಖ್ಯಮಂತ್ರಿಗಳು ಕೂಡಲೇ ಮಧ್ಯಪ್ರವೇಶಿಸಿ ಪ್ರತಿಭಟನಾ ನಿರತ ಆಶಾ ಕಾರ್ಯಕರ್ತೆಯರ ಪ್ರತಿನಿಧಿಗಳೊಂದಿಗೆ ಮಾತುಕತೆ ನಡೆಸಬೇಕು. ಅವರ ನ್ಯಾಯಯುತ ಬೇಡಿಕೆಗಳನ್ನು ಆಲಿಸಿ, ಮಾಸಿಕ ಗೌರವಧನವನ್ನು ಕನಿಷ್ಠ ₹15,000ಕ್ಕೆ ಹೆಚ್ಚಿಸಬೇಕು. ಪ್ರತಿಭಟನಾ ಸ್ಥಳದಲ್ಲಿ ತಕ್ಷಣವೇ ಸಮರ್ಪಕ ಆಹಾರ, ಕುಡಿಯುವ ನೀರು, ವೈದ್ಯಕೀಯ ನೆರವು, ವಿಶ್ರಾಂತಿ ಮತ್ತು ಮಹಿಳೆಯರಿಗೆ ಅಗತ್ಯವಾದ ಶೌಚಾಲಯ ಹಾಗೂ ನೈರ್ಮಲ್ಯ ಸೌಲಭ್ಯಗಳನ್ನು ಕಲ್ಪಿಸಬೇಕು. ಆಶಾ ಕಾರ್ಯಕರ್ತೆಯರ ಸೇವೆ ಮತ್ತು ತ್ಯಾಗಕ್ಕೆ ತಕ್ಕ ಗೌರವ ಹಾಗೂ ಆರ್ಥಿಕ ಭದ್ರತೆ ಒದಗಿಸಬೇಕೆಂದು ತುಳುನಾಡ ರಕ್ಷಣಾ ವೇದಿಕೆ ಮನವಿಯಲ್ಲಿ ಆಗ್ರಹಿಸಿದೆ.

ಆಶಾ ಕಾರ್ಯಕರ್ತೆಯರ ಬೇಡಿಕೆಗಳು ಕೇವಲ ವೇತನ ಹೆಚ್ಚಳಕ್ಕೆ ಸೀಮಿತವಾಗಿಲ್ಲ; ಅವರ ಗೌರವಯುತ ಬದುಕು, ಕುಟುಂಬದ ಭದ್ರತೆ ಮತ್ತು ಆರೋಗ್ಯ ಸೇವೆಯ ಗುಣಮಟ್ಟಕ್ಕೆ ಸಂಬಂಧಿಸಿದ ಮಹತ್ವದ ವಿಚಾರಗಳಾಗಿವೆ. ಸರ್ಕಾರ ವಿಳಂಬ ಮಾಡದೆ ಮಾನವೀಯ ನೆಲೆಯಲ್ಲಿ ಸ್ಪಂದಿಸಿ ಅವರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕೆಂದು ವೇದಿಕೆ ಒತ್ತಾಯಿಸಿದೆ. ತುಳುನಾಡ ರಕ್ಷಣಾ ವೇದಿಕೆ ನಿಯೋಗದಲ್ಲಿ ಉಡುಪಿ ಜಿಲ್ಲಾದ್ಯಕ್ಷ ಫ್ರ್ಯಾಂಕಿ ಡಿಸೋಜ ಕೊಳಲಗಿರಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಂದ್ರ ಪೂಜಾರಿ ,ಕಾರ್ಮಿಕ ಘಟಕ ಜಿಲ್ಲಾದ್ಯಕ್ಷ ಜಯ ಪೂಜಾರಿ ಲಕ್ಷ್ಮಿ ನಗರ, ಜಿಲ್ಲಾ ಮಹಿಳಾ ಘಟಕ ಅದ್ಯಕ್ಷೆ ನಾಗಲಕ್ಷ್ಮಿ ಸುಬ್ರಮಣ್ಯ ನಗರ , ಕಾಪು ತಾಲೂಕು ಮಹಿಳಾ ಘಟಕ ಅದ್ಯಕ್ಷೆ ಅನುಸೂಯ ಶೆಟ್ಟಿ , ಮುಖಂಡರುಗಳಾದ ಹಾವಂಜೆ ರವಿ, ರಮೇಶ್ ಹಲವರು ಮುಖಂಡರು ಉಪಸ್ಥಿದ್ದರು

