ಉಡುಪಿ: ಆಯುಷ್ ವೈದ್ಯರು ತಮ್ಮ ವ್ಯಾಸಂಗದ ಅವಧಿಯಲ್ಲಿ ಪಡೆದುಕೊಂಡ ತರಬೇತಿ ಹಾಗೂ ಅರ್ಹತೆಯ ಆಧಾರದ ಮೇಲೆ ಅಲೋಪಥಿ ಸೇವೆಗೆ ಸಂಬಂಧಿಸಿದ ವೈದ್ಯಕೀಯ ಪದ್ಧತಿಗಳ ಮೂಲಕ ಚಿಕಿತ್ಸೆ ನೀಡಲು ಕಾನೂನಿನಲ್ಲಿ ಸ್ಪಷ್ಟ ಅವಕಾಶವಿದೆ ಎಂದು ತುಳುನಾಡ ರಕ್ಷಣಾ ವೇದಿಕೆ ವೈದರ ಘಟಕದ ರಾಜ್ಯ ಸಂಘಟನಾ ಕಾರ್ಯದರ್ಶಿ ಡಾ. ರವೀಂದ್ರ ತಿಳಿಸಿದ್ದಾರೆ.
ಇಂತಹ ಚಿಕಿತ್ಸೆಯನ್ನು ನೀಡುತ್ತಿರುವ ಆಯುಷ್ ವೈದ್ಯರ ವಿರುದ್ಧ ಯಾವುದೇ ರೀತಿಯ ಕಾನೂನು ಕ್ರಮ ಕೈಗೊಳ್ಳಬಾರದು ಎಂದು ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿರುವುದನ್ನು ಸ್ಮರಿಸಿದರು. ಸುಪ್ರೀಂ ಕೋರ್ಟ್ ಆದೇಶದ ಅನ್ವಯ, ಅರ್ಹತೆ ಹಾಗೂ ತರಬೇತಿ ವ್ಯಾಪ್ತಿಯೊಳಗೆ ಸೇವೆ ಸಲ್ಲಿಸುವ ಆಯುಷ್ ವೈದ್ಯರ ವಿರುದ್ಧ ದೌರ್ಜನ್ಯ ಅಥವಾ ಅನಗತ್ಯ ಕಾನೂನು ಕ್ರಮ ಕೈಗೊಳ್ಳುವುದು ನ್ಯಾಯಾಂಗ ಅವಮಾನಕ್ಕೆ ಒಳಪಡುವ ವಿಷಯವಾಗುತ್ತದೆ ಎಂದು ಎಚ್ಚರಿಸಿದರು.
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕೆಲವು ಅಧಿಕಾರಿಗಳು ಹಾಗೂ ಸಂಘಟನೆಗಳು ರಾಜಕೀಯ ಪ್ರೇರಿತವಾಗಿ ಆಯುಷ್ ವೈದ್ಯರನ್ನು ಗುರಿಯಾಗಿಸಿಕೊಂಡು ತಂತ್ರಗಳನ್ನು ರೂಪಿಸುತ್ತಿರುವುದು ಗಮನಕ್ಕೆ ಬಂದಿದೆ. ಇದು ವೈದ್ಯಕೀಯ ಸೇವಾ ವಲಯದಲ್ಲಿ ಅನಗತ್ಯ ಗೊಂದಲ ಉಂಟುಮಾಡುವುದಲ್ಲದೆ, ಸಾರ್ವಜನಿಕ ಆರೋಗ್ಯ ಸೇವೆಗೆ ಧಕ್ಕೆಯುಂಟುಮಾಡುವ ಸಾಧ್ಯತೆ ಇದೆ ಎಂದು ಅವರು ಅಭಿಪ್ರಾಯಪಟ್ಟರು.
ಆಯುಷ್ ವೈದ್ಯರು ಗ್ರಾಮೀಣ ಹಾಗೂ ಹಿಂದುಳಿದ ಪ್ರದೇಶಗಳಲ್ಲಿ ಮಹತ್ವದ ಆರೋಗ್ಯ ಸೇವೆ ಸಲ್ಲಿಸುತ್ತಿದ್ದು, ಅವರ ಸೇವೆಯನ್ನು ಪ್ರಶ್ನಿಸುವ ಬದಲು ಸರ್ಕಾರವು ಸ್ಪಷ್ಟ ಮಾರ್ಗಸೂಚಿಗಳನ್ನು ನೀಡಬೇಕು. ವೈದ್ಯಕೀಯ ಕ್ಷೇತ್ರದಲ್ಲಿ ಸಮನ್ವಯತೆ ಮತ್ತು ಪರಸ್ಪರ ಗೌರವ ಮುಖ್ಯವಾಗಿದ್ದು, ಯಾವುದೇ ಅಧಿಕಾರಿಗಳು ಸುಪ್ರೀಂ ಕೋರ್ಟ್ ಆದೇಶವನ್ನು ಮೀರಿ ಕ್ರಮ ಕೈಗೊಂಡರೆ ಅದು ನ್ಯಾಯಾಂಗ ನಿಂದನೆಗೆ ಸಮಾನವಾಗುತ್ತದೆ ಎಂದು ಹೇಳಿದರು.
ಈ ಕುರಿತು ರಾಜ್ಯ ಸರ್ಕಾರ ಹಾಗೂ ಸಂಬಂಧಿತ ಇಲಾಖೆಗಳು ತಕ್ಷಣ ಸ್ಪಷ್ಟನೆ ನೀಡಿ ಆಯುಷ್ ವೈದ್ಯರ ಹಿತಾಸಕ್ತಿಯನ್ನು ಕಾಪಾಡಬೇಕು ಎಂದು ಅವರು ಆಗ್ರಹಿಸಿದರು.




