ಉಡುಪಿ, ಮೇ 22: ಉಡುಪಿ ಜಿಲ್ಲೆಯ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೊಡವೂರು ಸಮೀಪದ ಗರಡಿಮಜಲಿನಲ್ಲಿ ನೂತನ ಬಾವಿ ನಿರ್ಮಾಣ ಕಾಮಗಾರಿ ವೇಳೆ ಮಣ್ಣು ಕುಸಿದು ಕಾರ್ಮಿಕನೊಬ್ಬ ಮೃತಪಟ್ಟ ದಾರುಣ ಘಟನೆ ಗುರುವಾರ ಸಂಭವಿಸಿದೆ.
ಮೃತ ಕಾರ್ಮಿಕನನ್ನು ಕೊಪ್ಪಳ ಮೂಲದ ರಮೇಶ್ ಎಂದು ಗುರುತಿಸಲಾಗಿದೆ. ಘಟನೆಯ ವೇಳೆ ಇನ್ನೊಬ್ಬ ಕಾರ್ಮಿಕ ಕೂಡ ಮಣ್ಣಿನಡಿ ಸಿಲುಕಿಕೊಂಡಿದ್ದರೂ, ಸ್ಥಳೀಯರು ಹಾಗೂ ರಕ್ಷಣಾ ಸಿಬ್ಬಂದಿಗಳ ತಕ್ಷಣದ ಕಾರ್ಯಾಚರಣೆಯಿಂದ ಅವರನ್ನು ಸುರಕ್ಷಿತವಾಗಿ ಮೇಲಕ್ಕೆತ್ತಲಾಗಿದೆ ಎಂದು ತಿಳಿದು ಬಂದಿದೆ.
ಮಾಹಿತಿಯ ಪ್ರಕಾರ, ಗರಡಿಮಜಲು ಪ್ರದೇಶದಲ್ಲಿ ಹೊಸ ಬಾವಿ ನಿರ್ಮಾಣ ಕಾಮಗಾರಿ ನಡೆಯುತ್ತಿತ್ತು. ಸುಮಾರು ಏಳೆಂಟು ಅಡಿ ಆಳದ ಹೊಂಡದಲ್ಲಿ ಕಾರ್ಮಿಕರು ಕೆಲಸ ನಿರ್ವಹಿಸುತ್ತಿದ್ದಾಗ ಏಕಾಏಕಿ ಮರಳು ಹಾಗೂ ಮಣ್ಣು ಕುಸಿದಿದೆ. ಪರಿಣಾಮ ಇಬ್ಬರು ಕಾರ್ಮಿಕರು ಮಣ್ಣಿನಡಿ ಸಿಲುಕಿಕೊಂಡಿದ್ದಾರೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಮಲ್ಪೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ತಕ್ಷಣ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದರು. ಸ್ಥಳೀಯರು, ಪೊಲೀಸ್ ಸಿಬ್ಬಂದಿಗಳು ಹಾಗೂ ಸಾರ್ವಜನಿಕರ ಸಹಕಾರದೊಂದಿಗೆ ಮಣ್ಣು ತೆರವುಗೊಳಿಸುವ ಕಾರ್ಯಾಚರಣೆ ನಡೆಸಲಾಯಿತು.
ಹೊಂಡದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಣ್ಣು ತುಂಬಿಕೊಂಡಿದ್ದರಿಂದ ರಕ್ಷಣಾ ಕಾರ್ಯಾಚರಣೆ ಕಷ್ಟಕರವಾಗಿತ್ತು. ಅಗ್ನಿಶಾಮಕ ದಳದ ಸಿಬ್ಬಂದಿಗಳು ಹರಸಾಹಸ ಪಟ್ಟು ಮಣ್ಣು ತೆರವುಗೊಳಿಸಿದರೂ, ರಮೇಶ್ ಅವರನ್ನು ಜೀವಂತವಾಗಿ ರಕ್ಷಿಸಲು ಸಾಧ್ಯವಾಗಲಿಲ್ಲ. ಬಳಿಕ ಮೃತದೇಹವನ್ನು ಮೇಲಕ್ಕೆತ್ತಿ ಮುಂದಿನ ಕ್ರಮಕ್ಕಾಗಿ ಆಸ್ಪತ್ರೆಗೆ ರವಾನಿಸಲಾಯಿತು.
ಘಟನಾ ಸ್ಥಳಕ್ಕೆ ಮಲ್ಪೆ ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಈ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದ್ದು, ನಿರ್ಮಾಣ ಕಾಮಗಾರಿಗಳ ವೇಳೆ ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.





