ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ತ್ರಾಸಿ ಬೀಚ್ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಶಿವಮೊಗ್ಗದ ಕಾಲೇಜು ವಿದ್ಯಾರ್ಥಿಗಳ ಪ್ರವಾಸ ದಾರುಣ ಅಂತ್ಯ ಕಂಡಿದೆ. ಈ ಅಪಘಾತದಲ್ಲಿ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಶಿವಮೊಗ್ಗದ ಶಂಕರಘಟ್ಟದಲ್ಲಿರುವ ರಂಭಾಪುರಿ ಕಾಲೇಜಿನ 24 ಪುರುಷ ಹಾಗೂ 23 ಮಹಿಳಾ ವಿದ್ಯಾರ್ಥಿಗಳು ಕೆಲವು ಉಪನ್ಯಾಸಕರೊಂದಿಗೆ ಕರಾವಳಿ ಪ್ರವಾಸಕ್ಕೆ ಬಂದಿದ್ದರು. ಮುರುಡೇಶ್ವರ ದರ್ಶನ ಮುಗಿಸಿ ಉಡುಪಿಯತ್ತ ತೆರಳುತ್ತಿದ್ದ ವೇಳೆ, ತ್ರಾಸಿ ಬೀಚ್ ಸಮೀಪ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ನಿಂತಿದ್ದ ಟ್ಯಾಂಕರ್ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಬಸ್ ಮುಂದಕ್ಕೆ ಜಾರಿ ಪಕ್ಕದಲ್ಲಿದ್ದ ಟ್ರಕ್ಗೂ ಅಪ್ಪಳಿಸಿದೆ.
ಅಪಘಾತದ ಭೀಕರತೆಗೆ ಬಸ್ಸಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಬಸ್ಸಿನಲ್ಲಿ ಒಟ್ಟು 47 ಮಂದಿ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ.
ಗಾಯಗೊಂಡ ವಿದ್ಯಾರ್ಥಿಗಳನ್ನು ತಕ್ಷಣ ಕುಂದಾಪುರದ ವಿವಿಧ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಘಟನೆ ನಡೆದ ತಕ್ಷಣ ಸ್ಥಳೀಯರು ಹಾಗೂ ಪೊಲೀಸರು ರಕ್ಷಣಾ ಕಾರ್ಯಾಚರಣೆಗೆ ಧಾವಿಸಿ, ಗಾಯಾಳುಗಳನ್ನು ಬಸ್ಸಿನಿಂದ ಹೊರತೆಗೆದು ಆಸ್ಪತ್ರೆಗೆ ಸಾಗಿಸಲು ಮಹತ್ವದ ಸಹಕಾರ ನೀಡಿದ್ದಾರೆ.
ಈ ಘಟನೆ ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಾಲಕನ ನಿರ್ಲಕ್ಷ್ಯವೇ ಅಥವಾ ತಾಂತ್ರಿಕ ದೋಷವೇ ಅಪಘಾತಕ್ಕೆ ಕಾರಣ ಎಂಬುದರ ಕುರಿತು ತನಿಖೆ ಮುಂದುವರಿದಿದೆ.
ವಿದ್ಯಾರ್ಥಿಗಳ ಸಾವು ಹಾಗೂ ಗಾಯಾಳುಗಳ ವಿಚಾರ ತಿಳಿಯುತ್ತಿದ್ದಂತೆ ಪೋಷಕರು ಮತ್ತು ಕಾಲೇಜು ವಲಯದಲ್ಲಿ ಆತಂಕ ಮತ್ತು ದುಃಖದ ವಾತಾವರಣ ನಿರ್ಮಾಣವಾಗಿದೆ.

