ಮೂಡುಬಿದಿರೆ, ಆ. 9: ತುಳು ಭಾಷೆ, ಸಾಹಿತ್ಯ, ಸಂಸ್ಕೃತಿ ಹಾಗೂ ಪರಂಪರೆಯ ಸಂರಕ್ಷಣೆ ಮತ್ತು ಬೆಳವಣಿಗೆಗೆ ನಿರಂತರವಾಗಿ ಶ್ರಮಿಸುತ್ತಿರುವ ತುಳು ಕೂಟ (ರಿ.) ಬೆದ್ರ ಇದರ ಮುಂದಿನ ಎರಡು ವರ್ಷಗಳ ಅವಧಿಗೆ ನೂತನ ಪದಾಧಿಕಾರಿಗಳನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.
ತುಳು ಕೂಟ ಬೆದ್ರದ ನಿರ್ಗಮನ ಅಧ್ಯಕ್ಷ ಹೆಚ್. ಧನಕೀರ್ತಿ ಬಲಿಪ ಅವರ ಅಧ್ಯಕ್ಷತೆಯಲ್ಲಿ ಕನ್ನಡ ಭವನದಲ್ಲಿ ಭಾನುವಾರ ನಡೆದ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು.
ನೂತನ ಅಧ್ಯಕ್ಷರಾಗಿ ತುಳು ಸಾಹಿತಿ ಜಯಂತಿ ಎಸ್. ಬಂಗೇರ, ಕಾರ್ಯದರ್ಶಿಯಾಗಿ ಚೇತನಾ ಹೆಗ್ಡೆ ಆಯ್ಕೆಯಾಗಿದ್ದಾರೆ.
ಉಪಾಧ್ಯಕ್ಷರಾಗಿ ಶ್ವೇತಾ ಜೈನ್, ಜತೆ ಕಾರ್ಯದರ್ಶಿಯಾಗಿ ಸದಾನಂದ ನಾರಾವಿ ಹಾಗೂ ಕೋಶಾಧಿಕಾರಿಯಾಗಿ ಜಿನೇಂದ್ರ ಜೈನ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಸಭೆಯ ಆರಂಭದಲ್ಲಿ ಜತೆ ಕಾರ್ಯದರ್ಶಿ ಸದಾನಂದ ನಾರಾವಿ ಸ್ವಾಗತಿಸಿದರು. ನಿರ್ಗಮನ ಕಾರ್ಯದರ್ಶಿ ವೇಣುಗೋಪಾಲ್ ಶೆಟ್ಟಿ ವಾರ್ಷಿ ವಾರ್ಷಿಕ ವರದಿಯನ್ನು ಮಂಡಿಸಿದರು. ಕೋಶಾಧಿಕಾರಿ ಸುಭಾಶ್ಚಂದ್ರ ಚೌಟ ಸಂಸ್ಥೆಯ ಖರ್ಚು-ವೆಚ್ಚದ ವಿವರಗಳನ್ನು ಸಭೆಯ ಮುಂದಿಟ್ಟರು.
ಸಭೆಯಲ್ಲಿ ತುಳು ಕೂಟ ಬೆದ್ರದ ಸ್ಥಾಪಕ ಅಧ್ಯಕ್ಷ ಚಂದ್ರಹಾಸ ದೇವಾಡಿಗ ಹಾಗೂ ನಿರ್ಗಮನ ಗೌರವಾಧ್ಯಕ್ಷ ಎಂ. ಬಾಹುಬಲಿ ಪ್ರಸಾದ್ ಉಪಸ್ಥಿತರಿದ್ದರು.
ನೂತನ ಪದಾಧಿಕಾರಿಗಳ ಆಯ್ಕೆಯ ಬಳಿಕ ಮಾತನಾಡಿದ ಸದಸ್ಯರು, ತುಳು ಭಾಷೆ ಹಾಗೂ ತುಳುನಾಡಿನ ಶ್ರೀಮಂತ ಸಂಸ್ಕೃತಿ, ಆಚಾರ-ವಿಚಾರ ಮತ್ತು ಪರಂಪರೆಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ನಿಟ್ಟಿನಲ್ಲಿ ತುಳು ಕೂಟದ ಚಟುವಟಿಕೆಗಳನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಮುಂದುವರಿಸುವ ಆಶಯ ವ್ಯಕ್ತಪಡಿಸಿದರು.
ಮುಂದಿನ ಎರಡು ವರ್ಷಗಳ ಅವಧಿಯಲ್ಲಿ ತುಳು ಭಾಷೆ, ಸಾಹಿತ್ಯ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಿಗೆ ಹೆಚ್ಚಿನ ಆದ್ಯತೆ ನೀಡಿ, ಯುವಜನರನ್ನು ಸಂಘಟನೆಯೊಂದಿಗೆ ಹೆಚ್ಚಿನ ಸಂಖ್ಯೆಯಲ್ಲಿ ಸಂಪರ್ಕಿಸುವ ಮೂಲಕ ತುಳು ಕೂಟ ಬೆದ್ರವನ್ನು ಮತ್ತಷ್ಟು ಕ್ರಿಯಾಶೀಲಗೊಳಿಸುವ ನಿರೀಕ್ಷೆ ವ್ಯಕ್ತವಾಗಿದೆ.

