ನವದೆಹಲಿ, ಜೂನ್ 3: ದೆಹಲಿಯ ಮಾಳವೀಯ ನಗರದ ಹೌಜ್ ರಾಣಿ ಪ್ರದೇಶದಲ್ಲಿರುವ ಖಾಸಗಿ ಹೋಟೆಲೊಂದರಲ್ಲಿ ಬುಧವಾರ ಬೆಳಗ್ಗೆ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ವಿದೇಶಿಯರು ಸೇರಿದಂತೆ 21 ಮಂದಿ ದುರ್ಮರಣ ಹೊಂದಿದ್ದು, 30ಕ್ಕೂ ಹೆಚ್ಚು ಮಂದಿಯನ್ನು ರಕ್ಷಿಸಲಾಗಿದೆ.
ಬೆಳಗ್ಗೆ ಸುಮಾರು 8.50 ಗಂಟೆಯ ವೇಳೆಗೆ ಐದು ಅಂತಸ್ತಿನ ಹೋಟೆಲ್ನ ನೆಲಮಾಳಿಗೆಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲೇ ಹೊಗೆ ಮತ್ತು ಜ್ವಾಲೆಗಳು ಕಟ್ಟಡದ ವಿವಿಧ ಭಾಗಗಳಿಗೆ ವ್ಯಾಪಿಸಿವೆ. ಪ್ರಾಣ ಉಳಿಸಿಕೊಳ್ಳಲು ಕೆಲವರು ಕಟ್ಟಡದಿಂದ ಕೆಳಗೆ ಹಾರಿರುವ ಘಟನೆ ಕೂಡ ವರದಿಯಾಗಿದೆ.
ಮಾಹಿತಿ ತಿಳಿದ ತಕ್ಷಣ ದೆಹಲಿ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ಎರಡು ವಾಟರ್ ಎಂಜಿನ್ಗಳು, ಎರಡು ಬೌಸರ್ಗಳು ಹಾಗೂ ಒಂದು ತ್ವರಿತ ಪ್ರತಿಕ್ರಿಯೆ ವಾಹನದ ಸಹಾಯದಿಂದ ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಯಿತು. ಹಲವು ಗಂಟೆಗಳ ಶ್ರಮದ ಬಳಿಕ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ.
ಸುಮಾರು 25 ಕೊಠಡಿಗಳನ್ನು ಹೊಂದಿರುವ ಈ ಹೋಟೆಲ್ನಲ್ಲಿ ಅವಘಡ ಸಂಭವಿಸಿದ ವೇಳೆ 50ಕ್ಕೂ ಹೆಚ್ಚು ಮಂದಿ ತಂಗಿದ್ದರು ಎಂದು ತಿಳಿದುಬಂದಿದೆ. ಇವರಲ್ಲಿ ಬಹುತೇಕರು ವೈದ್ಯಕೀಯ ಚಿಕಿತ್ಸೆಗಾಗಿ ಭಾರತಕ್ಕೆ ಆಗಮಿಸಿದ್ದ ವಿದೇಶಿ ಪ್ರಜೆಗಳಾಗಿದ್ದರು ಎನ್ನಲಾಗಿದೆ.
ಅಗ್ನಿಶಾಮಕ ದಳದ ಸಿಬ್ಬಂದಿಯೊಂದಿಗೆ ಸ್ಥಳೀಯ ನಿವಾಸಿಗಳು ಹಾಗೂ ಹೋಟೆಲ್ ಸಿಬ್ಬಂದಿಯೂ ರಕ್ಷಣಾ ಕಾರ್ಯದಲ್ಲಿ ಭಾಗವಹಿಸಿದ್ದು, ಒಳಗೆ ಸಿಲುಕಿಕೊಂಡಿದ್ದ ಅನೇಕ ಮಂದಿಯನ್ನು ಸುರಕ್ಷಿತವಾಗಿ ಹೊರತೆಗೆದಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಈ ದುರಂತದ ಬಗ್ಗೆ ಸಂತಾಪ ಸೂಚಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಮೃತರ ಕುಟುಂಬಗಳಿಗೆ ತಲಾ ₹2 ಲಕ್ಷ ಹಾಗೂ ಗಾಯಾಳುಗಳಿಗೆ ತಲಾ ₹50 ಸಾವಿರ ಪರಿಹಾರ ಘೋಷಿಸಿದ್ದಾರೆ.
“ದೆಹಲಿ ಮಾಳವೀಯ ನಗರದಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಅಮೂಲ್ಯ ಜೀವಗಳು ಕಳೆದುಹೋಗಿರುವುದು ಅತ್ಯಂತ ದುಃಖಕರ ಸಂಗತಿ. ಮೃತರ ಕುಟುಂಬಗಳಿಗೆ ನನ್ನ ಆಳವಾದ ಸಂತಾಪಗಳು. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ. ಸಂತ್ರಸ್ತರಿಗೆ ಅಗತ್ಯವಿರುವ ಎಲ್ಲಾ ನೆರವು ಮತ್ತು ಚಿಕಿತ್ಸೆಯನ್ನು ಒದಗಿಸಲು ಅಧಿಕಾರಿಗಳು ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ” ಎಂದು ಪ್ರಧಾನ ಮಂತ್ರಿ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.
ಅವಘಡದ ನಿಖರ ಕಾರಣವನ್ನು ಪತ್ತೆಹಚ್ಚಲು ಅಧಿಕಾರಿಗಳು ತನಿಖೆ ಆರಂಭಿಸಿದ್ದು, ಸುರಕ್ಷತಾ ಕ್ರಮಗಳ ಉಲ್ಲಂಘನೆ ನಡೆದಿದೆಯೇ ಎಂಬುದರ ಕುರಿತು ಪರಿಶೀಲನೆ ನಡೆಯುತ್ತಿದೆ.






