ಭೋಪಾಲ್: ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಖಾಸಗಿ ಬಸ್ಸೊಂದು 50 ಅಡಿ ಎತ್ತರದ ಸೇತುವೆಯಿಂದ ಉರುಳಿ ಬಿದ್ದ ಪರಿಣಾಮ 15 ಮಂದಿ ಮೃತಪಟ್ಟಿದ್ದು, ಕನಿಷ್ಠ 25 ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಇಂದು (ಮೇ 9) ಮಧ್ಯಪ್ರದೇಶದ ಖಾರ್ಗೋನ್‌ನಲ್ಲಿ ನಡೆದಿದೆ.
ಇನ್ನೂ ಅಪಘಾತ ನಡೆದ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಘಟನೆಯ ಬಗ್ಗೆ ಆಘಾತ ವ್ಯಕ್ತಪಡಿಸಿದ್ದು, ಮೃತಪಟ್ಟವರಿಗೆ ಸಂತಾಪ ಸೂಚಿಸಿದ್ದಾರೆ. ಮೃತರ ಕುಟಂಬಕ್ಕೆ 5 ಲಕ್ಷ ರೂಪಾಯಿ, ಗಂಭೀರವಾಗಿ ಗಾಯಗೊಂಡವರಿಗೆ 50,000 ರೂಪಾಯಿ ಮತ್ತು ಸಣ್ಣಪುಟ್ಟ ಗಾಯಗಳಾಗಿರುವವರಿಗೆ 25,000 ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರ ಚಿಕಿತ್ಸಾ ವೆಚ್ಚವನ್ನು ರಾಜ್ಯ ಸರ್ಕಾರವೇ ಭರಿಸಲಿದೆ ಎಂದು ಘೋಷಣೆ ಮಾಡಿದ್ದಾರೆ. ಇಂದೋರ್‌ಗೆ ತೆರಳುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಡೊಂಗರ್‌ಗಾಂವ್ ಪ್ರದೇಶದಲ್ಲಿ ಸೇತುವೆಯಿಂದ ಕೆಳಗೆ ಬಿದ್ದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.